
ಪಂಚಾಯತ್ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಚಿವ ಸಂಪುಟ ಹಸಿರು ನಿಶಾನೆ
ಜಿಪಂ, ತಾಪಂ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ, ಶುಚಿ ಯೋಜನೆ ಮತ್ತು AI ತಂತ್ರಾಂಶ ಅಳವಡಿಕೆ ಕುರಿತ ಪೂರ್ಣ ವಿವರ ಇಲ್ಲಿದೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಗುರುವಾರ ಸಂಜೆ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಚುನಾವಣಾ ವ್ಯವಸ್ಥೆ ಹಾಗೂ ಸಾರ್ವಜನಿಕ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಈ ಸಭೆಯ ಅತ್ಯಂತ ಪ್ರಮುಖ ನಿರ್ಧಾರವೆಂದರೆ "ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2026"ಕ್ಕೆ ನೀಡಿರುವ ಅನುಮೋದನೆ.
ಇದರ ಅನ್ವಯ, ಇನ್ನು ಮುಂದೆ ರಾಜ್ಯದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಇವಿಎಂ ಯಂತ್ರಗಳ ಬದಲಾಗಿ ಬ್ಯಾಲೆಟ್ ಪೇಪರ್ ಬಳಸಲು ಸರ್ಕಾರ ಅಧಿಕೃತವಾಗಿ ಅವಕಾಶ ಕಲ್ಪಿಸಿದೆ. ಈ ಹಿಂದೆ ಜಿಬಿಎ ವ್ಯಾಪ್ತಿಗೆ ಸೀಮಿತವಾಗಿದ್ದ ಈ ನಿಯಮವನ್ನು ಈಗ ರಾಜ್ಯದಾದ್ಯಂತ ವಿಸ್ತರಿಸಲು ತೀರ್ಮಾನಿಸಲಾಗಿದೆ.
ಸಚಿವ ಸಂಪುಟದಲ್ಲಿ ಕೈಗೊಂಡ ಮಹತ್ವದ ನಿರ್ಧಾರಗಳು
ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲೂ ಸಂಪುಟ ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ 5 ಮೌಲಾನಾ ಆಜಾದ್ ಮಾದರಿ ಶಾಲೆಗಳು ಹಾಗೂ 18 ವಸತಿ ನಿಲಯಗಳ ನಿರ್ಮಾಣಕ್ಕಾಗಿ 17.71 ಕೋಟಿ ರೂಪಾಯಿ ವೆಚ್ಚದಲ್ಲಿ ನಿವೇಶನ ಖರೀದಿಸಲು ಅನುಮೋದನೆ ನೀಡಲಾಗಿದೆ. ಅದೇ ರೀತಿ, ಆರೋಗ್ಯ ಕ್ಷೇತ್ರದಲ್ಲಿ ʻಶುಚಿ' ಕಾರ್ಯಕ್ರಮದ ಅಡಿಯಲ್ಲಿ ಸರ್ಕಾರಿ ಶಾಲೆ-ಕಾಲೇಜುಗಳ ಹದಿಹರೆಯದ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್‌ಕಿನ್ ಮತ್ತು ಮುಟ್ಟಿನ ಕಪ್‌ಗಳನ್ನು ವಿತರಿಸುವ ಯೋಜನೆಗೂ ಆಡಳಿತಾತ್ಮಕ ಒಪ್ಪಿಗೆ ಸಿಕ್ಕಿದೆ. ಇನ್ನು ಆರೋಗ್ಯ ವಿಮಾ ಯೋಜನೆಗಳಲ್ಲಿ ಕ್ಲೇಮ್ ಬಳಕೆಗಾಗಿ ಇ-ವೌಚರ್ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ.
ಮೂಲಸೌಕರ್ಯ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ, ಜಿಬಿಎ ವ್ಯಾಪ್ತಿಯ ನಗರಪಾಲಿಕೆಗಳಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗಲು ಆಟೋ ರಿಕ್ಷಾ ವೆಂಡಿಂಗ್ ಮಷಿನ್ ಮತ್ತು ಇ-ವೆಂಡಿಂಗ್ ವಾಹನಗಳ ಖರೀದಿಗೆ ಒಟ್ಟು 62 ಕೋಟಿ ರೂಪಾಯಿಗೂ ಅಧಿಕ ಸಹಾಯಧನ ನೀಡಲು ಸಂಪುಟ ಒಪ್ಪಿಗೆ ನೀಡಿದೆ. ಇದರೊಂದಿಗೆ, 67.20 ಕೋಟಿ ರೂಪಾಯಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (AI) ಚಾಲಿತ 'ಸೋಷಿಯಲ್ ಮೀಡಿಯಾ ಅನಾಲಿಟಿಕ್ಸ್ ಸಲ್ಯೂಷನ್' ತಂತ್ರಾಂಶವನ್ನು ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ 'ಸಮೃದ್ಧಿ' ಯೋಜನೆಯಡಿ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಹಾಗೂ ಚಿಕ್ಕಬಳ್ಳಾಪುರ, ಕೆಜಿಎಫ್, ವಿಜಯಪುರ ಎಪಿಎಂಸಿಗಳಲ್ಲಿ 60 ಕೋಟಿ ರೂಪಾಯಿ ವೆಚ್ಚದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಲು ನಬಾರ್ಡ್ ನೆರವಿನೊಂದಿಗೆ ಕ್ರಮ ಕೈಗೊಳ್ಳಲು ಸಂಪುಟ ಮುಂದಾಗಿದೆ.
ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮಾನವ-ವನ್ಯಜೀವಿ ಸಂಘರ್ಷ ತಡೆಯಲು 11.65 ಕೋಟಿ ರೂಪಾಯಿ ವೆಚ್ಚದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲು ಅನುಮೋದನೆ ದೊರೆತಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಕರ್ನಾಟಕ ಲೋಕಾಯುಕ್ತದಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮೂವರು ನಿವೃತ್ತ ಲೆಕ್ಕಾಧೀಕ್ಷಕರುಗಳ ಸೇವೆಯನ್ನು ಒಂದು ವರ್ಷದ ಅವಧಿಗೆ ಮುಂದುವರಿಸಲು ಸಭೆ ನಿರ್ಣಯಿಸಿದೆ.

