Karnataka Budget 2026| ಗೃಹಿಣಿಯರಿಗೆ ಗುಡ್‌ನ್ಯೂಸ್‌! ರಾಜ್ಯ ಬಜೆಟ್‌ನಲ್ಲಿ ಬಂಪರ್‌ ಗಿಫ್ಟ್‌
x
ಗೃಹಲಕ್ಷ್ಮಿ ಯೋಜನೆಗೆ ಬಂಪರ್‌ ಗಿಫ್ಟ್‌

Karnataka Budget 2026| ಗೃಹಿಣಿಯರಿಗೆ ಗುಡ್‌ನ್ಯೂಸ್‌! ರಾಜ್ಯ ಬಜೆಟ್‌ನಲ್ಲಿ ಬಂಪರ್‌ ಗಿಫ್ಟ್‌

ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಬೆಂಗಳೂರಿನಲ್ಲಿ ಕ್ಯಾನ್ಸರ್ ಲಸಿಕಾ ಕೇಂದ್ರ, ಜಿಲ್ಲಾ ಆಸ್ಪತ್ರೆಗಳ ಉನ್ನತೀಕರಣ ಹಲವು ಯೋಜನೆಗಳನ್ನು ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾಗಿದೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡಿಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಇದಾಗಿದ್ದು, ಗ್ಯಾರಂಟಿ ಯೋಜನೆಗಳು, ಆರೋಗ್ಯ ಮತ್ತು ಮೂಲಸೌಕರ್ಯ ವಲಯಗಳಿಗೆ ಈ ಬಾರಿ ಸಿಂಹಪಾಲು ನೀಡಲಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಭಾರಿ ಅನುದಾನ

ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು 28,608 ಕೋಟಿ ರೂಪಾಯಿಗಳನ್ನು ಮೀಸಲಿರಿಸಿದ್ದಾರೆ. ಈ ಯೋಜನೆಯು ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಭದ್ರ ಬುನಾದಿ ಹಾಕಿದೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ. "ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಯಶಸ್ವಿಯಾಗಿವೆ" ಎಂದು ಅವರು ಹೆಮ್ಮೆಯಿಂದ ಹೇಳಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಘೋಷಣೆಗಳು

ಆರೋಗ್ಯ ವಲಯಕ್ಕೆ ಬಜೆಟ್‌ನಲ್ಲಿ ವಿಶೇಷ ಒತ್ತು ನೀಡಲಾಗಿದ್ದು, ಬೆಂಗಳೂರಿನಲ್ಲಿ ಮಹಿಳೆಯರಿಗಾಗಿ ಸ್ತನ ಹಾಗೂ ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪಿಸುವುದಾಗಿ ಘೋಷಿಸಲಾಗಿದೆ. ಇನ್ನುಳಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಆರೋಗ್ಯ ಸೇವೆ ಬಲಪಡಿಸಲು ಮುಂದಾಗಿರುವ ಸರ್ಕಾರ, ಹಲವು ಕ್ರಮಗಳನ್ನು ಘೋಷಿಸಿದೆ.

ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್, ಕೊಪ್ಪಳ, ಚಿತ್ರದುರ್ಗ, ಮಂಡ್ಯ, ಭದ್ರಾವತಿ ಮತ್ತು ಕೆಜಿಎಫ್ (KGF) ಪ್ರದೇಶಗಳ ಇಎಸ್‌ಐ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗುವುದು. ರೈತರಿಗೆ ನೆರವಾಗಲು ವಿಜಯಪುರದಲ್ಲಿ 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೈತ್ಯಗೃಹ ನಿರ್ಮಾಣ ಘಟಕ ಸ್ಥಾಪಿಸಲಾಗುವುದು.

ಸಿದ್ದರಾಮಯ್ಯ ಅವರ 17ನೇ ಬಜೆಟ್ ಪ್ರಮುಖವಾಗಿ ಮಹಿಳಾ ಸಬಲೀಕರಣ, ಆರೋಗ್ಯ ಮೂಲಸೌಕರ್ಯ ಮತ್ತು ಕೃಷಿ ಆಧರಿತ ಕೈಗಾರಿಕೆಗಳ ಮೇಲೆ ಕೇಂದ್ರೀಕೃತವಾಗಿದೆ. ಹಳೆಯ ಯೋಜನೆಗಳ ಮುಂದುವರಿಕೆಯೊಂದಿಗೆ ಹೊಸ ಸವಲತ್ತುಗಳನ್ನು ನೀಡುವ ಮೂಲಕ ಸಮತೋಲಿತ ಆಯವ್ಯಯ ಮಂಡಿಸಲು ಸಿಎಂ ಪ್ರಯತ್ನಿಸಿದ್ದಾರೆ.

Read More
Next Story