
ಬಸನಗೌಡ ಪಾಟೀಲ್ ಯತ್ನಾಳ್
ಬಿಜೆಪಿಯಲ್ಲೂ ಇದೆ ಸಿಡಿ ಫ್ಯಾಕ್ಟರಿ- ಸ್ಟಿಂಗ್ ಆಪರೇಷನ್ಗಳ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕರ್ನಾಟಕ ರಾಜಕಾರಣದ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ತಿರುವು ನೀಡಿದ್ದಾರೆ. ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ, ರಾಜಕೀಯ ಎದುರಾಳಿಗಳನ್ನು ಬ್ಲ್ಯಾಕ್ಮೇಲ್ ಮಾಡಲು ಸ್ಟಿಂಗ್ ಆಪರೇಷನ್ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಕರ್ನಾಟಕ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ಮತ್ತು ಸಿಡಿ ವಿವಾದ ಮತ್ತೆ ಚರ್ಚೆಗೆ ಬಂದಿದೆ. ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದು, ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಸ್ಟಿಂಗ್ ಆಪರೇಷನ್ಗಳು ನಡೆದಿವೆ. ರಾಜಕೀಯ ಎದುರಾಳಿಗಳನ್ನು ಬ್ಲ್ಯಾಕ್ಮೇಲ್ ಮಾಡಲು ಇಂತಹ ತಂತ್ರಗಳನ್ನು ಬಳಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ಕರ್ನಾಟಕದಲ್ಲಿ ಎರಡು ಸಿಡಿ ಫ್ಯಾಕ್ಟರಿಗಳಿವೆ ಎಂದು ತಾನು ಬಹಳ ಹಿಂದೆಯೇ ಹೇಳಿದ್ದಾಗಿ ತಿಳಿಸಿದ್ದಾರೆ. ಈ ಪೈಕಿ ಒಂದು ಸಿಡಿ ಫ್ಯಾಕ್ಟರಿ ಯಾವುದು ಎಂಬುದು ಈಗಾಗಲೇ ಎಲ್ಲರಿಗೂ ಗೊತ್ತಾಗಿದೆ. ಮತ್ತೊಂದು ಸಿಡಿ ಫ್ಯಾಕ್ಟರಿ ಬಿಜೆಪಿಯಲ್ಲಿದೆ ಎಂದು ಅವರು ಆರೋಪಿಸಿದ್ದಾರೆ.
ಬಿಜೆಪಿಯಲ್ಲೂ ಕೆಲವು ಸ್ಟಿಂಗ್ ಆಪರೇಷನ್ಗಳು ನಡೆದಿವೆ. ಅವುಗಳಿಗೆ ಸಂಬಂಧಿಸಿದ ಸಿಡಿಗಳು ಯಾವಾಗ ಹೊರಬರುತ್ತವೆ ಎಂಬುದನ್ನು ಕಾದು ನೋಡಬೇಕಿದೆ. ಭವಿಷ್ಯದಲ್ಲಿ ತಮಗೆ ಅಡ್ಡಿಯಾಗಬಹುದಾದವರನ್ನು ಬ್ಲ್ಯಾಕ್ಮೇಲ್ ಮಾಡಲು ಇವುಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಯತ್ನಾಳ್ ಹೇಳಿದ್ದಾರೆ.
ಎರಡೂ ರಾಷ್ಟ್ರೀಯ ಪಕ್ಷಗಳಲ್ಲೂ ಸ್ಟಿಂಗ್ ಆಪರೇಷನ್?
ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಸ್ಟಿಂಗ್ ಆಪರೇಷನ್ಗಳು ನಡೆದಿರುವುದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ ಎಂದು ಯತ್ನಾಳ್ ಹೇಳಿದ್ದಾರೆ. ದುರದೃಷ್ಟವೆಂದರೆ ಎರಡೂ ರಾಷ್ಟ್ರೀಯ ಪಕ್ಷಗಳು ಈ ರೀತಿಯ ರಾಜಕೀಯದಲ್ಲಿ ತೊಡಗಿವೆ ಎಂದು ಅವರು ಟೀಕಿಸಿದ್ದಾರೆ. ಸ್ಟಿಂಗ್ ಆಪರೇಷನ್ ವಿವಾದದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನಿರಂತರವಾಗಿ ಕಾಂಗ್ರೆಸ್ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ನ ಮಾಜಿ ಅಧ್ಯಕ್ಷರು ಹಾಗೂ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನೂ ಈ ವಿಚಾರದಲ್ಲಿ ಪ್ರಸ್ತಾಪಿಸಲಾಗುತ್ತಿದೆ. ಕುಮಾರಸ್ವಾಮಿ ಅವರು ಪತ್ರಿಕಾಗೋಷ್ಠಿಗಳಲ್ಲಿ ನೇರವಾಗಿ ಆರೋಪಗಳನ್ನು ಮಾಡುತ್ತಿದ್ದರೂ ಮುಖ್ಯಮಂತ್ರಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ.
ರಾಜಕೀಯದಲ್ಲಿ ಎದುರಾಳಿಗಳು ಮತ್ತು ಪ್ರತಿಸ್ಪರ್ಧಿಗಳನ್ನು ಬ್ಲ್ಯಾಕ್ಮೇಲ್ ಮಾಡಲು ಸ್ಟಿಂಗ್ ಆಪರೇಷನ್ಗಳನ್ನು ಬಳಸಿಕೊಳ್ಳುತ್ತಿರುವುದು ದೇಶದಲ್ಲೇ ಕೆಟ್ಟ ರಾಜಕೀಯ ಬೆಳವಣಿಗೆಯಾಗಿದೆ ಎಂದು ಅವರು ಕಿಡಿಕಾರಿದ್ದಾರೆ.
ರಮೇಶ್ ಜಾರಕಿಹೊಳಿ ಪ್ರಕರಣವನ್ನೂ ಪ್ರಸ್ತಾಪಿಸಿದ ಯತ್ನಾಳ್
ರಾಜಕಾರಣದ ಹೆಸರಿನಲ್ಲಿ ಕೆಲವರು ಇಂತಹ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಯತ್ನಾಳ್, ವಿಡಿಯೊಗಳನ್ನು ಚಿತ್ರೀಕರಿಸಿ ಹಣಕ್ಕಾಗಿ ಶಾಸಕರನ್ನು ಬ್ಲ್ಯಾಕ್ಮೇಲ್ ಮಾಡುವ ತಂಡಗಳು ಬೆಂಗಳೂರಿನಲ್ಲಿ ಸಾಕಷ್ಟಿವೆ ಎಂದು ಹೇಳಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣವನ್ನೂ ಪ್ರಸ್ತಾಪಿಸಿದ ಅವರು, ಇಂತಹ ಘಟನೆಗಳಿಂದ ಕರ್ನಾಟಕದ ರಾಜಕಾರಣಿಗಳ ಸಾರ್ವಜನಿಕ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ ಎಂದು ಟೀಕಿಸಿದ್ದಾರೆ. ಹಣಕಾಸಿನ ವ್ಯವಹಾರ ಕುದುರಿದರೆ ಇಂತಹ ಪ್ರಕರಣಗಳು ಅಲ್ಲಿಗೇ ನಿಲ್ಲುತ್ತವೆ ಎಂಬ ಅರ್ಥದಲ್ಲಿ ಮಾತನಾಡಿದ ಯತ್ನಾಳ್, ರಾಜಕಾರಣಿಗಳ ಹೆಸರಿಗೆ ಕಳಂಕ ತರುವ ಇಂತಹ ಕೃತ್ಯಗಳು ರಾಜ್ಯದಲ್ಲಿ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿವೆ ಎಂದು ಆರೋಪಿಸಿದ್ದಾರೆ.
