ಸಾಲು ಸಾಲು ರಜೆ: ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಬುಕಿಂಗ್‌ಗೆ ರಿಯಾಯಿತಿ
x
ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. 

ಸಾಲು ಸಾಲು ರಜೆ: ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್‌ಗಳ ವ್ಯವಸ್ಥೆ, ಮುಂಗಡ ಬುಕಿಂಗ್‌ಗೆ ರಿಯಾಯಿತಿ

ಪ್ರಯಾಣಿಕರು ವೆಬ್‌ಸೈಟ್ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಬಹುದಾಗಿದ್ದು, 4ಕ್ಕಿಂತ ಹೆಚ್ಚು ಜನ ಒಟ್ಟಿಗೆ ಟಿಕೆಟ್ ಬುಕ್ ಮಾಡಿದರೆ ಶೇ.5ರಷ್ಟು ಹಾಗೂ ಹೋಗುವ-ಬರುವ ಟಿಕೆಟ್ ಒಟ್ಟಿಗೆ ಬುಕ್ ಮಾಡಿದರೆ ಶೇ.10ರಷ್ಟು ರಿಯಾಯಿತಿ ದೊರೆಯಲಿದೆ.


Click the Play button to hear this message in audio format

ಯುಗಾದಿ, ರಂಜಾನ್‌ ಸೇರಿದಂತೆ ವಾರಂತ್ಯದ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ಹಾಗೂ ವಿವಿಧ ಪ್ರವಾಸಿ ತಾಣಗಳಿಗೆ ತೆರಳುವವರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುವ ನಿರೀಕ್ಷೆಯಿದೆ. ಹೀಗಾಗಿ, ಸಾರಿಗೆ ದಟ್ಟಣೆಯನ್ನು ಸುಗಮವಾಗಿ ನಿಭಾಯಿಸಲು ಹಾಗೂ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್‌ಆರ್‌ಟಿಸಿ) ಬರೋಬ್ಬರಿ 2 ಸಾವಿರ ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ಮುಂದಾಗಿದೆ.

ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್‌ಗಳ ದುಬಾರಿ ದರದ ಸುಲಿಗೆಯಿಂದ ಪ್ರಯಾಣಿಕರನ್ನು ಪಾರುಮಾಡಿ, ಸುರಕ್ಷಿತ ಹಾಗೂ ಆರಾಮದಾಯಕ ಪ್ರಯಾಣ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಶೇಷ ಬಸ್​​ಗಳ ಕಾರ್ಯಾಚರಣೆ

ನಾಳೆಯಿಂದ ಆರಂಭ ಈ ವಿಶೇಷ ಬಸ್‌ಗಳ ಕಾರ್ಯಾಚರಣೆಯು ನಾಳೆಯಿಂದ (ಮಾ. 18ರಿಂದ) ಆರಂಭಗೊಳ್ಳಲಿದ್ದು, ಮಾ. 20ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಹಾಗೂ ಹೊರರಾಜ್ಯದ ಪ್ರಮುಖ ನಗರಗಳಿಗೆ ನಿರಂತರವಾಗಿ ನಡೆಯಲಿದೆ. ಅದೇ ರೀತಿ ಹಬ್ಬ ಆಚರಿಸಿ ತಮ್ಮ ಕರ್ತವ್ಯಗಳಿಗೆ ವಾಪಸಾಗುವವರ ಅನುಕೂಲಕ್ಕಾಗಿ ಮಾ. 22ರಂದು ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿನತ್ತ ವಿಶೇಷ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ. ರಾಜಧಾನಿಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಂಪೇಗೌಡ ಬಸ್‌ ನಿಲ್ದಾಣ (ಮೆಜೆಸ್ಟಿಕ್) ಹಾಗೂ ಮೈಸೂರು ರಸ್ತೆ ಬಸ್ ನಿಲ್ದಾಣಗಳಿಂದ (ಸ್ಯಾಟಲೈಟ್ ಬಸ್ ನಿಲ್ದಾಣ) ಈ ಹೆಚ್ಚುವರಿ ಬಸ್‌ಗಳು ಹೊರಡಲಿವೆ.

