Internal Reservation| ಜಿಲ್ಲಾ ಕೇಂದ್ರಗಳಲ್ಲಿ ಮಾದಿಗ ಸಮುದಾಯದಿಂದ ಪ್ರತಿಭಟನೆ; ದಾವಣಗೆರೆ ಬಂದ್
x
ದಾವಣಗೆರೆ ಬಂದ್ ಆವರಿಸಿದ ದಲಿತ ಸಂಘರ್ಷ ಸಮಿತಿ ಮುಖಂಡರನ್ನು ಪೊಲೀಸರು ಬಂಧಿಸಿದರು

Internal Reservation| ಜಿಲ್ಲಾ ಕೇಂದ್ರಗಳಲ್ಲಿ ಮಾದಿಗ ಸಮುದಾಯದಿಂದ ಪ್ರತಿಭಟನೆ; ದಾವಣಗೆರೆ ಬಂದ್

ಶಿವಮೊಗ್ಗ, ರಾಮನಗರ, ಚಿತ್ರದುರ್ಗ, ತುಮಕೂರು, ಮೈಸೂರು, ಟಿ. ನರಸೀಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾದಿಗ ಸಮುದಾಯಗಳು ಪ್ರತಿಭಟನೆ ನಡೆಸಿದವು.


ಒಳ ಮೀಸಲಾತಿ ಜಾರಿಗೆ ಪಟ್ಟು ಹಿಡಿದಿರುವ ಮಾದಿಗ ಸಮುದಾಯಗಳು ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಶುಕ್ರವಾರ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿವೆ.

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಲೇಬೇಕು. ರಾಜ್ಯ ಸರ್ಕಾರ ಶೇ15ರಲ್ಲೇ ಒಳ ಮೀಸಲಾತಿ ಕಲ್ಪಿಸಿದರೆ ಸದಾಶಿವ ಆಯೋಗದ ಮೀಸಲಾತಿ ವರ್ಗೀಕರಣ ಮಾದರಿ ಹಾಗೂ ನಾಗಮೋಹನ್‌ ದಾಸ್‌ ಆಯೋಗದ ಅಂಕಿ ಅಂಶಗಳನ್ನು ಬಳಸಬೇಕು ಎಂದು ಆಗ್ರಹಿಸಿ ಮಾದಿಗ ಸಂಘಟನೆಗಳ ಒಕ್ಕೂಟ ಹಾಗೂ ದಲಿತ ಸಂಘರ್ಷ ಸಮಿತಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಕಹಳೆ ಮೊಳಗಿಸಿವೆ.

ದಾವಣಗೆರೆ ಬಂದ್; ಹೆದ್ದಾರಿ ಸಂಚಾರ ಅಸ್ತವ್ಯಸ್ತ

ದಾವಣಗೆರೆಯಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದಲೇ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ವೃತ್ತಗಳಾದ ಜಯದೇವ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸರ ಕಣ್ಣತಪ್ಪಿಸಿ ಹಳೆಯ ಬಸ್ ನಿಲ್ದಾಣದ ಬಳಿ ಟೈರ್ಗಳಿಗೆ ಬೆಂಕಿ ಹಚ್ಚಿದ ಹೋರಾಟಗಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದಾಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.

ದಮನಿತರ ಹಕ್ಕು ಕಸಿಯಬೇಡಿ: ಸಚಿವರಿಗೆ ಎಚ್ಚರಿಕೆ

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, "ಸುಪ್ರೀಂಕೋರ್ಟ್ ತೀರ್ಪು ನೀಡಿದ್ದರೂ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದೆ. ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತಿದ್ದರೆ ಕಾಂಗ್ರೆಸ್ ಸರ್ಕಾರದಲ್ಲಿರುವ ಸಮುದಾಯದ ಸಚಿವರು ಮತ್ತು ಶಾಸಕರು ಮೌನವಾಗಿರುವುದು ಸರಿಯಲ್ಲ. ಅವರಿಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಿ ಹೋರಾಟಕ್ಕೆ ಬರಬೇಕು,” ಎಂದು ಆಗ್ರಹಿಸಿದರು.

ನೂರಕ್ಕೂ ಹೆಚ್ಚು ಮಂದಿ ವಶಕ್ಕೆ

ಬಂದ್ ಬಿಸಿ ಹೆಚ್ಚಾಗುತ್ತಿದ್ದಂತೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ಚದುರಿಸಿದರು. ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಹಾಗೂ ಉಪವಿಭಾಗಾಧಿಕಾರಿ ಕಚೇರಿ ಬಳಿ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದ ನೂರಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ ಮಾತನಾಡಿ, "ಪ್ರತಿಭಟನೆ ನಡೆಸಲು ಹಕ್ಕಿದೆ, ಆದರೆ, ಸಾರ್ವಜನಿಕರಿಗೆ ತೊಂದರೆ ಕೊಡುವಂತಿಲ್ಲ. ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಇರುವುದರಿಂದ ಬಲವಂತವಾಗಿ ಬಂದ್ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು," ಎಂದು ಎಚ್ಚರಿಸಿದರು.

ಇದಲ್ಲದೇ ಶಿವಮೊಗ್ಗ, ರಾಮನಗರ, ಚಿತ್ರದುರ್ಗ, ತುಮಕೂರು, ಮೈಸೂರು, ಟಿ. ನರಸೀಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಾದಿಗ ಸಮುದಾಯಗಳು ಪ್ರತಿಭಟನೆ ನಡೆಸಿದವು.

ಒಳ ಮೀಸಲಾತಿ ಗೊಂದಲ ಶೀಘ್ರ ಬಗೆಹರಿಯದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

Read More
Next Story