
ಇಸ್ರೇಲ್-ಇರಾಕ್ ಯುದ್ಧದ ಪರಿಣಾಮ: ಎಲ್‌ಪಿಜಿ ಕಾಳಸಂತೆ ತಡೆಗೆ ಸರ್ಕಾರದ ಬಿಗಿ ಕ್ರಮ
ಎಲ್‌ಪಿಜಿ ಸಿಲಿಂಡರ್ ಕೊರತೆ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರೊಂದಿಗೆ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ತುರ್ತು ಸಭೆ ನಡೆಸಿದರು. ಈ ವೇಳೆ ಸಂಬಂಧಪಟ್ಟ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇಸ್ರೇಲ್-ಇರಾಕ್ ನಡುವಿನ ಯುದ್ಧದಿಂದಾಗಿ ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ, ಹೊಟೇಲ್ ಉದ್ಯಮ ಸೇರಿದಂತೆ ವಿವಿಧ ವಲಯಗಳಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ.
ಈ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಲು ಮತ್ತು ಅನಿಲ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಯಲು ರಾಜ್ಯ ಸರ್ಕಾರವು ಈಗ ಯುದ್ಧೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಈ ಕುರಿತು ಉನ್ನತ ಮಟ್ಟದ ಸಭೆ ನಡೆಸಿ, ಸಂಬಂಧಪಟ್ಟ ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.
ಗ್ಯಾಸ್ ಸಿಲಿಂಡರ್‌ಗಳ ಕೊರತೆಯಿಂದ ಹೊಟೇಲ್ ಮತ್ತು ರೆಸ್ಟೋರೆಂಟ್ ಉದ್ಯಮವು ಸ್ಥಗಿತಗೊಳ್ಳುವ ಭೀತಿ ಎದುರಾದ ಹಿನ್ನೆಲೆಯಲ್ಲಿ, ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ತುರ್ತು ಸಭೆ ನಡೆಯಿತು. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಸಾರಿಗೆ ಇಲಾಖೆ, ನಗರ ಪೊಲೀಸ್ ಕಮೀಷನರ್, ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು ಹಾಗೂ ಪ್ರಮುಖ ಅನಿಲ ಸರಬರಾಜು ಕಂಪನಿಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಅನಿಲ ಪೂರೈಕೆಯಲ್ಲಿ ಉಂಟಾಗಿರುವ ಅಡಚಣೆಗಳು ಮತ್ತು ಅದರಿಂದ ಸಮಾಜದ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮಾರುಕಟ್ಟೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವವನ್ನು ಬಂಡವಾಳ ಮಾಡಿಕೊಂಡು ಕಾಳಸಂತೆಕೋರರು ಸಕ್ರಿಯರಾಗದಂತೆ ನೋಡಿಕೊಳ್ಳುವುದು ಮೊದಲ ಆದ್ಯತೆಯಾಗಬೇಕು ಎಂದು ತಿಳಿಸಿದರು. ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಕಾರ್ಯನಿರ್ವಹಿಸಬೇಕು. ಅನಿಲ ಸಿಲಿಂಡರ್‌ಗಳ ಅಕ್ರಮ ಸಂಗ್ರಹಣೆ ಮತ್ತು ಅನಧಿಕೃತ ಸಾಗಾಟದ ಮೇಲೆ ನಿರಂತರ ನಿಗಾ ಇಡಬೇಕು. ಹೊಟೇಲ್ ಮಾಲೀಕರು ಮತ್ತು ಇತರ ವಾಣಿಜ್ಯ ಘಟಕಗಳು ಆತಂಕಕ್ಕೊಳಗಾಗಿ ಅವಶ್ಯಕತೆಗಿಂತ ಹೆಚ್ಚು ಸಿಲಿಂಡರ್‌ಗಳನ್ನು ಸಂಗ್ರಹಿಸಿಡಬಾರದು. ಗೊಂದಲದ ವಾತಾವರಣ ಸೃಷ್ಟಿಸಿ ಕೃತಕ ಅಭಾವ ಉಂಟುಮಾಡದಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಸದ್ಯ ರಾಜ್ಯದಲ್ಲಿ ಮುಂದಿನ 25 ದಿನಗಳಿಗೆ ಸಾಕಾಗುವಷ್ಟು ಅನಿಲ ದಾಸ್ತಾನು ಲಭ್ಯವಿದೆ. ಆದ್ದರಿಂದ ಸಾರ್ವಜನಿಕರು ಅಥವಾ ಉದ್ಯಮಿಗಳು ಗಾಬರಿಯಾಗುವ ಅಗತ್ಯವಿಲ್ಲ. ಸರಬರಾಜು ವ್ಯವಸ್ಥೆಯನ್ನು ಸರಿಪಡಿಸಲು ಕಂಪನಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಹೋಟೆಲ್ ಸಂಘದ ಮನವಿಯನ್ನು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
ಅಗತ್ಯ ಸೇವೆಗಳಿಗೆ ಆದ್ಯತೆ
ಆಸ್ಪತ್ರೆಗಳು ಹಾಗೂ ವಿದ್ಯಾರ್ಥಿ ವಸತಿ ನಿಲಯಗಳಿಗೆ ಯಾವುದೇ ಕಾರಣಕ್ಕೂ ಅನಿಲ ಪೂರೈಕೆಯಲ್ಲಿ ತೊಂದರೆಯಾಗಬಾರದು. ರೋಗಿಗಳ ಶುಶ್ರೂಷೆ ಮತ್ತು ವಿದ್ಯಾರ್ಥಿಗಳ ದೈನಂದಿನ ಜೀವನಕ್ಕೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಸಾರ್ವಜನಿಕರಿಗೆ ಅಥವಾ ಉದ್ಯಮಿಗಳಿಗೆ ಅನಿಲ ಸರಬರಾಜಿನಲ್ಲಿ ತೊಂದರೆಯಾದರೆ ಅಥವಾ ಕಾಳಸಂತೆ ಮಾರಾಟದ ಬಗ್ಗೆ ಮಾಹಿತಿ ನೀಡಲು ಆಹಾರ ಇಲಾಖೆಯ ಮೂಲಕ ತಕ್ಷಣವೇ ಸಹಾಯವಾಣಿ ಆರಂಭಿಸಲು ಆದೇಶಿಸಿದರು.
