ಬಿಗ್ ಬಾಸ್‌ಗೆ ಇನ್ನೂ ಅನುಮತಿ: ಸಚಿವ ರಾಮಲಿಂಗಾ ರೆಡ್ಡಿ ಹೇಳುವುದೇನು?
ಮುಂದಿನ ವರ್ಷದಿಂದ ಸಾರ್ವಜನಿಕರಿಗೆ ಸರ್ಕಾರದ ವತಿಯಿಂದಲೇ ಉಚಿತವಾಗಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ವಿತರಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ ಎಂಬುದಾಗಿ ಸಚಿವರು ಹೇಳಿದ್ದಾರೆ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ 'ಬಿಗ್ ಬಾಸ್' ಆಯೋಜನೆಗೆ ವಾಯುಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಈವರೆಗೆ ಯಾವುದೇ ಅಧಿಕೃತ ಅನುಮತಿ ಕೋರಿಲ್ಲ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. 'ದ ಫೆಡರಲ್ ಕರ್ನಾಟಕ'ಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಪರಿಸರ ಇಲಾಖೆಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಕಾರ್ಯಕ್ರಮದ ಆಯೋಜನೆಗೆ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಕಡ್ಡಾಯವಾಗಿದೆ. ಈವರೆಗೆ ಆಯೋಜಕರು ಅನುಮತಿ ಕೇಳಿಲ್ಲ, ಒಂದು ವೇಳೆ ಕಾನೂನು ಪ್ರಕಾರ ಅರ್ಜಿ ಸಲ್ಲಿಸಿದರೆ ಪರಿಶೀಲಿಸಿ ಅನುಮತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಎಸ್‌ಟಿಪಿ ನಿಯಮ ಪಾಲಿಸದಿದ್ದರೆ ಕಠಿಣ ಕ್ರಮ
ಬೆಂಗಳೂರು ಜಲಮಂಡಳಿ (BWSSB) ವ್ಯಾಪ್ತಿಯಲ್ಲಿ ಪ್ರತಿದಿನ 1800 ಎಂಎಲ್‌ಡಿ ತ್ಯಾಜ್ಯ ನೀರು ಉತ್ಪತ್ತಿಯಾಗುತ್ತಿದ್ದು, ಈ ಪೈಕಿ ಕೇವಲ 1200 ಎಂಎಲ್‌ಡಿ ಮಾತ್ರ ಸಂಸ್ಕರಣೆಯಾಗುತ್ತಿದೆ. ತ್ಯಾಜ್ಯ ನೀರಿನ ಸಮರ್ಪಕ ಸಂಸ್ಕರಣೆ ನಡೆಯುತ್ತಿಲ್ಲ ಎಂಬ ಅಂಶವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸರಿಯಾಗಿ ಕಾರ್ಯನಿರ್ವಹಿಸದ ಹಾಗೂ ನಿರ್ವಹಣೆ ಕೊರತೆ ಇರುವ ಒಳಚರಂಡಿ ಸಂಸ್ಕರಣಾ ಘಟಕಗಳಿಗೆ (STP) ತಕ್ಷಣವೇ ನೋಟಿಸ್ ಜಾರಿಗೊಳಿಸಲು ಸೂಚಿಸಲಾಗಿದೆ. ಅಲ್ಲದೆ, ಬೆಂಗಳೂರು ನಗರದ ಅಪಾರ್ಟ್‌ಮೆಂಟ್‌ಗಳಲ್ಲಿರುವ ಎಸ್‌ಟಿಪಿಗಳ ಪ್ರಸ್ತುತ ಸ್ಥಿತಿಯನ್ನು ಪರಿಶೀಲಿಸಿ, ಕಾರ್ಯನಿರ್ವಹಿಸುತ್ತಿರುವ ಮತ್ತು ಕೆಟ್ಟುನಿಂತಿರುವ ಘಟಕಗಳ ಪ್ರತ್ಯೇಕ ಪಟ್ಟಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನಿಯಮ ಉಲ್ಲಂಘಿಸುವ ಅಪಾರ್ಟ್‌ಮೆಂಟ್ ಸಂಘಗಳಿಗೆ ನೋಟಿಸ್ ನೀಡಿ, 15 ದಿನಗಳೊಳಗೆ ಎಸ್‌ಟಿಪಿಗಳನ್ನು ಸರಿಪಡಿಸಲು ಸೂಚಿಸಲಾಗುವುದು. ಇದನ್ನು ಪಾಲಿಸದಿದ್ದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದ್ದಾರೆ.
