ಬರಗಾಲ ನಿರ್ವಹಣೆಗೆ ಸಜ್ಜು: ನೀರಿನ ಮಿತಬಳಕೆಗೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ
x

ಬರಗಾಲ ನಿರ್ವಹಣೆಗೆ ಸಜ್ಜು: ನೀರಿನ ಮಿತಬಳಕೆಗೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

ರಾಜ್ಯದ ಬಹುತೇಕ ಜಲಾಶಯಗಳು ಡೆಡ್ ಸ್ಟೋರೇಜ್ ಮಟ್ಟವನ್ನು ತಲುಪಿರುವುದು ಆತಂಕಕಾರಿ ಸಂಗತಿಯಾಗಿದೆ. ಈ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಸರ್ಕಾರವು ಯುದ್ಧೋಪಾದಿಯಲ್ಲಿ ಸಿದ್ಧತೆ ನಡೆಸಿದೆ.


Click the Play button to hear this message in audio format

ಮಳೆಯ ಅಭಾವ ಮತ್ತು ಜಲಾಶಯಗಳಲ್ಲಿನ ನೀರಿನ ಮಟ್ಟ ಕುಸಿಯುತ್ತಿರುವುದು ಆಡಳಿತ ಯಂತ್ರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ರಾಜ್ಯದ ಬಹುತೇಕ ಜಲಾಶಯಗಳು ತಮ್ಮ ಡೆಡ್ ಸ್ಟೋರೇಜ್ ಮಟ್ಟವನ್ನು ತಲುಪಿರುವುದು ಆತಂಕಕಾರಿ ಸಂಗತಿಯಾಗಿದೆ. ಈ ಗಂಭೀರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ರಾಜ್ಯ ಸರ್ಕಾರವು ಯುದ್ಧೋಪಾದಿಯಲ್ಲಿ ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌, ಲಭ್ಯವಿರುವ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕುಡಿಯುವ ನೀರಿಗೆ ಮಾತ್ರ ಆದ್ಯತೆ ನೀಡಲಾಗುವುದು ಮತ್ತು ಕೃಷಿ ಅಥವಾ ಕೈಗಾರಿಕಾ ಉದ್ದೇಶಗಳಿಗೆ ಅತಿಯಾದ ನೀರು ಬಳಕೆಯಾಗದಂತೆ ನಿಗಾ ವಹಿಸುವಂತೆ ಸೂಚಿಸಿದರು.

ಮಳೆಯ ನಿರೀಕ್ಷೆ ಹಾಗೂ ಪರಿಸ್ಥಿತಿ

ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿದ್ದು, ಇದು ಸಣ್ಣ ಮಟ್ಟದ ಆಶಾಭಾವವನ್ನು ಮೂಡಿಸಿದೆ. ಮಲೆನಾಡಿನಲ್ಲಿ ಮಳೆ ಸುರಿಯುತ್ತಿರುವುದರಿಂದ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಮಳೆಯ ಪ್ರಮಾಣ ಹೀಗೆಯೇ ಮುಂದುವರಿದರೆ ಜಲಾಶಯಗಳಲ್ಲಿ ನೀರಿನ ಮಟ್ಟ ಸುಧಾರಿಸಿ, ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳದಂತೆ ತಡೆಯಬಹುದು. ಆದರೂ, ಮಳೆಯ ಮೇಲೆ ಮಾತ್ರ ಅವಲಂಬಿತರಾಗದೆ, ಪರ್ಯಾಯ ವ್ಯವಸ್ಥೆಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಮನುಷ್ಯರಷ್ಟೇ ಅಲ್ಲದೆ, ಮೂಕಪ್ರಾಣಿಗಳಿಗೂ ಬರಗಾಲದ ಬಿಸಿ ತಟ್ಟಬಾರದು ಎಂಬುದು ಸರ್ಕಾರದ ನಿಲುವು. ಇದಕ್ಕಾಗಿ ರಾಜ್ಯಾದ್ಯಂತ ಮೇವಿನ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ರೈತರಿಗೆ ಬೋರ್‌ವೆಲ್ ಸೌಲಭ್ಯವಿದ್ದರೆ, ಅವರಿಗೆ ಬೀಜಗಳನ್ನು ನೀಡಿ ಮೇವು ಬೆಳೆಯಲು ಪ್ರೋತ್ಸಾಹಿಸಲಾಗುತ್ತಿದೆ. ಒಂದು ವೇಳೆ ಮೇವಿನ ಕೊರತೆ ಕಂಡುಬಂದಲ್ಲಿ, ತಕ್ಷಣವೇ ಮೇವು ಬ್ಯಾಂಕ್ ಮತ್ತು ಗೋಶಾಲೆಗಳನ್ನು ತೆರೆಯುವಂತೆ ಜಿಲ್ಲಾ ಪಂಚಾಯತ್ ಸಿಇಒಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕೇಂದ್ರದ ನೆರವು ಮತ್ತು ಎನ್‌ಡಿಆರ್‌ಎಫ್

ರಾಜ್ಯದಲ್ಲಿನ ಬರ ಪರಿಸ್ಥಿತಿಯ ಕುರಿತು ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡುವಂತೆ ಕೇಂದ್ರವನ್ನು ಒತ್ತಾಯಿಸಲಾಗುವುದು. ಅಗತ್ಯಬಿದ್ದರೆ, ಕೇಂದ್ರ ಗೃಹ ಸಚಿವರನ್ನು ಖುದ್ದಾಗಿ ಭೇಟಿಯಾಗಿ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ವಿವರಿಸಿ, ಹೆಚ್ಚಿನ ಆರ್ಥಿಕ ನೆರವು ಕೋರಲಾಗುವುದು ಎಂದರು.

ಎಸ್‌ಐಆರ್‌ನಲ್ಲಿ ರಾಜಕೀಯ ಸಲ್ಲದು

ಚುನಾವಣಾ ಆಯೋಗದ ಸೂಚನೆಯಂತೆ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ನೀಡಿದ ಅವರು, ಈ ವಿಷಯದಲ್ಲಿ ವಿರೋಧ ಪಕ್ಷದವರು ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲಗಳಿಲ್ಲ ಮತ್ತು ಚುನಾವಣಾ ಆಯೋಗದ ಅಧಿಕಾರಿಗಳೇ ಎಲ್ಲವನ್ನೂ ಪಾರದರ್ಶಕವಾಗಿ ನಿರ್ವಹಿಸುತ್ತಿದ್ದಾರೆ. ಒಂದು ವೇಳೆ ಎಲ್ಲಿಯಾದರೂ ಅಧಿಕಾರಿಗಳು ಲೋಪ ಎಸಗಿದರೆ, ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

Read More
Next Story