ಹೊಟೇಲ್ ಮಾಲೀಕರ ಸಂಘದ ಅಹವಾಲು
ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಅವರು ಸಭೆಯಲ್ಲಿ ಹೊಟೇಲ್ ಉದ್ಯಮ ಎದುರಿಸುತ್ತಿರುವ ಕಠಿಣ ಸವಾಲುಗಳನ್ನು ವಿವರಿಸಿದರು. ಪ್ರಸ್ತುತ ಮಾರುಕಟ್ಟೆಯಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಸರಬರಾಜು ಸಂಪೂರ್ಣವಾಗಿ ಕುಸಿದಿದೆ. ಇದು ಹೋಟೆಲ್‌ಗಳ ದೈನಂದಿನ ಕಾರ್ಯಚಟುವಟಿಕೆಗೆ ಭಾರೀ ಹೊಡೆತ ನೀಡಿದೆ. ಸದ್ಯ ಲಭ್ಯವಿರುವ ಸಿಲಿಂಡರ್‌ಗಳಲ್ಲಿ ಕನಿಷ್ಠ ಶೇ. ೫೦ ರಷ್ಟನ್ನಾದರೂ ಹೋಟೆಲ್ ಉದ್ಯಮಕ್ಕೆ ಮೀಸಲಿಡಬೇಕು. ಪೂರೈಕೆಯನ್ನು ಸಂಪೂರ್ಣವಾಗಿ ಶೂನ್ಯಗೊಳಿಸುವುದರಿಂದ ಲಕ್ಷಾಂತರ ಕಾರ್ಮಿಕರ ಮತ್ತು ಗ್ರಾಹಕರ ಮೇಲೆ ಪರಿಣಾಮ ಬೀರುತ್ತದೆ. ಕೇವಲ ರಾಜ್ಯಮಟ್ಟದಲ್ಲಿ ಮಾತ್ರವಲ್ಲದೆ, ಕೇಂದ್ರ ಸರ್ಕಾರದ ಹಂತದಲ್ಲೂ ಈ ಸಮಸ್ಯೆಯನ್ನು ಬಗೆಹರಿಸಲು ಸಂಘವು ಪತ್ರ ಬರೆಯಲಿದೆ ಎಂದು ತಿಳಿಸಿದರು.
ಈ ಅಭಾವಕ್ಕೆ ಜಾಗತಿಕವಾಗಿ ನಡೆಯುತ್ತಿರುವ ಯುದ್ಧದ ಸನ್ನಿವೇಶಗಳು ಮತ್ತು ಅಂತಾರಾಷ್ಟ್ರೀಯ ಪೂರೈಕೆ ಸರಪಳಿಯಲ್ಲಿನ ಏರುಪೇರುಗಳು ಕಾರಣವಾಗಿವೆ. ಕೇವಲ ಕರ್ನಾಟಕ ಮಾತ್ರವಲ್ಲದೆ, ದೇಶದ ಇತರ ರಾಜ್ಯಗಳಲ್ಲೂ ವಾಣಿಜ್ಯ ಸಿಲಿಂಡರ್‌ಗಳ ಕೊರತೆ ಕಂಡುಬರುತ್ತಿದೆ. ಈ ನಿಟ್ಟಿನಲ್ಲಿ ಯುದ್ಧದ ಪರಿಸ್ಥಿತಿ ಶಮನವಾದರೆ ಮಾರುಕಟ್ಟೆ ಸಹಜ ಸ್ಥಿತಿಗೆ ಮರಳಲಿದೆ ಎಂಬ ಆಶಯವನ್ನು ವ್ಯಕ್ತಪಡಿಸಿದರು.

