ಉಪವಾಸ ಕೈಬಿಟ್ಟ ವಾಂಗ್ಚುಕ್; ಮೋದಿ ಸರ್ಕಾರ ಕೊಟ್ಟ ಆ 3 ಭರವಸೆಗಳೇನು?
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ 26 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಣ ಹೋರಾಟಗಾರ ಸೋನಂ ವಾಂಗ್ಚುಕ್ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ.
NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ 26 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಣ ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಲಿಖಿತ ಭರವಸೆ ದೊರೆತ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.
ಕೇಂದ್ರ ಸಚಿವರೊಂದಿಗೆ ಮಹತ್ವದ ಮಾತುಕತೆ
ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸೋನಂ ವಾಂಗ್ಚುಕ್ ಅವರನ್ನು ಭೇಟಿ ಮಾಡಿ ಸುದೀರ್ಘ ಮಾತುಕತೆ ನಡೆಸಿದರು. ಸುಮಾರು ಎರಡು ದಿನಗಳ ಚರ್ಚೆಯ ಬಳಿಕ ಸರ್ಕಾರದ ಭರವಸೆಗಳು ಲಿಖಿತ ರೂಪದಲ್ಲಿ ದೊರೆತ ಹಿನ್ನೆಲೆಯಲ್ಲಿ ಉಪವಾಸ ಮುರಿಯಲು ವಾಂಗ್ಚುಕ್ ಒಪ್ಪಿದರು. ದೇಶದಲ್ಲಿ ಹಿಂಸಾಚಾರ ಸಂಭವಿಸುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದಾಗಿ ಅವರು ತಿಳಿಸಿದ್ದಾರೆ.
ಸರ್ಕಾರದ ಮೂರು ಪ್ರಮುಖ ಭರವಸೆಗಳು
ಕೇಂದ್ರ ಸರ್ಕಾರವು ಜಂತರ್ ಮಂತರ್ ಹಾಗೂ 'ಸಂಸತ್ ಚಲೋ' ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸದಿರುವ ಬಗ್ಗೆ ಸಕಾರಾತ್ಮಕ ನಿಲುವು ವ್ಯಕ್ತಪಡಿಸಿದೆ. ಜೊತೆಗೆ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಹಾಗೂ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಸುವುದಾಗಿ ಭರವಸೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ನೆರವು ನೀಡುವ ವಿಷಯವನ್ನೂ ಸರ್ಕಾರ ಪರಿಗಣಿಸುವುದಾಗಿ ತಿಳಿಸಿದೆ.
ಪ್ರಧಾನಿಯ ಘೋಷಣೆ
ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಯುವಜನರ ಭವಿಷ್ಯದ ಮೇಲಿನ ದಾಳಿ ಎಂದು ಬಣ್ಣಿಸಿದ್ದು, ಇಂತಹ ಪ್ರಕರಣಗಳಿಗೆ ಕಠಿಣ ಶಿಕ್ಷೆ ವಿಧಿಸುವ ಹೊಸ ಕಾನೂನು ತರಲಾಗುವುದು ಎಂದು ಘೋಷಿಸಿದ್ದಾರೆ. ಜೊತೆಗೆ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿಯೂ ತಿಳಿಸಿದ್ದಾರೆ.
ಹೋರಾಟ ಮುಗಿದಿಲ್ಲ ಎಂದ ವಾಂಗ್ಚುಕ್
ಉಪವಾಸ ಅಂತ್ಯಗೊಳಿಸಿದ ಬಳಿಕ ಮಾತನಾಡಿದ ಸೋನಮ್ ವಾಂಗ್ಚುಕ್, "ಇದು ಹೋರಾಟದ ಅಂತ್ಯವಲ್ಲ, ಹೊಣೆಗಾರಿಕೆಯ ಆರಂಭ" ಎಂದು ಹೇಳಿದ್ದಾರೆ. ಸರ್ಕಾರ ನೀಡಿರುವ ಭರವಸೆಗಳು ಜಾರಿಗೆ ಬರುತ್ತವೆಯೇ ಎಂಬುದನ್ನು ಮುಂದಿನ ದಿನಗಳಲ್ಲಿ ಗಮನಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈಗ ಕೇಂದ್ರದ ಘೋಷಣೆಗಳು ಕಾರ್ಯರೂಪಕ್ಕೆ ಬರುತ್ತವೆಯೇ ಎಂಬುದರತ್ತ ದೇಶದ ಗಮನ ನೆಟ್ಟಿದೆ.

