
ಕೇರಳಕ್ಕೆ ಮುಂಗಾರು ಪ್ರವೇಶ- 5 ದಿನ ಭಾರೀ ಮಳೆ: ಕರ್ನಾಟಕದಲ್ಲಿ ಹೈ ಅಲರ್ಟ್!
ಕೇರಳದಲ್ಲಿ ಮುಂದಿನ 5 ದಿನಗಳ ಕಾಲ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯ ಚಂಡಮಾರುತದ ಹಿನ್ನೆಲೆ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ದೆಹಲಿ ಸೇರಿದಂತೆ 17 ರಾಜ್ಯಗಳಲ್ಲಿ ಮಳೆಯಾಗಲಿದೆ.
ಮುಂದಿನ ಕೆಲವೇ ಗಂಟೆಗಳಲ್ಲಿ ಕೇರಳದಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ (IMD) ಗಂಭೀರ ಎಚ್ಚರಿಕೆ ನೀಡಿದೆ. ಕೇರಳದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯ ಮುನ್ಸೂಚನೆ ಇದ್ದು, ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದ ಒಟ್ಟು 17 ರಾಜ್ಯಗಳಲ್ಲಿ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೇರಳದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 64.5 ಮಿಮೀ ನಿಂದ 115.5 ಮಿಮೀ ಮಳೆಯಾಗುವ ಸಾಧ್ಯತೆ ಇದೆ.
ವಿಶೇಷವಾಗಿ ಕರ್ನಾಟಕದ ಗಡಿಭಾಗಕ್ಕೆ ಹೊಂದಿಕೊಂಡಂತಿರುವ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಭೀಕರ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ.
ಕರ್ನಾಟಕದ ಕರಾವಳಿ ಮತ್ತು ಮಲೆನಾಡಿಗೆ ತಟ್ಟಲಿರುವ ಎಫೆಕ್ಟ್:
ಕೇರಳದಲ್ಲಿ ಸೃಷ್ಟಿಯಾಗಿರುವ ಈ ಹವಾಮಾನ ವೈಪರೀತ್ಯದ ನೇರ ಪರಿಣಾಮ ಕರ್ನಾಟಕದ ಮೇಲೂ ಬೀರಲಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆ ಚುರುಕಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.
ಈ 17 ರಾಜ್ಯಗಳಲ್ಲಿ ಬಿರುಗಾಳಿ ಮಳೆ
ಐಎಂಡಿ ವರದಿಯ ಪ್ರಕಾರ ಕೇರಳ, ತಮಿಳುನಾಡು, ಕರ್ನಾಟಕ, ಪುದುಚೇರಿ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ರಾಜಸ್ಥಾನ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಛತ್ತೀಸ್‌ಗಢ, ಗುಜರಾತ್, ಮಹಾ ರಾಷ್ಟ್ರ, ಅಸ್ಸಾಂ, ಮೇಘಾಲಯ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಸೇರಿದಂತೆ 17 ರಾಜ್ಯಗಳಲ್ಲಿ ಈ ವಾರ ಪೂರ್ತಿ ಸಿಡಿಲು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ.
ದೆಹಲಿ-ಎನ್‌ಸಿಆರ್‌ನಲ್ಲಿ ಮುನ್ನೆಚ್ಚರಿಕೆ
ಮುಂದಿನ ಎರಡು ದಿನಗಳಲ್ಲಿ ದೇಶದ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಎನ್‌ಸಿಆರ್ ವ್ಯಾಪ್ತಿಯಲ್ಲಿ ಹವಾಮಾನ ತೀವ್ರವಾಗಿ ಬದಲಾಗಲಿದೆ. ದೆಹಲಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಮಧ್ಯಾಹ್ನ ಮತ್ತು ಸಂಜೆ ವೇಳೆಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಹಾಗೂ ಕೆಲವು ಕಡೆಗಳಲ್ಲಿ ಗಂಟೆಗೆ 60 ಕಿಲೋಮೀಟರ್ ವೇಗದಲ್ಲಿ ಭೀಕರ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

