2.85 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ವಿಧಾನ ಪರಿಷತ್ತಿನಲ್ಲಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ
x

2.85 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ವಿಧಾನ ಪರಿಷತ್ತಿನಲ್ಲಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ

ಕಳೆದ ಹಲವು ವರ್ಷಗಳಿಂದ ಸರ್ಕಾರಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿವೆ. ಲಕ್ಷಾಂತರ ಪದವೀಧರರು ಸರ್ಕಾರಿ ಕೆಲಸದ ನಿರೀಕ್ಷೆಯಲ್ಲೇ ವಯೋಮಿತಿ ಮೀರುತ್ತಿದ್ದಾರೆ ಎಂದು ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.


Click the Play button to hear this message in audio format

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ-ಮಂಡಳಿಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬರೋಬ್ಬರಿ 2.85 ಲಕ್ಷ ಹುದ್ದೆಗಳ ಭರ್ತಿ ವಿಚಾರವು ವಿಧಾನ ಪರಿಷತ್ತಿನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಯಿತು. ಈ ಸಂಬಂಧ ಮೇಲ್ಮನೆಯ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ನಿಲುವಳಿ ಸೂಚನೆ ಮಂಡಿಸಿದ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಛಲವಾದಿ ನಾರಾಯಣಸ್ವಾಮಿ, ರಾಜ್ಯದಲ್ಲಿ ಭೀಕರವಾಗಿರುವ ನಿರುದ್ಯೋಗ ಸಮಸ್ಯೆಯನ್ನು ಅಂಕಿ-ಅಂಶಗಳ ಸಮೇತ ವಿವರಿಸಿದರು. "ಕಳೆದ ಹಲವಾರು ವರ್ಷಗಳಿಂದ ಸರ್ಕಾರಿ ನೇಮಕಾತಿ ಪ್ರಕ್ರಿಯೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ. ಇದರಿಂದಾಗಿ ಲಕ್ಷಾಂತರ ಪದವೀಧರರು ಸರ್ಕಾರಿ ಕೆಲಸದ ನಿರೀಕ್ಷೆಯಲ್ಲೇ ವಯೋಮಿತಿ ಮೀರುವ ಆತಂಕದಲ್ಲಿದ್ದಾರೆ. ಒಮ್ಮೆ ವಯೋಮಿತಿ ಮೀರಿದರೆ ಅವರು ಜೀವನಪರ್ಯಂತ ಸರ್ಕಾರಿ ಹುದ್ದೆಯ ಕನಸಿನಿಂದ ವಂಚಿತರಾಗಬೇಕಾಗುತ್ತದೆ. ಸರ್ಕಾರದ ಈ ವಿಳಂಬ ಧೋರಣೆಯು ಕೇವಲ ಆಡಳಿತಾತ್ಮಕ ವೈಫಲ್ಯವಲ್ಲ; ಬದಲಿಗೆ, ಇದು ಯುವಜನತೆಯ ಭವಿಷ್ಯದ ಜೊತೆ ನಡೆಸುತ್ತಿರುವ ಚೆಲ್ಲಾಟವಾಗಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಡಳಿತ ಯಂತ್ರ ಸಂಪೂರ್ಣ ಕುಸಿತ:

"ರಾಜ್ಯದ ಆಡಳಿತ ಯಂತ್ರವು ಸಿಬ್ಬಂದಿ ಕೊರತೆಯಿಂದಾಗಿ ಸಂಪೂರ್ಣವಾಗಿ ಕುಸಿದಿದೆ. ಕಂದಾಯ, ಶಿಕ್ಷಣ, ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳಂತಹ 43 ಪ್ರಮುಖ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇರುವುದರಿಂದ ಸಾರ್ವಜನಿಕ ಸೇವೆಗಳು ಕುಂಠಿತಗೊಂಡಿವೆ. ಪ್ರಸ್ತುತ ಕೆಲಸ ಮಾಡುತ್ತಿರುವ ಒಬ್ಬರೇ ನೌಕರರು ಮೂರ್ನಾಲ್ಕು ಜನರ ಜವಾಬ್ದಾರಿಯನ್ನು ನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಇದರಿಂದಾಗಿ ನೌಕರರ ಮೇಲೆ ಕೆಲಸದ ಒತ್ತಡ ಹೆಚ್ಚಾಗಿ ಅವರ ದಕ್ಷತೆಯೂ ಕುಸಿಯುತ್ತಿದೆ. ಗ್ರಾಮ ಪಂಚಾಯಿತಿಯಿಂದ ಹಿಡಿದು ಜಿಲ್ಲಾಧಿಕಾರಿ ಕಚೇರಿಯವರೆಗೆ ಸಾಮಾನ್ಯ ಜನರು ಸಣ್ಣಪುಟ್ಟ ಕೆಲಸಗಳಿಗೂ ದಿನಗಟ್ಟಲೆ ಕಾಯುವಂತಾಗಿದೆ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು ತಳಮಟ್ಟದ ಜನರಿಗೆ ತಲುಪಲು ಸಿಬ್ಬಂದಿಯೇ ಇಲ್ಲದಂತಾಗಿದೆ," ಎಂದು ಅವರು ಕಿಡಿಕಾರಿದರು.

