
ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮತದಾನ ಮಾಡಿದರು.
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಬೆಳಗ್ಗೆ 9 ಗಂಟೆಯ ವೇಳೆಗೆ ಶೇ. 10.44 ಮತದಾನ
ಬಾಗಲಕೋಟೆಯಲ್ಲಿ ಕಾಂಗ್ರೆಸ್ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದಾಗಿ ಹಾಗೂ ದಾವಣಗೆರೆ ದಕ್ಷಿಣದಲ್ಲಿ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಉಪಚುನಾವಣೆ ಎದುರಾಗಿದೆ.
ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಾದ ಬಾಗಲಕೋಟೆ ಮತ್ತು ದಾವಣಗೆರೆ (ದಕ್ಷಿಣ) ಉಪಚುನಾವಣೆಯ ಮತದಾನ ಗುರುವಾರ (ಏಪ್ರಿಲ್ 9) ಬೆಳಿಗ್ಗೆಯಿಂದಲೇ ಬಿರುಸಿನಿಂದ ಆರಂಭವಾಗಿದೆ. ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಎರಡೂ ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 10.44ರಷ್ಟು ಮತದಾನವಾಗಿರುವ ಬಗ್ಗೆ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ವರದಿಯಂತೆ, 24-ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಶೇ. 11.87ರಷ್ಟು ಮತದಾನವಾಗಿದೆ. ಹಾಗೆಯೇ, 107-ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇ. 9.01ರಷ್ಟು ಮತದಾನ ದಾಖಲಾಗಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಬೆಳಿಗ್ಗೆಯಿಂದಲೇ ಮತದಾರರು ಹೆಚ್ಚಿನ ಉತ್ಸಾಹ ತೋರುತ್ತಿದ್ದು, ಮತಗಟ್ಟೆಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸಹಾಯಕ ಮುಖ್ಯ ಚುನಾವಣಾಧಿಕಾರಿ ರಾಘವನ್ ಆರ್.ವಿ. ಅವರು ಈ ತಾತ್ಕಾಲಿಕ ಅಂಕಿ-ಅಂಶಗಳನ್ನು ದೃಢಪಡಿಸಿದ್ದು, ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ಸಾಗುತ್ತಿದೆ ಎಂದು ತಿಳಿಸಿದ್ದಾರೆ.
ಉಪಚುನಾವಣೆಯ ಹಿನ್ನೆಲೆ ಮತ್ತು ಅಭ್ಯರ್ಥಿಗಳು
ಬಾಗಲಕೋಟೆಯಲ್ಲಿ ಕಾಂಗ್ರೆಸ್ ಶಾಸಕ ಎಚ್.ವೈ. ಮೇಟಿ ಅವರ ನಿಧನದಿಂದಾಗಿ ಹಾಗೂ ದಾವಣಗೆರೆ ದಕ್ಷಿಣದಲ್ಲಿ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಉಪಚುನಾವಣೆ ಎದುರಾಗಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಒಟ್ಟು 9 ಅಭ್ಯರ್ಥಿಗಳಿದ್ದರೆ, ದಾವಣಗೆರೆ ದಕ್ಷಿಣದಲ್ಲಿ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್‌ನಿಂದ ಸಮರ್ಥ್ ಶಾಮನೂರು ಮತ್ತು ಬಿಜೆಪಿಯಿಂದ ಶ್ರೀನಿವಾಸ ದಾಸಕರಿಯಪ್ಪ ಅವರ ನಡುವೆ ನೇರ ಹಣಾಹಣಿ ಇದೆ. ಎರಡೂ ಕ್ಷೇತ್ರಗಳಲ್ಲೂ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ.

