
ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ 20 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಒಟ್ಟು 58 ವಿದ್ಯಾರ್ಥಿಗಳಲ್ಲಿ 20 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 14 ಮಕ್ಕಳು ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ನೀಡಿ ಮನೆಗೆ ಕಳಿಸಲಾಗಿದೆ. ಉಳಿದ ಆರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನದ ʼಬಿಸಿಯೂಟ ಯೋಜನೆʼಯ ಊಟ ಮಾಡಿದ ಸುಮಾರು ಇಪ್ಪತ್ತು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೀದರ್ ಜಿಲ್ಲೆಯ ಔರದ್ ತಾಲೂಕಿನ ಜಮಲಾಪುರ ಸರ್ಕಾರಿ ಶಾಲೆಯಲ್ಲಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಶಾಲೆಯಲ್ಲಿನ ಒಟ್ಟು 58 ವಿದ್ಯಾರ್ಥಿಗಳು ಮಂಗಳವಾರ(ಫೆ.3) ಮಧ್ಯಾಹ್ನ ಊಟ ಮಾಡಿದ್ದರು. ಇದರಲ್ಲಿ ಸುಮಾರು 20 ಮಕ್ಕಳಲ್ಲಿ ಹೊಟ್ಟೆ ನೋವು, ವಾಕರಿಕೆ ಮತ್ತು ಭೇದಿ ಕಾಣಿಸಿಕೊಂಡಿದ್ದು, ಮುನ್ನೆಚ್ಚರಿಕೆಯಾಗಿ ತಕ್ಷಣ ಎಲ್ಲರನ್ನೂ ಔರದ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಶಾಲಾ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯ ಸ್ಥಿರ
ಒಟ್ಟು 58 ವಿದ್ಯಾರ್ಥಿಗಳಲ್ಲಿ 20 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 14 ಮಕ್ಕಳು ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ನೀಡಿ ಮನೆಗೆ ಕಳಿಸಲಾಗಿದೆ. ಉಳಿದ ಆರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರಿದಿದ್ದು, ವೈದ್ಯರ ಸಲಹೆ ನಂತರ ಡಿಸ್ಚಾರ್ಜ್ ಮಾಡಲಾಗುವುದು ಎಂದು ಹೇಳಿದರು.
ತಪ್ಪಿತಸ್ಥರ ವಿರುದ್ಧ ಕ್ರಮ
"ಮಕ್ಕಳ ಆರೋಗ್ಯ ಸ್ಥಿರವಾಗಿದ್ದು, ಬಡಿಸಲಾದ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿದೆ. ಮಧ್ಯಾಹ್ನದ ಊಟ ಸೇವಿಸಿದ ನಂತರ ಅವರಿಗೆ ಆಹಾರ ವಿಷಾಹಾರವಾಗಿ ಉಂಟಾಗಿರಬಹುದು ಎಂದು ಶಂಕಿಸಲಾಗಿದೆ. ಅವರಲ್ಲಿ ಆರು ವಿದ್ಯಾರ್ಥಿಗಳು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು" ಎಂದು ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.

