
ಶೇ.15ರ ಮಿತಿಯೊಳಗೆ ಒಳ ಮೀಸಲಾತಿ ಹಂಚಿಕೆ : ಗೊಂದಲ ಬೇಡ ಎಂದ ಸಚಿವರಾದ ಮುನಿಯಪ್ಪ-ತಿಮ್ಮಾಪುರ.
ನೇಮಕಾತಿ ವಿಳಂಬದಿಂದಾಗಿ ಅನೇಕ ಅಭ್ಯರ್ಥಿಗಳು ವಯೋಮಿತಿ ಮೀರಿ ಅರ್ಹತೆ ಕಳೆದುಕೊಳ್ಳುವ ಆತಂಕದಲ್ಲಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ಒಟ್ಟು 56,432 ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ.
ಕಳೆದ ಕೆಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಸರ್ಕಾರಿ ನೌಕರರ ನೇಮಕಾತಿ ಪ್ರಕ್ರಿಯೆಯನ್ನು ಪುನರಾರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಒಟ್ಟು 56,432 ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲು ತೀರ್ಮಾನಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.
ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ನೇಮಕಾತಿ ವಿಳಂಬದಿಂದಾಗಿ ಅನೇಕ ಅಭ್ಯರ್ಥಿಗಳು ವಯೋಮಿತಿ ಮೀರಿ ಅರ್ಹತೆ ಕಳೆದುಕೊಳ್ಳುವ ಆತಂಕದಲ್ಲಿದ್ದರು. ಇದನ್ನು ಗಮನದಲ್ಲಿಟ್ಟುಕೊಂಡು ಒಟ್ಟು 56,432 ಹುದ್ದೆಗಳ ಭರ್ತಿಗೆ ಸರ್ಕಾರ ಮುಂದಾಗಿದೆ. ಎಲ್ಲಾ ವರ್ಗದವರಿಗೂ ಸಮಾನ ಅವಕಾಶ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ನ್ಯಾಯಾಲಯದ ನಿರ್ದೇಶನದಂತೆ ಒಟ್ಟು ಮೀಸಲಾತಿ ಪ್ರಮಾಣವು ಶೇ. 50 ಮೀರದಂತೆ ಸರ್ಕಾರ ಎಚ್ಚರ ವಹಿಸಿದೆ. ಅದರಂತೆ ಎಸ್‌ಸಿ ವರ್ಗಕ್ಕೆ ಶೇ. 15 ಮತ್ತು ಎಸ್‌ಟಿ ವರ್ಗಕ್ಕೆ ಶೇ. 3ರಷ್ಟು ಮೀಸಲಾತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಉಳಿದ ಶೇ. 6ರಷ್ಟು ಮೀಸಲಾತಿಯನ್ನು ನ್ಯಾಯಾಲಯದ ಅಂತಿಮ ತೀರ್ಪಿನ ಆಧಾರದ ಮೇಲೆ ಹಂಚಿಕೆ ಮಾಡಲು ತಾತ್ಕಾಲಿಕವಾಗಿ ಕಾಯ್ದಿರಿಸಲಾಗಿದೆ. ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕುರಿತಾದ ಮಸೂದೆಗೆ ರಾಜ್ಯಪಾಲರು ಕೆಲವು ಸ್ಪಷ್ಟೀಕರಣ ಕೇಳಿ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದರು. ಸರ್ಕಾರವು ಅಗತ್ಯ ವಿವರಣೆಗಳನ್ನು ನೀಡಿ ಮಸೂದೆಯನ್ನು ಪುನಃ ಕಳುಹಿಸಿದ ನಂತರ ರಾಜ್ಯಪಾಲರು ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ. ಸುಮಾರು 35 ವರ್ಷಗಳ ಸುದೀರ್ಘ ಹೋರಾಟಕ್ಕೆ ಈಗ ನ್ಯಾಯ ಸಿಕ್ಕಂತಾಗಿದೆ ಎಂದು ಹೇಳಿದ್ದಾರೆ.
ಶೇ. 15ರ ಮಿತಿಯೊಳಗೆ ಒಳ ಮೀಸಲಾತಿಯನ್ನು ಹೇಗೆ ಜಾರಿಗೊಳಿಸಬೇಕು ಎಂಬ ಬಗ್ಗೆ ಸಚಿವರಾದ ಡಾ. ಜಿ. ಪರಮೇಶ್ವರ್, ಡಾ. ಎಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ ಸೇರಿದಂತೆ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಆಯ್ಕೆ ಪ್ರಕ್ರಿಯೆ ಮುಗಿಯುವ ಮೊದಲೇ ಒಳ ಮೀಸಲಾತಿ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದ್ದು, ಯಾವುದೇ ಸಮುದಾಯದವರು ಗೊಂದಲಕ್ಕೀಡಾಗಬಾರದು ಮತ್ತು ಅನಗತ್ಯ ಹೇಳಿಕೆಗಳನ್ನು ನೀಡಬಾರದು ಎಂದು ಮನವಿ ಮಾಡಿದ್ದಾರೆ.