ಶಿಕ್ಷಣ ಕ್ಷೇತ್ರದ ಶೋಚನೀಯ ಸ್ಥಿತಿ

"ರಾಜ್ಯದ 37 ವಿಶ್ವವಿದ್ಯಾಲಯಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಕೊರತೆಯು ಉನ್ನತ ಶಿಕ್ಷಣ ವ್ಯವಸ್ಥೆಯನ್ನೇ ಬುಡಮೇಲು ಮಾಡಿದೆ. ಅನೇಕ ವಿಶ್ವವಿದ್ಯಾಲಯಗಳಲ್ಲಿ ಅರ್ಧಕ್ಕಿಂತ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಹಾಗೂ ಸಂಶೋಧನಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ಬೋಧಕೇತರ ಸಿಬ್ಬಂದಿ ಇಲ್ಲದೆ ಆಡಳಿತಾತ್ಮಕ ಕೆಲಸಗಳೂ ಹಳಿ ತಪ್ಪಿವೆ. ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಬೇಕಾದ ಶಿಕ್ಷಣ ಸಂಸ್ಥೆಗಳೇ ನೌಕರರಿಲ್ಲದೆ ಸೊರಗುತ್ತಿವೆ. ರಾಜ್ಯದಲ್ಲಿ ಲಕ್ಷಾಂತರ ಯುವಕರು ಉದ್ಯೋಗಕ್ಕಾಗಿ ಬೀದಿಯಲ್ಲಿ ಅಲೆಯುತ್ತಿದ್ದಾರೆ. ಆದರೆ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಮಾತ್ರ ಕುಂಭಕರ್ಣ ನಿದ್ರೆಯಲ್ಲಿದೆ," ಎಂದು ಟೀಕಿಸಿದರು.

ಸರ್ಕಾರದ ಮುಂದಿರುವ ಪ್ರಮುಖ ಆಗ್ರಹಗಳು

ಸರ್ಕಾರವು ಕೇವಲ ಗ್ಯಾರಂಟಿ ಯೋಜನೆಗಳ ಪ್ರಚಾರದಲ್ಲಿ ಮಗ್ನವಾಗಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾದ ಉದ್ಯೋಗ ಸೃಷ್ಟಿ ಹಾಗೂ ಖಾಲಿ ಹುದ್ದೆಗಳ ಭರ್ತಿಯನ್ನು ಮರೆತಿದೆ ಎಂದು ಟೀಕಾಪ್ರಹಾರ ನಡೆಸಿದ ವಿಪಕ್ಷ ನಾಯಕರು, ಸರ್ಕಾರದ ಮುಂದೆ ಬೇಡಿಕೆಗಳನ್ನು ಇಟ್ಟಿದ್ದಾರೆ. ತಕ್ಷಣವೇ ಎಲ್ಲಾ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಪಟ್ಟಿಯನ್ನು ಅಂತಿಮಗೊಳಿಸಿ 'ವಿಶೇಷ ನೇಮಕಾತಿ ಅಭಿಯಾನ' ಆರಂಭಿಸಬೇಕು. ನೇಮಕಾತಿ ಪ್ರಕ್ರಿಯೆಯನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಅಭ್ಯರ್ಥಿಗಳಿಗೆ ಆದೇಶ ಪತ್ರ ನೀಡಬೇಕು. ನೇಮಕಾತಿ ವಿಳಂಬದಿಂದಾಗಿ ವಯೋಮಿತಿ ಮೀರಿರುವ ಅಭ್ಯರ್ಥಿಗಳಿಗೆ ಕನಿಷ್ಠ 2 ರಿಂದ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನಿಯಮ 330ರ ಅಡಿ ಚರ್ಚೆಗೆ ಅವಕಾಶ

ಪ್ರತಿಪಕ್ಷ ನಾಯಕರು ಮಂಡಿಸಿದ ನಿಲುವಳಿ ಸೂಚನೆಯು ಅತ್ಯಂತ ಜರೂರಾದ ಸಾರ್ವಜನಿಕ ಹಿತಾಸಕ್ತಿಯ ವಿಷಯವಾಗಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು. ಆದರೆ, "ಸದನದ ನಿಯಮಾವಳಿಗಳ ಪ್ರಕಾರ ನಿಲುವಳಿ ಸೂಚನೆಯಡಿ ಸುದೀರ್ಘ ಚರ್ಚೆಗೆ ಅವಕಾಶವಿಲ್ಲದ ಕಾರಣ, ಇದನ್ನು 'ನಿಯಮ 330'ರ ಅಡಿಯಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳಲು ಅವಕಾಶ ಮಾಡಿಕೊಡಲಾಗುವುದು," ಎಂದು ಅವರು ತಿಳಿಸಿದರು.

Read More
Next Story