
ಜೈಪುರ| ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲೆ ಹಲ್ಲೆ; 10 ಮಂದಿಗೆ ಗಾಯ
ರಾಜಸ್ತಾನದ ಜೈಪುರದ ಬಳಿ ಗುರುವಾರ ರಾತ್ರಿ ದೇವಸ್ಥಾನವೊಂದರಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದ್ದು, ಹತ್ತು ಮಂದಿ ಗಾಯಗೊಂಡಿದ್ದಾರೆ.
ಶರದ್ ಪೂರ್ಣಿಮೆ ನಿಮಿತ್ತ ಗುರುವಾರ ರಾತ್ರಿ ದೇವಸ್ಥಾನದಲ್ಲಿ ಜಾಗರಣೆ ಕಾರ್ಯಕ್ರಮ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡುತ್ತಿದ್ದಾಗ ಅಕ್ಕಪಕ್ಕದ ಇಬ್ಬರು ವ್ಯಕ್ತಿಗಳು ತಡರಾತ್ರಿ ಕಾರ್ಯಕ್ರಮ ನಡೆಸಲು ಆಕ್ಷೇಪ ವ್ಯಕ್ತಪಡಿಸಿದರು ಎನ್ನಲಾಗಿದೆ.
ವಾಗ್ವಾದ ವಿಕೋಪಕ್ಕೆ ತಿರುಗಿದ ಬಳಿಕ ಆರ್‌ಎಸ್‌ಎಸ್ ಕಾರ್ಯಕರ್ತರ ಮೇಲ್ಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಇದರಿಂದ 10 ಆರ್‌ಎಸ್‌ಎಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡ ಆರು ಮಂದಿಯನ್ನು ಚಿಕಿತ್ಸೆಗಾಗಿ ಸವಾಯಿ ಮಾನ್ ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳಾದ ನಸೀಬ್ ಚೌಧರಿ ಮತ್ತು ಆತನ ಮಗನನ್ನು ವಶಕ್ಕೆ ಪಡೆಯಲಾಗಿದ್ದು, ದಾಳಿಯಲ್ಲಿ ಭಾಗಿಯಾಗಿರುವ ಇತರರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ, ಹೆಚ್ಚಿನ ತನಿಖೆಯನ್ನು ಮುಂದುವರಿಸಲಾಗಿದೆ.
ಹೆದ್ದಾರಿ ಬಂದ್
ಘಟನೆಯಿಂದ ಆಕ್ರೋಶಗೊಂಡ ಕೆಲವರು ದೆಹಲಿ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯನ್ನು ಕೆಲಕಾಲ ತಡೆದರು. ಆದರೆ, ಪೊಲೀಸರ ಮಧ್ಯಸ್ಥಿಕೆಯಿಂದ ತಡರಾತ್ರಿ ಧರಣಿ ಹಿಂಪಡಯಲಾಯಿತು.