
ಘಟನೆಯಲ್ಲಿ ಭಕ್ತರ ಸಾವು ಹೃದಯವಿದ್ರಾವಕವಾಗಿದೆ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ಕಾಲ್ತುಳಿತ: 10 ಭಕ್ತರು ಸಾವು, ಹಲವರಿಗೆ ಗಾಯ
ಈ ದುರ್ಘಟನೆಯ ಮಾಹಿತಿ ತಿಳಿದ ತಕ್ಷಣ ರಾಜ್ಯ ಕೃಷಿ ಸಚಿವ ಕೆ. ಅಚ್ಚಣ್ಣಾಯುಡು ಅವರು ಸ್ಥಳಕ್ಕೆ ಧಾವಿಸಿ ದೇವಾಲಯದ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚಿನ ಪೊಲೀಸ್ ಪಡೆಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.
ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ಪ್ರಸಿದ್ಧ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಕಾದಶಿ ಆಚರಣೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಹತ್ತು ಮಂದಿ ಭಕ್ತರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಏಕಾದಶಿ ಆಚರಣೆ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಾರೀ ಸಂಖ್ಯೆಯ ಭಕ್ತರು ಜಮಾಯಿಸಿದ್ದರಿಂದ ಈ ದುರಂತ ಸಂಭವಿಸಿದೆ. ಭಕ್ತರಲ್ಲಿ ನೂಕುನುಗ್ಗಲು ಉಂಟಾದ ಕಾರಣ ಹಠಾತ್ ಕಾಲ್ತುಳಿತ ಸಂಭವಿಸಿತು. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಕಚೇರಿ ʼಎಕ್ಸ್ʼ ಪೋಸ್ಟ್‌ನಲ್ಲಿ ತಿಳಿಸಿದೆ.
ಈ ದುರ್ಘಟನೆಯ ಮಾಹಿತಿ ತಿಳಿದ ತಕ್ಷಣ ರಾಜ್ಯ ಕೃಷಿ ಸಚಿವ ಕೆ.ಅಚ್ಚಣ್ಣಾಯುಡು ಅವರು ಸ್ಥಳಕ್ಕೆ ಧಾವಿಸಿ ದೇವಾಲಯದ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಪರಿಸ್ಥಿತಿ ನಿಯಂತ್ರಿಸಲು ಹೆಚ್ಚಿನ ಪೊಲೀಸ್ ಪಡೆಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ.
ಘಟನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು, ಕಾಲ್ತುಳಿತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಗಾಯಾಳುಗಳಿಗೆ ತ್ವರಿತ ಮತ್ತು ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತದ ಘಟನೆ ಆಘಾತಕಾರಿಯಾಗಿದೆ. ಈ ದುರಂತದಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ತ್ವರಿತ ಮತ್ತು ಸರಿಯಾದ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕಾರ್ತಿಕ ಮಾಸದ ಏಕಾದಶಿ ಹಿನ್ನೆಲೆ ಭಕ್ತರ ದಂಡು
ಕಾರ್ತಿಕ ಮಾಸದ ಏಕಾದಶಿ ಪ್ರಯುಕ್ತ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಜನಸಂದಣಿಯ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ತಂತಿಬೇಲಿ ಸಡಿಲಗೊಂಡು, ಹಲವರು ಕೆಳಗೆ ಬಿದ್ದರು. ಸುದ್ದಿ ತಿಳಿದ ಕೂಡಲೇ ರಕ್ಷಣಾ ತಂಡಗಳು, ಪೊಲೀಸರು ಮತ್ತು ಆಸ್ಪತ್ರೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ತನಿಖೆಗೆ ಆದೇಶ
ಘಟನೆಯ ಸ್ಥಳದಲ್ಲಿ ನಾವು ಸಂಪೂರ್ಣ ನಿಯಂತ್ರಣ ಸಾಧಿಸಿದ್ದೇವೆ. ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ದೇವಾಲಯದ ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪಗಳಾಗಿವೆಯೇ ಎಂಬುದರ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಶ್ರೀಕಾಕುಳಂ ಜಿಲ್ಲಾಧಿಕಾರಿ ರವೀಂದರ್ ಹೇಳಿದ್ದಾರೆ. ಸ್ಥಳೀಯ ಶಾಸಕ ಅನಮ್ ರಾಮನಾರಾಯಣ ರೆಡ್ಡಿ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ್ದಾರೆ.