ಜಲಮೂಲ ಕಲುಷಿತಗೊಳಿಸುವ ಕೈಗಾರಿಕೆಗಳಿಗೆ ಬೀಗ
ನದಿಗಳು ಹಾಗೂ ನದಿ ತೀರದ ಪ್ರದೇಶಗಳಲ್ಲಿ ಕಾರ್ಯಾಚರಿಸುತ್ತಿರುವ ಕೈಗಾರಿಕೆಗಳ ಮೇಲೆ ಇಲಾಖೆ ನಿಗಾ ಇರಿಸಿದೆ. ಸಂಸ್ಕರಿಸದ ಅಥವಾ ಸಮರ್ಪಕವಾಗಿ ಸಂಸ್ಕರಿಸದ ಕೈಗಾರಿಕಾ ತ್ಯಾಜ್ಯ ನೀರನ್ನು ನದಿ, ರಾಜಕಾಲುವೆ ಹಾಗೂ ಇತರ ಜಲಮೂಲಗಳಿಗೆ ನೇರವಾಗಿ ಬಿಡುವ ಕೈಗಾರಿಕೆಗಳನ್ನು ಗುರುತಿಸಿ, ತಕ್ಷಣವೇ ನೋಟಿಸ್ ನೀಡಲು ಸೂಚಿಸಲಾಗಿದೆ. ನಿಗದಿತ ಕಾಲಮಿತಿಯೊಳಗೆ ಸೂಕ್ತ ಮಾಲಿನ್ಯ ನಿಯಂತ್ರಣ ಕ್ರಮಗಳನ್ನು ಅಳವಡಿಸಿಕೊಳ್ಳದ ಕೈಗಾರಿಕಾ ಘಟಕಗಳನ್ನು ಮುಚ್ಚಿಸುವ ಕಠಿಣ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಲಿದೆ. ಇದರ ಜೊತೆಗೆ, ಶಬ್ದಮಾಲಿನ್ಯ ನಿಯಮಗಳನ್ನು ಉಲ್ಲಂಘಿಸುವ ವಾಣಿಜ್ಯ ಘಟಕಗಳು, ಸಂಸ್ಥೆಗಳು ಹಾಗೂ ವಾಹನಗಳಿಗೂ ನೋಟಿಸ್ ಜಾರಿಗೊಳಿಸಲಾಗುವುದು. ನಿಗದಿತ ಶಬ್ದಮಿತಿ ಕಾಯ್ದುಕೊಳ್ಳದವರ ವಿರುದ್ಧವೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸರ್ಕಾರದಿಂದಲೇ ಉಚಿತ ಪರಿಸರ ಸ್ನೇಹಿ ಗಣಪತಿ ವಿತರಣೆ ಚಿಂತನೆ
ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಮಣ್ಣಿನ ಗಣೇಶನ ಮೂರ್ತಿಗಳ ಪ್ರತಿಷ್ಠಾಪನೆಗೆ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ತಯಾರಿಕೆ, ಸಂಗ್ರಹಣೆ, ಸಾಗಾಟ ಮತ್ತು ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟಲು ವಿಶೇಷ ತಪಾಸಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಮುಂದಿನ ವರ್ಷದಿಂದ ಸಾರ್ವಜನಿಕರಿಗೆ ಸರ್ಕಾರದ ವತಿಯಿಂದಲೇ ಉಚಿತವಾಗಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ವಿತರಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಇನ್ನು, ರಾಜ್ಯದ ಗಮನ ಸೆಳೆದಿದ್ದ ಹನೂರು ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖಾ ವರದಿಯು ಈಗಾಗಲೇ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು, ಈ ವರದಿಯ ಕುರಿತು ಮುಖ್ಯಮಂತ್ರಿಗಳು ಮಾತನಾಡಲಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