ಕೇವಲ ಬೆಂಗಳೂರು ಮಾತ್ರವಲ್ಲದೆ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳ ಬಸ್ ನಿಲ್ದಾಣಗಳಿಂದಲೂ ಸಹ ಪ್ರಯಾಣಿಕರ ಜನದಟ್ಟಣೆ ಮತ್ತು ಒತ್ತಡಕ್ಕೆ ಅನುಗುಣವಾಗಿ ಸ್ಥಳೀಯ ಮಟ್ಟದಲ್ಲಿ ವಿಶೇಷ ಸಾರಿಗೆಗಳನ್ನು ಒದಗಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಧಾರ್ಮಿಕ ಕ್ಷೇತ್ರಗಳಿಗೂ ಬಸ್‌

ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ನಾಡಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳು, ಮಲೆನಾಡು, ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳಿಗೆ ಅತಿ ಹೆಚ್ಚು ಬಸ್‌ಗಳನ್ನು ನಿಯೋಜಿಸಲಾಗಿದೆ. ಇದರಲ್ಲಿ ಪ್ರಮುಖವಾಗಿ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಗೋಕರ್ಣ, ಕಾರವಾರ, ಕುಂದಾಪುರ, ಮಂಗಳೂರು ಕಡೆಗೆ ತೆರಳುವ ಭಕ್ತರು ಹಾಗೂ ಪ್ರವಾಸಿಗರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಇವುಗಳ ಜೊತೆಗೆ ಶಿವಮೊಗ್ಗ, ಹಾಸನ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಶಿರಸಿ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಹಾಗೂ ಮಡಿಕೇರಿ ಸೇರಿದಂತೆ ರಾಜ್ಯದ ಎಲ್ಲಾ ಪ್ರಮುಖ ನಗರಗಳಿಗೂ ಸಾರಿಗೆ ಸಂಪರ್ಕ ಕಲ್ಪಿಸಲಾಗಿದೆ. ಅಷ್ಟೇ ಅಲ್ಲದೆ, ನೆರೆ ರಾಜ್ಯಗಳ ಪ್ರಮುಖ ನಗರಗಳಾದ ತಿರುಪತಿ, ವಿಜಯವಾಡ ಮತ್ತು ಹೈದರಾಬಾದ್‌ಗೂ ಸಹ ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ವೆಬ್‌ಸೈಟ್‌ನಲ್ಲಿ ಇ-ಟಿಕೆಟ್‌

ಪ್ರಯಾಣಿಕರ ಕೊನೆಯ ಕ್ಷಣದ ನೂಕುನುಗ್ಗಲನ್ನು ತಪ್ಪಿಸಲು ಹಾಗೂ ತಮ್ಮ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಮುಂಗಡವಾಗಿ ಟಿಕೆಟ್ ಕಾಯ್ದಿರಿಸಲು ನಿಗಮವು ಅವಕಾಶ ನೀಡಿದ್ದು, ಇದರೊಂದಿಗೆ ರಿಯಾಯಿತಿಗಳನ್ನು ಘೋಷಿಸಿದೆ. ಸಾರ್ವಜನಿಕರು ಮನೆಯಲ್ಲೇ ಕುಳಿತು ನಿಗಮದ ಅಧಿಕೃತ ವೆಬ್‌ಸೈಟ್ www.ksrtc.karnataka.gov.in ಗೆ ಭೇಟಿ ನೀಡಿ ಸುಲಭವಾಗಿ ಇ-ಟಿಕೆಟ್ ಬುಕಿಂಗ್ ಮಾಡಬಹುದಾಗಿದೆ. ಇದರ ಜತೆಗೆ, ಪ್ರಯಾಣಿಕರು ಕರ್ನಾಟಕ ಹಾಗೂ ಅಂತಾರಾಜ್ಯದಲ್ಲಿ ಇರುವ ಕೆಎಸ್‌ಆರ್‌ಟಿಸಿಯ ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕವೂ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಒದಗಿಸಲಾಗಿದೆ.

ಕುಟುಂಬ ಸಮೇತ ಹಾಗೂ ಗುಂಪಾಗಿ ಪ್ರಯಾಣಿಸುವವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ, 4 ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಇದಲ್ಲದೆ, ತಮ್ಮ ಪ್ರಯಾಣದ ಯೋಜನೆಯನ್ನು ಮುಂಚಿತವಾಗಿಯೇ ಸಿದ್ಧಪಡಿಸಿಕೊಂಡು ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ, ಹಿಂದಿರುಗುವ ಪ್ರಯಾಣದ ದರದಲ್ಲಿ ಶೇಕಡಾ 10ರಷ್ಟು ರಿಯಾಯಿತಿಯನ್ನು ನಿಗಮವು ಒದಗಿಸುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದಾರೆ.

Read More
Next Story