
ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಕೆಮ್ಮಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಅವರ ಆರೋಗ್ಯದ ಸಂಪೂರ್ಣ ಅಪ್‌ಡೇಟ್ ಇಲ್ಲಿದೆ.
ಎಐಸಿಸಿ ಮಾಜಿ ಅಧ್ಯಕ್ಷೆ ಹಾಗೂ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ಆಸ್ಪತ್ರೆಯ ಮೂಲಗಳ ಪ್ರಕಾರ, ಸೋನಿಯಾ ಗಾಂಧಿ ಅವರು ದೀರ್ಘಕಾಲದ ಕೆಮ್ಮಿನ (Chronic Cough) ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸೋಮವಾರ ಸಂಜೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಹೃದಯ ಸಂಬಂಧಿ ರೋಗ ತಜ್ಞರ ನಿಗಾದಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಸದ್ಯಕ್ಕೆ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಹಲವು ವರ್ಷಗಳಿಂದ ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ, ನಿಯಮಿತ ತಪಾಸಣೆಗಾಗಿ ಅವರು ಆಸ್ಪತ್ರೆಗೆ ಬರುತ್ತಿರುತ್ತಾರೆ. ಮುಖ್ಯವಾಗಿ ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದಿಂದಾಗಿ ಅವರಿಗೆ ಉಸಿರಾಟದ ತೊಂದರೆ ಮತ್ತು ಕೆಮ್ಮು ಹೆಚ್ಚಾಗುತ್ತಿದೆ ಎಂದು ಹೇಳಲಾಗಿದೆ. ವೈದ್ಯರ ಪ್ರಕಾರ, ಸೋನಿಯಾ ಗಾಂಧಿ ಅವರಿಗೆ ದೀರ್ಘಕಾಲದ ಶ್ವಾಸಕೋಶದ ಸೋಂಕು ಮತ್ತು ಉಸಿರಾಟದ ಅಲರ್ಜಿ ಸಮಸ್ಯೆ ಇದೆ. ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾದಾಗಲೆಲ್ಲಾ (ವಿಶೇಷವಾಗಿ ಚಳಿಗಾಲದಲ್ಲಿ) ಅವರಿಗೆ ಉಸಿರಾಟದ ತೊಂದರೆ ಮತ್ತು ತೀವ್ರ ಕೆಮ್ಮು ಕಾಣಿಸಿಕೊಳ್ಳುತ್ತದೆ. ಇದೇ ಕಾರಣಕ್ಕೆ ಅವರು ಆಗಾಗ್ಗೆ ತಪಾಸಣೆಗೆ ಒಳಗಾಗುತ್ತಿರುತ್ತಾರೆ.
ಸೋನಿಯಾ ಗಾಂಧಿ ಅವರು ಇತ್ತೀಚೆಗಷ್ಟೇ ತಮ್ಮ 79ನೇ ಜನ್ಮದಿನವನ್ನು ಆಚರಿಸಿಕೊಂಡಿದ್ದರು. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಅಪ್‌ಡೇಟ್‌ಗಳಿಗಾಗಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಕಾಯುತ್ತಿದ್ದಾರೆ.

