DCM D.K. Shivakumar has a bright future in politics CM Siddaramaiah
x

ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಿಎಂ ಸಿದ್ದರಾಮಯ್ಯ

ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ರಾಜಕೀಯದಲ್ಲಿ ಉಜ್ವಲ ಭವಿಷ್ಯವಿದೆ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಕೇಸ್‌ಗಳನ್ನು ಹಾಕಿ ಹಲವು ರೀತಿ ಕಿರುಕಳ ನೀಡಿದರೂ ಶಿವಕುಮಾರ್ ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿರುವುದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ ಎಂದು ಸಿಎಂ ತಿಳಿಸಿದ್ದಾರೆ.


Click the Play button to hear this message in audio format

ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಸಿಎಂ ಮತ್ತು ಡಿಸಿಎಂ ನಡುವೆ ತೆರೆಮರೆಯಲ್ಲಿ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ. ಇದರ ನಡುವೆಯೇ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಿಎಂ ಸಿದ್ದರಾಮಯ್ಯ ಅವರು ಶುಭ ಕೋರುವ ಮೂಲಕ 'ನಾವಿಬ್ಬರೂ ಒಗ್ಗಟ್ಟಾಗಿದ್ದೇವೆ' ಎಂಬ ಸ್ಪಷ್ಟ ಸಂದೇಶ ಸಾರಿದ್ದಾರೆ.

ಮಂಗಳವಾರ (ಮಾ. 10) ತಮ್ಮ ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಶುಭ ಹಾರೈಸಿರುವ ಸಿಎಂ, "ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಅವರ ಸಂಘಟನಾ ಚಾತುರ್ಯ, ಸೈದ್ಧಾಂತಿಕ ಬದ್ಧತೆ ಮತ್ತು ಕಠಿಣ ಶ್ರಮ ನಮ್ಮ ಪಕ್ಷದ ಎಲ್ಲ ಯುವ ನಾಯಕರಿಗೆ ಮಾದರಿಯಾಗಿದೆ" ಎಂದು ಪ್ರಶಂಸಿದ್ದಾರೆ.

ಡಿ.ಕೆ. ಶಿವಕುಮಾರ್‌ ಅವರ ಪಕ್ಷ ನಿಷ್ಠೆಯೇ ಸ್ಫೂರ್ತಿ

ಮುಂದುವರಿದು ಬರೆದಿರುವ ಅವರು, "ವಿರೋಧ ಪಕ್ಷವಾದ ಬಿಜೆಪಿ ಸುಳ್ಳು ಕೇಸ್‌ಗಳನ್ನು ದಾಖಲಿಸಿ, ಹಲವು ರೀತಿಯ ಕಿರುಕುಳ ನೀಡಿದರೂ ಡಿ.ಕೆ. ಶಿವಕುಮಾರ್ ಮಣಿಯದೆ ಪಕ್ಷಕ್ಕೆ ನಿಷ್ಠರಾಗಿ ಉಳಿದಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಬಗ್ಗೆ ಅವರಲ್ಲಿರುವ ರಾಜಿಯಿಲ್ಲದ ನಿಷ್ಠೆಗೆ ಸಾಕ್ಷಿಯಾಗಿದೆ ಹಾಗೂ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸ್ಫೂರ್ತಿದಾಯಕ ನಡವಳಿಕೆಯಾಗಿದೆ. ಕೋಮುವಾದಿ ಶಕ್ತಿಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು, ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಜೊತೆಯಲ್ಲಿ ಡಿ.ಕೆ. ಶಿವಕುಮಾರ್ ಹಗಲಿರುಳು ದುಡಿದಿದ್ದಾರೆ. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮತ್ತೆ ಕಟ್ಟುವಲ್ಲಿ ಶಿವಕುಮಾರ್ ನನ್ನ ಹೆಗಲಿಗೆ ಹೆಗಲುಗೊಟ್ಟು ನಿಂತಿದ್ದಾರೆ" ಎಂದು ಗುಣಗಾನ ಮಾಡಿದ್ದಾರೆ.

"ನನಗಿಂತ ಕಿರಿಯರಾದ ಶಿವಕುಮಾರ್ ಅವರಿಗೆ ಉಜ್ವಲವಾದ ರಾಜಕೀಯ ಭವಿಷ್ಯವಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎನ್ನುವುದು ನಮ್ಮೆಲ್ಲರ ಬಯಕೆಯಾಗಿದೆ. ಇದಕ್ಕಾಗಿ ನಡೆಯುವ ಪಕ್ಷದ ಸಂಘಟನೆ ಮತ್ತು ಹೋರಾಟದಲ್ಲಿ ನಾನು ಕೂಡ ಜೊತೆಯಿರುತ್ತೇನೆ" ಎಂದು ತಮ್ಮ ಎಕ್ಸ್‌ ಖಾತೆಯ ಸಂದೇಶದಲ್ಲಿ ತಿಳಿಸಿದ್ದಾರೆ.

ಅವಧಿ ಪೂರ್ಣಗೊಳಿಸುವ ವಿಶ್ವಾಸದಲ್ಲಿ ಸಿಎಂ?

ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಶುಭ ಹಾರೈಸುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು, "2028ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುದು ನಮ್ಮ ಬಯಕೆ. ಈ ವೇಳೆ ನಾನು ಜೊತೆಯಲ್ಲಿರುತ್ತೇನೆ" ಎನ್ನುವ ಮೂಲಕ ತಮ್ಮ ಮುಖ್ಯಮಂತ್ರಿ ಅಧಿಕಾರಾವಧಿಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸುವ ಪರೋಕ್ಷ ಸಂದೇಶವನ್ನು ರವಾನಿಸಿದ್ದಾರೆ. ಅಲ್ಲದೆ, ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿಯೂ ಸ್ಪರ್ಧಿಸಬಹುದು ಎಂಬ ಮಾತುಗಳು ಇದೀಗ ರಾಜಕೀಯ ವಲಯದಲ್ಲಿ ದಟ್ಟವಾಗಿ ಕೇಳಿಬರುತ್ತಿವೆ.

Read More
Next Story