
ಮಾಲೂರು ಶಾಸಕ ಕೆ.ವೈ. ನಂಜೇಗೌಡ
ಮಾಲೂರು ಶಾಸಕ ಕೆ.ವೈ. ನಂಜೇಗೌಡ ಆಯ್ಕೆ ಅಬಾಧಿತ; ಕಾಂಗ್ರೆಸ್ಗೆ ಗೆಲುವು
ಕಾಂಗ್ರೆಸ್ ಹಾಗೂ ಬಿಜೆಪಿ ಪ್ರತಿನಿಧಿಗಳ ಸಮ್ಮುಖದಲ್ಲಿ ಮುಚ್ಚಿದ ಲಕೋಟೆಯನ್ನು ತೆರೆದ ಸರ್ವೋಚ್ಛ ನ್ಯಾಯಾಲಯವು, ಮರು ಎಣಿಕೆಯಲ್ಲಿ ಕೆ.ವೈ. ನಂಜೇಗೌಡ 50,957 ಮತಗಳನ್ನು ಮತ್ತು ಮಂಜುನಾಥ ಗೌಡ 50,707 ಮತಗಳನ್ನು ಪಡೆದಿದ್ದಾರೆ ಎಂದು ತಿಳಿಸಿದೆ.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿರುವ ಕೆ.ವೈ. ನಂಜೇಗೌಡ ಆಯ್ಕೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಗುರುವಾರ(ಫೆ.5) ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು, ಸೆಪ್ಟೆಂಬರ್ 2025ರ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ್ದು, ಮತಗಳ ಮರು ಎಣಿಕೆಯ ನಂತರವೂ ಕೆ.ವೈ. ನಂಜೇಗೌಡ ತಮ್ಮ ಎದುರಾಳಿ ಬಿಜೆಪಿಯ ಕೆ.ಎಸ್. ಮಂಜುನಾಥ್ ಗೌಡಗಿಂತ 250 ಹೆಚ್ಚು ಮತಗಳನ್ನು ಪಡೆದಿದ್ದಾರೆ ಎಂದು ತಿಳಿಸಿದೆ.
250 ಮತಗಳ ಜಯ
ಕಾಂಗ್ರೆಸ್ ಹಾಗೂ ಬಿಜೆಪಿ ಪ್ರತಿನಿಧಿಗಳ ಸಮ್ಮುಖದಲ್ಲಿ ಮುಚ್ಚಿದ ಲಕೋಟೆಯನ್ನು ತೆರೆದ ಸರ್ವೋಚ್ಛ ನ್ಯಾಯಾಲಯವು, ಮರು ಎಣಿಕೆಯಲ್ಲಿ ಕೆ.ವೈ. ನಂಜೇಗೌಡ 50,957 ಮತಗಳನ್ನು ಮತ್ತು ಮಂಜುನಾಥ ಗೌಡ 50,707 ಮತಗಳನ್ನು ಪಡೆದಿರುವುದು ಕಂಡುಬಂದಿದೆ ಎಂದು ಹೇಳಿದೆ.
ವೀಡಿಯೊ ರೆಕಾರ್ಡಿಂಗ್‌ಗಳನ್ನು ಒದಗಿಸದಿದ್ದಕ್ಕಾಗಿ ಜಿಲ್ಲಾ ಚುನಾವಣಾ ಅಧಿಕಾರಿಗೆ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೀಡಿದ ನಿರ್ದೇಶನವನ್ನು ನ್ಯಾಯಾಲಯ ರದ್ದುಗೊಳಿಸಿದೆ. ಎಣಿಕೆ ಪ್ರಕ್ರಿಯೆಯ ವೀಡಿಯೊ ರೆಕಾರ್ಡಿಂಗ್ ಅಗತ್ಯವು ಕಡ್ಡಾಯವೇ ಅಥವಾ ಇಲ್ಲವೇ ಎಂಬುದರ ಕುರಿತು ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.
ಏನಿದು ಪ್ರಕರಣ ?
2023ರ ಮೇ ತಿಂಗಳಲ್ಲಿ ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಕೆ.ವೈ. ನಂಜೇಗೌಡ ಅವರು ಬಿಜೆಪಿಯ ಕೆ.ಎಸ್. ಮಂಜುನಾಥಗೌಡ ವಿರುದ್ಧ ಕೇವಲ 248 ಮತಗಳ ಅಂತರದಿಂದ ರೋಚಕ ಜಯ ಸಾಧಿಸಿದ್ದರು. ಆದರೆ, ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಮತ್ತು ಪಾರದರ್ಶಕತೆ ಇರಲಿಲ್ಲ ಎಂದು ಆರೋಪಿಸಿ ಮಂಜುನಾಥಗೌಡ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ನಂಜೇಗೌಡರ ಆಯ್ಕೆಯನ್ನು ಅಸಿಂಧುಗೊಳಿಸಿ, ನಾಲ್ಕು ವಾರಗಳೊಳಗೆ ಮರು ಮತ ಎಣಿಕೆ ನಡೆಸುವಂತೆ ಸೆಪ್ಟೆಂಬರ್‌ನಲ್ಲಿ ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ನಂಜೇಗೌಡರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ನಂಜೇಗೌಡರಿಗೆ ಶಾಸಕರಾಗಿ ಮುಂದುವರೆಯಲು ಅವಕಾಶ ನೀಡಿತ್ತು, ಆದರೆ ಚುನಾವಣಾ ಆಯೋಗಕ್ಕೆ ಮತಗಳ ಮರು ಎಣಿಕೆ ನಡೆಸಿ, ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಅಕ್ಟೋಬರ್ 14ರಂದು ನಿರ್ದೇಶನ ನೀಡಿತ್ತು.
ಸುಪ್ರೀಂ ಕೋರ್ಟ್ ಆದೇಶದಂತೆ, ಕೋಲಾರದ ಟಮಕದಲ್ಲಿರುವ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಮತಗಳ ಮರು ಎಣಿಕೆ ನಡೆದಿತ್ತು. ಉಪವಿಭಾಗಾಧಿಕಾರಿ ಡಾ.ಎಚ್.ಪಿ.ಎಸ್. ಮೈತ್ರಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿತ್ತು. ಇವರಿಗೆ ಸಹಾಯ ಮಾಡಲು ಕೋಲಾರ, ಬಂಗಾರಪೇಟೆ, ಶ್ರೀನಿವಾಸಪುರ ಮತ್ತು ಮುಳಬಾಗಿಲು ತಹಸೀಲ್ದಾರ್‌ಗಳನ್ನು ಹೆಚ್ಚುವರಿ ಸಹಾಯಕ ಚುನಾವಣಾಧಿಕಾರಿಗಳಾಗಿ ನೇಮಿಸಲಾಗಿತ್ತು. ಜಿಲ್ಲಾಧಿಕಾರಿ ಎಂ.ಆರ್. ರವಿ ಅವರು ಸಿದ್ಧತೆಗಳನ್ನು ಪರಿಶೀಲಿಸಿದ್ದು, ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಪಾರದರ್ಶಕವಾಗಿ ಎಣಿಕೆ ನಡೆಸಲು ಕ್ರಮ ಕೈಗೊಂಡಿದ್ದರು.

