
ಗ್ರಾಮ ಪಂಚಾಯ್ತಿ ಚುನಾವಣೆಗೆ ಸಿದ್ಧತೆ: ತಯಾರಿ ನಡೆಸಲು ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಸೂಚನೆ
ಸದ್ಯ ಅಸ್ತಿತ್ವದಲ್ಲಿರುವ ಬಹುತೇಕ ಗ್ರಾಮ ಪಂಚಾಯ್ತಿಗಳ ಅವಧಿಯು 2026ರ ಜನವರಿಯಿಂದ ಮಾರ್ಚ್ ತಿಂಗಳ ಅವಧಿಯಲ್ಲಿ ಕೊನೆಗೊಳ್ಳಲಿದ್ದು, ಅದಕ್ಕೂ ಮೊದಲು ಚುನಾವಣೆ ನಡೆಸಬೇಕಾಗಿದೆ.
ರಾಜ್ಯದಲ್ಲಿ ಗ್ರಾಮ ಪಂಚಾಯ್ತಿ ಚುನಾವಣಾ ರಂಗು ನಿಧಾನವಾಗಿ ಗರಿಗೆದರುವ ಲಕ್ಷಣಗಳು ಗೋಚರಿಸುತ್ತಿವೆ. ಮುಂಬರುವ 2026-31ನೇ ಸಾಲಿನ ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ತುರ್ತಾಗಿ ಮಾಡಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದೆ.
ಪ್ರಸ್ತುತ ಅಸ್ತಿತ್ವದಲ್ಲಿರುವ ಗ್ರಾಮ ಪಂಚಾಯ್ತಿಗಳ ಅವಧಿ ಮುಕ್ತಾಯದ ಹಂತ ತಲುಪುತ್ತಿದ್ದು, ಸಾಂವಿಧಾನಿಕವಾಗಿ ನಿಗದಿತ ಸಮಯದಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಕಾರ್ಯಪ್ರವೃತ್ತವಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.
ಅವಧಿ ಯಾವಾಗ ಮುಕ್ತಾಯ?
ಸದ್ಯ ಅಸ್ತಿತ್ವದಲ್ಲಿರುವ 2020-25ನೇ ಸಾಲಿನ ಗ್ರಾಮ ಪಂಚಾಯಿತಿಗಳ ಆಡಳಿತಾವಧಿಯು 2026ರ ಜನವರಿಗೆ ಪೂರ್ಣಗೊಳ್ಳಲಿದೆ. ಬಹುತೇಕ ಗ್ರಾಮ ಪಂಚಾಯ್ತಿಗಳ ಅವಧಿಯು 2026ರ ಜನವರಿಯಿಂದ ಮಾರ್ಚ್ ತಿಂಗಳ ಅವಧಿಯಲ್ಲಿ ಕೊನೆಗೊಳ್ಳಲಿದೆ. ನಿಯಮದ ಪ್ರಕಾರ, ಹಾಲಿ ಅವಧಿ ಮುಕ್ತಾಯಗೊಳ್ಳುವ ಮೊದಲೇ ಮುಂದಿನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಬೇಕಿದೆ. ಅಂದರೆ, 2025ರ ಡಿಸೆಂಬರ್ ಅಂತ್ಯದೊಳಗೆ ಸಾರ್ವತ್ರಿಕ ಚುನಾವಣೆ ನಡೆಯಬೇಕಿದೆ.
6 ತಿಂಗಳು ಮುಂಚಿತವಾಗಿಯೇ ಸಿದ್ಧತೆ ಅಗತ್ಯ
ಚುನಾವಣೆಯನ್ನು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಕನಿಷ್ಠ ಆರು ತಿಂಗಳ ಕಾಲಾವಕಾಶದ ಅಗತ್ಯವಿದೆ ಎಂದು ಆಯೋಗವು ಸರ್ಕಾರಕ್ಕೆ ತಿಳಿಸಿದೆ. ಮತದಾರರ ಪಟ್ಟಿ ಪರಿಷ್ಕರಣೆ, ಮುದ್ರಣ ಹಾಗೂ ಮತಗಟ್ಟೆಗಳ ಗುರುಿಸುವಿಕೆ ಸೇರಿದಂತೆ ಹಲವು ಪೂರ್ವಭಾವಿ ಕಾರ್ಯಗಳಿಗೆ ಸಮಯ ಬೇಕಾಗುತ್ತದೆ. ಹೀಗಾಗಿ, ಈಗಿನಿಂದಲೇ ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ.
ಜಿಲ್ಲಾಧಿಕಾರಿಗಳಿಗೆ ನೀಡಿರುವ ಪ್ರಮುಖ ಸೂಚನೆಗಳೇನು?
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಅಡಿಯಲ್ಲಿ, ನಿಗದಿತ ಕಾಲಮಿತಿಯೊಳಗೆ ವಾರ್ಡ್‌ವಾರು ಮತ್ತು ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಕರಡು ಮತ್ತು ಅಂತಿಮ ಅಧಿಸೂಚನೆಯನ್ನು ಹೊರಡಿಸಬೇಕು. ಮೀಸಲಾತಿ ಅಧಿಸೂಚನೆಯ ಪ್ರತಿಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಒದಗಿಸಬೇಕು. ಚುನಾವಣೆ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಕೂಡಲೇ ಸರ್ಕಾರಕ್ಕೆ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.

