
ಸಾಂದರ್ಭಿಕ ಚಿತ್ರ
ರಾಜ್ಯಾದ್ಯಂತ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ, ಪ್ರವಾಸಿ ತಾಣಗಳಿಗೆ ನಿಷೇಧ!
ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಅಪಾಯ ಸಂಭವಿಸಬಾರದು ಎಂಬ ನಿಟ್ಟಿನಲ್ಲಿ ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿವೆ.
ರಾಜ್ಯದಲ್ಲಿ ಮುಂಗಾರು ಮಳೆ ಭೀಕರ ರೂಪ ಪಡೆದುಕೊಂಡಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ವರುಣನ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬುಧವಾರ (ಜು.8) ಕರಾವಳಿ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ದಕ್ಷಿಣ ಕನ್ನಡ ಸೇರಿದಂತೆ ಪ್ರಮುಖ ಕರಾವಳಿ ತೀರದ ಪ್ರದೇಶಗಳಿಗೆ ‘ರೆಡ್ ಅಲರ್ಟ್’ ಮುನ್ನೆಚ್ಚರಿಕೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ: ಹಲವೆಡೆ ರಜೆ
ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ಅಪಾಯ ಸಂಭವಿಸಬಾರದು ಎಂಬ ನಿಟ್ಟಿನಲ್ಲಿ ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿವೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಸಂಪೂರ್ಣ ರಜೆ ಘೋಷಿಸಲಾಗಿದೆ. ಶಿವಮೊಗ್ಗದಲ್ಲಿ ಮಳೆಯ ತೀವ್ರತೆ ಹೆಚ್ಚಿದ್ದು, ಸಾಗರ, ಸೊರಬ ಹಾಗೂ ತೀರ್ಥಹಳ್ಳಿ ತಾಲೂಕು, ಬೆಳಗಾವಿಯ ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕುಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಟ್ರಕಿಂಗ್ ಸಂಪೂರ್ಣ ನಿಷೇಧ
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಿರಂತರವಾಗಿ ಭೀಕರ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಮಳೆಯ ಆರ್ಭಟಕ್ಕೆ ಭೂಕುಸಿತ ಹಾಗೂ ಪ್ರವಾಹದ ಭೀತಿ ಎದುರಾಗಿರುವುದರಿಂದ, ತಾಲೂಕು ಆಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಅತ್ಯಂತ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೂ ಪ್ರವಾಸಿಗರಿಗೆ ಜಲಪಾತಗಳು, ನದಿಗಳು, ಕಣಿವೆಗಳು ಮತ್ತು ಅಪಾಯಕಾರಿ ಇಳಿಜಾರು ಪ್ರದೇಶಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾವುದೇ ಹೋಂ ಸ್ಟೇ ಅಥವಾ ರೆಸಾರ್ಟ್ ಮಾಲೀಕರು ನಿಯಮ ಮೀರಿ ಪ್ರವಾಸಿಗರನ್ನು ಟ್ರಕಿಂಗ್‌ಗೆ ಕರೆದೊಯ್ದರೆ, ಅದರಿಂದಾಗುವ ಅಪಾಯಗಳಿಗೆ ಅವರೇ ನೇರ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಸಲಾಗಿದೆ. ಅಲ್ಲದೆ ಶಿರಾಡಿ ಘಾಟ್ ರಸ್ತೆಯಲ್ಲಿ ಡಾಂಬರ್ ಟ್ಯಾಂಕರ್ ಪಲ್ಟಿಯಾಗಿ ರಸ್ತೆಯಲ್ಲೇ ಡಾಂಬರ್ ಹರಿದಿರುವುದರಿಂದ ಸಾರ್ವಜನಿಕರು ಆ ಭಾಗದಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ರಾಜಧಾನಿ ಬೆಂಗಳೂರಿನ ಹವಾಮಾನ ಹೇಗಿದೆ?
ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇಂದು ನಗರದಲ್ಲಿ ಗರಿಷ್ಠ ತಾಪಮಾನ 28°ಸೆಲ್ಸಿಯದ್ ಮತ್ತು ಕನಿಷ್ಠ ತಾಪಮಾನ 22°ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ. ಉಳಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ನದಿ ತೀರ ಹಾಗೂ ತಗ್ಗು ಪ್ರದೇಶಗಳಲ್ಲಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತಗಳು ಜನರಲ್ಲಿ ಮನವಿ ಮಾಡಿಕೊಂಡಿವೆ.

