
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ: ಜ.20 ರಂದು ಅಧಿಕಾರ ಸ್ವೀಕಾರ
ಅಧ್ಯಕ್ಷ ಸ್ಥಾನಕ್ಕೆ ಒಟ್ಟು 37 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇವೆಲ್ಲವೂ ನಿತಿನ್ ನಬಿನ್ ಅವರ ಪರವಾಗಿಯೇ ಇದ್ದವು. ಹೀಗಾಗಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ಯುವ ನಾಯಕ, 45 ವರ್ಷದ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾನುವಾರ (ಜ.19) ನಡೆದ ನಾಮಪತ್ರ ಪರಿಶೀಲನಾ ಪ್ರಕ್ರಿಯೆಯಲ್ಲಿ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ, ಅವರನ್ನು ಪಕ್ಷದ 13ನೇ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಘೋಷಿಸಲಾಗಿದೆ.
ಹಾಲಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಉತ್ತರಾಧಿಕಾರಿಯಾಗಿ ನಿತಿನ್ ನಬಿನ್ ಅವರು ನಾಳೆ (ಜ.20) ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಅವಿರೋಧ ಆಯ್ಕೆಯ ಹಾದಿ
ಬಿಜೆಪಿ ರಾಷ್ಟ್ರೀಯ ಚುನಾವಣಾ ಅಧಿಕಾರಿ ಕೆ. ಲಕ್ಷ್ಮಣ್ ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯ ಪ್ರಕಾರ, ಅಧ್ಯಕ್ಷ ಸ್ಥಾನಕ್ಕೆ ಒಟ್ಟು 37 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇವೆಲ್ಲವೂ ನಿತಿನ್ ನಬಿನ್ ಅವರ ಪರವಾಗಿಯೇ ಇದ್ದವು. ಬೇರೆ ಯಾವುದೇ ಉಮೇದುವಾರರು ಕಣದಲ್ಲಿ ಇಲ್ಲದ ಕಾರಣ ಮತ್ತು ನಾಮಪತ್ರ ಹಿಂಪಡೆಯುವ ಅವಧಿ ಮುಗಿದ ನಂತರ, ನಬಿನ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಲಾಗಿದೆ.
ಯುವ ನಾಯಕತ್ವಕ್ಕೆ ಮಣೆ
ಬಿಹಾರದಲ್ಲಿ ಐದು ಬಾರಿ ಶಾಸಕರಾಗಿ ಮತ್ತು ಸಚಿವರಾಗಿ ಸೇವೆ ಸಲ್ಲಿಸಿರುವ ನಿತಿನ್ ನಬಿನ್, ಡಿಸೆಂಬರ್ 2025ರಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಇದೀಗ 45ನೇ ವಯಸ್ಸಿನಲ್ಲಿಯೇ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷದ ಚುಕ್ಕಾಣಿ ಹಿಡಿಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
ನಾಳೆ ದೆಹಲಿಯಲ್ಲಿ ನಡೆಯಲಿರುವ ಪದಗ್ರಹಣ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೆ.ಪಿ. ನಡ್ಡಾ ಹಾಗೂ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.

