ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಲೋಕಾಯುಕ್ತ ಹಾಗೂ ಇಡಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ
x

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ, ಲೋಕಾಯುಕ್ತ ಹಾಗೂ ಇಡಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ

ಪ್ರಕರಣದ ತನಿಖೆಯನ್ನು ಸ್ವತಂತ್ರ ಸಂಸ್ಥೆಗೆ ವರ್ಗಾಯಿಸಿ, ನ್ಯಾಯಾಲಯದ ಉಸ್ತುವಾರಿಯಲ್ಲಿ ಹೊಸದಾಗಿ ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಹೈಕೋರ್ಟ್‌ಗೆ ಕೋರಿದ್ದಾರೆ


Click the Play button to hear this message in audio format

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿಗಳು ಹಾಗೂ ಇತರರ ವಿರುದ್ಧ ಮೈಸೂರು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ 'ಬಿ' ರಿಪೋರ್ಟ್ (ಮುಕ್ತಾಯ ವರದಿ) ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಗುರುವಾರ ಸಿಎಂ ಸಿದ್ದರಾಮಯ್ಯ, ಲೋಕಾಯುಕ್ತ ಹಾಗೂ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ನೋಟಿಸ್ ಜಾರಿ ಮಾಡಿದೆ.

ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ

ಖಾಸಗಿ ದೂರುದಾರರಾದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಈ ಮಹತ್ವದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌ ಸುನೀಲ್‌ ದತ್‌ ಯಾದವ್‌ ಅವರ ಏಕಸದಸ್ಯ ಪೀಠವು ಗುರುವಾರ ಕೈಗೆತ್ತಿಕೊಂಡಿತು. ವಿಚಾರಣೆ ಆರಂಭವಾಗುತ್ತಿದ್ದಂತೆ ದೂರುದಾರರ ಪರ ವಾದ ಮಂಡಿಸಿದ ಹಿರಿಯ ವಕೀಲೆ ಲಕ್ಷ್ಮಿ ಐಯ್ಯಂಗಾರ್ ಅವರು, ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದಲ್ಲಿ ಸಲ್ಲಿಸಿರುವ 'ಬಿ' ರಿಪೋರ್ಟ್ ಅನ್ನು ಪ್ರಶ್ನಿಸುತ್ತಿರುವುದಾಗಿ ತಿಳಿಸಿದರು ಹಾಗೂ ಇದೊಂದು ರೀತಿಯಲ್ಲಿ ಕೇವಲ ಸಮಿತಿ ವರದಿಯಂತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ವಾದ ಆಲಿಸಿದ ನ್ಯಾಯಪೀಠವು ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿತು. ಇದರ ಜೊತೆಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ, ಮುಡಾ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಮತ್ತು ವಿವಾದಿತ ಜಮೀನಿನ ಮೂಲ ಮಾಲೀಕ ಜೆ. ದೇವರಾಜು ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.

'ಬಿ' ರಿಪೋರ್ಟ್ ರದ್ದತಿಗೆ ಆಗ್ರಹ

ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಯು 2025ರ ಫೆಬ್ರವರಿ 12ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ (82ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ) ಪ್ರಕರಣದ ಕುರಿತು 'ಬಿ' ರಿಪೋರ್ಟ್ ಸಲ್ಲಿಸಿದ್ದರು. ತದನಂತರ 2026ರ ಜನವರಿ 28ರಂದು ವಿಶೇಷ ನ್ಯಾಯಾಲಯವು ಈ ವರದಿಯನ್ನು ಅಂಗೀಕರಿಸಿ ಆದೇಶ ಹೊರಡಿಸಿತ್ತು.

ಈ ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿರುವ ಅರ್ಜಿದಾರರಾದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಪೊಲೀಸರ ವರದಿಯನ್ನು ತರಿಸಿಕೊಂಡು ಪರಿಶೀಲಿಸಬೇಕು ಮತ್ತು ವಿಶೇಷ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ, ಈ ಸಂಪೂರ್ಣ ಪ್ರಕರಣದ ತನಿಖೆಯನ್ನು ಸ್ವತಂತ್ರ ಸಂಸ್ಥೆಗೆ ವರ್ಗಾಯಿಸಿ, ನ್ಯಾಯಾಲಯದ ಉಸ್ತುವಾರಿಯಲ್ಲಿ ಹೊಸದಾಗಿ ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್‌ಗೆ ಕೋರಿದ್ದಾರೆ.

ಪ್ರಕರಣದ ಹಿನ್ನೆಲೆ ಮತ್ತು ಆರೋಪ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಸೇರಿದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್ 464ರ 3 ಎಕರೆ 16 ಗುಂಟೆ ಜಮೀನನ್ನು ಮುಡಾ ಸ್ವಾಧೀನಪಡಿಸಿಕೊಂಡಿತ್ತು. ಇದಕ್ಕೆ ಪರಿಹಾರವಾಗಿ ಸುಮಾರು 56 ಕೋಟಿ ರೂಪಾಯಿ ಮೌಲ್ಯದ 14 ನಿವೇಶನಗಳನ್ನು ಮುಡಾ ಅಕ್ರಮವಾಗಿ ಹಂಚಿಕೆ ಮಾಡಿದೆ ಎಂಬುದು ಮೂಲ ಆರೋಪವಾಗಿದೆ. ಈ ಪ್ರಕ್ರಿಯೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಆರೋಪಿಸಿ 2024ರ ಜುಲೈ 3ರಂದು ಸ್ನೇಹಮಯಿ ಕೃಷ್ಣ ಅವರು ದೂರು ದಾಖಲಿಸಿದ್ದರು. ಬಳಿಕ ರಾಜ್ಯಪಾಲರು ಆಗಸ್ಟ್ 17ರಂದು ತನಿಖೆಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್, 2024ರ ಸೆಪ್ಟೆಂಬರ್ 24ರಂದು ತನಿಖೆಗೆ ಹಸಿರು ನಿಶಾನೆ ತೋರಿತ್ತು. ಆದರೆ ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸರು, ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬದ ವಿರುದ್ಧ 'ಬಿ' ರಿಪೋರ್ಟ್ ಸಲ್ಲಿಸಿದ್ದರು ಮತ್ತು ವಿಶೇಷ ನ್ಯಾಯಾಲಯವು ಅದನ್ನು ಅಂಗೀಕರಿಸಿತ್ತು.

Read More
Next Story