
ಕೊಯಮತ್ತೂರಿನಲ್ಲಿ ಘೋರ ಕೃತ್ಯ: ವಿಮಾನ ನಿಲ್ದಾಣದ ಬಳಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ
ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂತ್ರಸ್ತ ಯುವತಿಯು, ಭಾನುವಾರ ರಾತ್ರಿ ಸುಮಾರು 11 ಗಂಟೆಯ ಸಮಯದಲ್ಲಿ ತನ್ನ ಸ್ನೇಹಿತನೊಂದಿಗೆ ಕಾರಿನಲ್ಲಿ ಮಾತನಾಡುತ್ತಾ ಕುಳತಿದ್ದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ.
ತಮಿಳುನಾಡಿನ ಪ್ರಮುಖ ನಗರವಾದ ಕೊಯಮತ್ತೂರಿನಲ್ಲಿ ಭಾನುವಾರ ರಾತ್ರಿ ನಡೆದ ಘಟನೆಯೊಂದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ, 19 ವರ್ಷದ ಎಂಬಿಎ ವಿದ್ಯಾರ್ಥಿನಿಯೊಬ್ಬಳನ್ನು ಮೂವರು ದುಷ್ಕರ್ಮಿಗಳು ಆಕೆಯ ಸ್ನೇಹಿತನ ಮೇಲೆಯೇ ಹಲ್ಲೆ ನಡೆಸಿ, ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಅತ್ಯಂತ ಬಿಗಿ ಭದ್ರತೆ ಇರುವ ಪ್ರದೇಶದಲ್ಲೇ ಈ ಘೋರ ಕೃತ್ಯ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.
ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂತ್ರಸ್ತ ಯುವತಿಯು, ಭಾನುವಾರ ರಾತ್ರಿ ಸುಮಾರು 11 ಗಂಟೆಯ ಸಮಯದಲ್ಲಿ ತನ್ನ ಸ್ನೇಹಿತನೊಂದಿಗೆ ಕಾರಿನಲ್ಲಿ ಮಾತನಾಡುತ್ತಾ ಕುಳಿತಿದ್ದರು.ಈ ವೇಳೆ, ದ್ವಿಚಕ್ರ ವಾಹನದಲ್ಲಿ ಬಂದ ಮೂವರು ಅಪರಿಚಿತರು, ಕಾರನ್ನು ಅಡ್ಡಗಟ್ಟಿ ಅವರನ್ನು ಬೆದರಿಸಿದ್ದಾರೆ. ಯುವತಿಯ ಸ್ನೇಹಿತ ಪ್ರತಿರೋಧ ತೋರಿದಾಗ, ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಆತನನ್ನು ಅಟ್ಟಾಡಿಸಿದ್ದಾರೆ. ನಂತರ, ಕಾರಿನಲ್ಲಿದ್ದ ಯುವತಿಯನ್ನು ಬಲವಂತವಾಗಿ ಹೊರಗೆಳೆದು, ಸಮೀಪದ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು, ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ
ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಯುವತಿ
ದುಷ್ಕರ್ಮಿಗಳಿಂದ ತೀವ್ರವಾಗಿ ಗಾಯಗೊಂಡಿದ್ದು, ಸ್ನೇಹಿತ ಪೀಳಮೇಡು ಪೊಲೀಸ್ ಠಾಣೆಯನ್ನು ತಲುಪಿ ವಿಷಯ ತಿಳಿಸಿದ್ದಾನೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಏಳು ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ, ವಿಮಾನ ನಿಲ್ದಾಣದ ಸಮೀಪದ ಖಾಸಗಿ ಕಾಲೇಜಿನ ಹಿಂದಿನ ಖಾಲಿ ಜಾಗದಲ್ಲಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚಿದ್ದಾರೆ. ತಕ್ಷಣವೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಮತ್ತು ಆಕೆಯ ಸ್ನೇಹಿತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜಕೀಯ ವಾಕ್ಸಮರ
ಈ ಘಟನೆಯು ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಮಹಿಳಾ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಚರ್ಚೆಯನ್ನು ಹುಟ್ಟುಹಾಕಿದೆ. ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ, ರಾಜ್ಯದ ಡಿಎಂಕೆ ಸರ್ಕಾರದ ವಿರುದ್ಧ ಹರಿಹಾಯ್ದಿದೆ. "ಡಿಎಂಕೆ ಅಧಿಕಾರಕ್ಕೆ ಬಂದಾಗಿನಿಂದ ಸಮಾಜಘಾತುಕ ಶಕ್ತಿಗಳಿಗೆ ಕಾನೂನಿನ ಭಯವೇ ಇಲ್ಲದಾಗಿದೆ. ಸರ್ಕಾರವು ಮಹಿಳೆಯರಿಗೆ ಭದ್ರತೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ," ಎಂದು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಆರೋಪಿಸಿದ್ದಾರೆ.
ಈ ಆರೋಪಗಳನ್ನು ತಳ್ಳಿಹಾಕಿರುವ ಡಿಎಂಕೆ, "ಇದು ದುರದೃಷ್ಟಕರ ಘಟನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ತಮಿಳುನಾಡಿನಲ್ಲಿ ಲೈಂಗಿಕ ಅಪರಾಧ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲಾಗುತ್ತದೆ," ಎಂದು ಸ್ಪಷ್ಟನೆ ನೀಡಿದೆ.
ಈ ವರ್ಷದ ಆರಂಭದಲ್ಲಿ ಅಣ್ಣಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದಿದ್ದ ಅತ್ಯಾಚಾರ ಘಟನೆಯ ಬೆನ್ನಲ್ಲೇ, ಇದೀಗ ಕೊಯಮತ್ತೂರಿನಲ್ಲಿ ನಡೆದಿರುವ ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಪೊಲೀಸರು ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.

