"ನೀಟ್ – ಯುಜಿ" ಮರು ಪರೀಕ್ಷೆ, ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಲ್ಲಿಕಾರ್ಜುನ ಖರ್ಗೆ ಆಗ್ರಹ
ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG)ಯನ್ನು ಮತ್ತೆ ನಡೆಸಬೇಕು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG)ಯನ್ನು ಮತ್ತೊಮ್ಮೆ ನಡೆಸಬೇಕು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೆ ಒಪ್ಪಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶನಿವಾರ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ಮತ್ತು ಆರ್‌ಎಸ್ಎಸ್ ಎರಡೂ ಶಿಕ್ಷಣ ಮಾಫಿಯಾವನ್ನು ಪ್ರೋತ್ಸಾಹಿಸುತ್ತಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯ (NEET-UG)ಯಲ್ಲಿ ಭಾರೀ ಅಕ್ರಮ ನಡೆದಿದ್ದು, ಎಲ್ಲಾ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಗಳ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ನೀಟ್ – ಯುಜಿ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ. ಹೀಗಾಗಿ, ಪರೀಕ್ಷೆ ರದ್ದು ಮಾಡುವಂತೆ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಆದರೆ, ಕೇಂದ್ರ ಮತ್ತು ರಾಷ್ಟ್ರೀಯ ಪರೀಕ್ಷಾ (ಏಜೆನ್ಸಿಯು) ಪ್ರಾಧಿಕಾರವು ಪರೀಕ್ಷೆ ರದ್ದು ಮಾಡುವುದರಿಂದ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂದು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಅಲ್ಲದೇ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆದಿರುವುದಕ್ಕೆ ಪುರಾವೆ ಇಲ್ಲ ಎಂದೂ ಕೇಂದ್ರ ಸರ್ಕಾರ ಹೇಳಿದೆ. ಈ ಮೂಲಕ ಕೇಂದ್ರ ಸರ್ಕಾರವು ಲಕ್ಷಾಂತರ ಯುವಕರಿಗೆ ಹಸಿ ಸುಳ್ಳನ್ನು ಹೇಳುತ್ತಿದೆ. ಅವರ ಭವಿಷ್ಯವನ್ನು ಹಾಳು ಮಾಡುತ್ತಿದೆ. ಕೆಲವು ಭಾಗದಲ್ಲಿ ಮಾತ್ರ ಅಕ್ರಮ ನಡೆದಿದೆ ಎಂದು ಶಿಕ್ಷಣ ಸಚಿವಾಲಯ ಹೇಳುತ್ತಿದ್ದರೂ, ಇದು ತಪ್ಪು ದಾರಿಗೆಳೆಯುವಂತಿದೆ ಎಂದು ಖರ್ಗೆ ಹೇಳಿದ್ದಾರೆ.
ಬಿಜೆಪಿ-ಆರ್‌ಎಸ್‌ಎಸ್ ಶಿಕ್ಷಣ ಮಾಫಿಯಾವನ್ನು ಪ್ರೋತ್ಸಾಹಿಸುತ್ತಿರುವುದಲ್ಲದೇ ಇಡೀ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸುತ್ತಿದೆ. ಎನ್‌ಸಿಇಆರ್‌ಟಿ ಪಠ್ಯ – ಪುಸ್ತಕದ ಬದಲಾವಣೆ ಅಥವಾ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದಲ್ಲಿ ಮೋದಿ ಸರ್ಕಾರ ದೇಶದ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸಲು ಪ್ರಯತ್ನಿಸುತ್ತಿದೆ ಎಂದು ಖರ್ಗೆ ಆರೋಪಿಸಿದ್ದಾರೆ.
'ನೀಟ್-ಯುಜಿʼ ಮರು ಪರೀಕ್ಷೆ ನಡೆಸಬೇಕು. ಇದನ್ನು ಪಾರದರ್ಶಕವಾಗಿ ಆನ್‌ಲೈನ್‌ನ ಮೂಲಕ ಮಾಡಬೇಕು ಎನ್ನುವ ನಮ್ಮ ಬೇಡಿಕೆಯನ್ನು ನಾವು ಪುನರುಚ್ಚರಿಸುತ್ತೇವೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಗಳೆಲ್ಲವನ್ನೂ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಕೂಲಂಕುಷವಾಗಿ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಖರ್ಗೆ ಆಗ್ರಹಿಸಿದ್ದು, ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಪ್ರಕರಣಗಳ ತನಿಖೆಯನ್ನು ಸಿಬಿಐ ಪ್ರಾರಂಭಿಸಿದೆ. ಮೋದಿ ಸರ್ಕಾರ ತನ್ನ ದುಷ್ಕೃತ್ಯಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.