
5 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ
ಐದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಡಾ.ಚಂದ್ರು ಲಮಾಣಿ ಸೇರಿ ಇಬ್ಬರು ಆಪ್ತ ಸಹಾಯಕರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ದೂರು ನೀಡಿದ್ದರು.
ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಂಚ ಸ್ವೀಕಾರ ಆರೋಪದ ಮೇಲೆ ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಚಂದ್ರು ಲಮಾಣಿ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಐದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಡಾ.ಚಂದ್ರು ಲಮಾಣಿ ಸೇರಿ ಇಬ್ಬರು ಆಪ್ತ ಸಹಾಯಕರು ಲೋಕಾಯುಕ್ತ ಪೊಲೀಸರ ವಶಕ್ಕೆ ಒಳಗಾಗಿದ್ದಾರೆ.
ಗದಗ ಜಿಲ್ಲೆಯ ಚಿಂಚಿಲಿಯ ಗುತ್ತಿಗೆದಾರ ವಿಜಯ್ ಪೂಜಾರ್ ಎಂಬುವವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡು ಬಂಧಿಸಲಾಗಿದೆ. ಸಣ್ಣ ನೀರಾವರಿ ಇಲಾಖೆಯ ಅಡಿಯಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ತಡೆಗೋಡೆ ನಿರ್ಮಿಸುವ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದರು. ಈ ಕಾಮಗಾರಿಗೆ ಸಂಬಂಧಿಸಿದಂತೆ ಕೆಲಸ ನಿರ್ವಹಿಸಲು ಸಹಕರಿಸುವಂತೆ ಶಾಸಕರ ಕಚೇರಿಯನ್ನು ಸಂಪರ್ಕಿಸಿದಾಗ, ಭಾರಿ ಮೊತ್ತದ ಲಂಚದ ಬೇಡಿಕೆ ಇಡಲಾಗಿತ್ತು ಎಂದು ಲೋಕಾಯುಕ್ತ ಪೊಲೀಸರು ಹೇಳಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ಬಳಿ ಶಾಸಕರು ಮತ್ತು ಅವರ ತಂಡವು ಒಟ್ಟು 11 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿತ್ತು. ಈ ಪೈಕಿ ಮೊದಲ ಕಂತಾಗಿ 5 ಲಕ್ಷ ರೂ. ಹಣವನ್ನು ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಡಾ. ಚಂದ್ರು ಲಮಾಣಿ ಜತೆಗೆ ಆಪ್ತ ಸಹಾಯಕ ಮಂಜುನಾಥ್ ವಾಲ್ಮೀಕಿ ಮತ್ತು ಖಾಸಗಿ ಆಪ್ತ ಸಹಾಯಕ ಗುರುನಾಯಕ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಗುತ್ತಿಗೆದಾರ ವಿಜಯ್ ಪೂಜಾರ್ ಲಂಚದ ಹಣ ನೀಡಲು ಹೋದಾಗ, ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ. ಲಂಚದ ಹಣದೊಂದಿಗೆ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಮೂವರು ಆರೋಪಿಗಳ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬಳಿಕ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು. ಈ ಪ್ರಕರಣವು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಅಭಿವೃದ್ಧಿ ಕೆಲಸಗಳಿಗಾಗಿ ಮೀಸಲಿಟ್ಟ ಹಣದಲ್ಲಿ ಇಷ್ಟು ದೊಡ್ಡ ಮೊತ್ತದ ಲಂಚ ಕೇಳಿರುವುದು ಗುತ್ತಿಗೆದಾರರ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ವೈದ್ಯರಾಗಿದ್ದ ಚಂದ್ರು ಲಮಾಣಿ
ಡಾ. ಚಂದ್ರು ಲಮಾಣಿ ಅವರು ವೃತ್ತಿಯಿಂದ ವೈದ್ಯರಾಗಿದ್ದು, ರಾಜಕೀಯಕ್ಕೆ ಬರುವ ಮುನ್ನ ಸುದೀರ್ಘ ಕಾಲ ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನವರಾದ ಇವರು, ಬಡ ಮತ್ತು ಸಾಮಾನ್ಯ ವರ್ಗದ ಜನರೊಂದಿಗೆ ಆಪ್ತ ಒಡನಾಟ ಹೊಂದಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿನ ಇವರ ಸೇವೆ ಮತ್ತು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಗುಣವೇ ಇವರನ್ನು ಸಕ್ರಿಯ ರಾಜಕಾರಣದತ್ತ ಸೆಳೆದಿತ್ತು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಇವರು, ತಮ್ಮ ಕ್ಷೇತ್ರದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ್ದರು.

