
ನಂಜನಗೂಡು ಜಾತ್ರೆಯಲ್ಲಿ ಕಲ್ಲು ತೂರಾಟ; ಮಗು ಸೇರಿ ನಾಲ್ವರಿಗೆ ಗಾಯ, ರಥೋತ್ಸವ ಅರ್ಧಕ್ಕೆ ಸ್ಥಗಿತ
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ಸಿದ್ದೇಶ್ವರ ಸ್ವಾಮಿ ಜಾತ್ರೆ ವೇಳೆ ಪಟಾಕಿ ಸಿಡಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಕಲ್ಲು ತೂರಾಟದಲ್ಲಿ ಮಗು ಸೇರಿದಂತೆ ನಾಲ್ವರಿಗೆ ಗಾಯವಾಗಿದ್ದು, ರಥೋತ್ಸವ ಅರ್ಧಕ್ಕೆ ಸ್ಥಗಿತಗೊಂಡಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ಸಿದ್ದೇಶ್ವರ ಸ್ವಾಮಿ ಜಾತ್ರೆಯ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಪಟಾಕಿ ಸಿಡಿಸುವ ವಿಚಾರಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಎರಡೂ ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಮಗು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ಜಾತ್ರೆಯ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಪಟಾಕಿ ಸಿಡಿಸುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಬಳಿಕ ಪರಿಸ್ಥಿತಿ ಕೈಮೀರಿ ಪರಸ್ಪರ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಆನಂದ್, ಭರತ್, ಅಭಿ ಹಾಗೂ ಮಗುವಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಗಡೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಘರ್ಷಣೆಯಿಂದಾಗಿ ಬೆಟ್ಟದಿಂದ ಆಗಮಿಸುತ್ತಿದ್ದ ಸಿದ್ದೇಶ್ವರ ಸ್ವಾಮಿ ರಥೋತ್ಸವವನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಗಿದೆ. ಜಾತ್ರೆಯ ಮೆರವಣಿಗೆ ವೇಳೆ ಸೂಕ್ತ ಪೊಲೀಸ್ ಭದ್ರತೆ ಒದಗಿಸಿರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘಟನಾ ಸ್ಥಳಕ್ಕೆ ತಹಶೀಲ್ದಾರ್ ಆಗಮಿಸಿ ನ್ಯಾಯ ಒದಗಿಸಬೇಕು. ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಘಟನೆಯ ಬಳಿಕ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯ ಮೇಲೆ ನಿಗಾ ಇರಿಸಲಾಗಿದೆ. ಜಾತ್ರೆಯ ಸಂಭ್ರಮದ ನಡುವೆ ನಡೆದ ಈ ಘರ್ಷಣೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
