
ಕರೂರು ಕಾಲ್ತುಳಿತ ದುರಂತ: ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂಕೋರ್ಟ್
ಸೆಪ್ಟೆಂಬರ್ 27 ರಂದು ತಮಿಳು ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಆಯೋಜಿಸಿದ್ದ ರಾಜಕೀಯ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿ, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರ (ಅ.13) ಸಿಬಿಐ ತನಿಖೆಗೆ ಆದೇಶಿಸಿದೆ. ಕಳೆದ ತಿಂಗಳು ನಡೆದ ಈ ಘಟನೆಯಲ್ಲಿ 41 ಜನರು ಮೃತಪಟ್ಟಿದ್ದರು. ತನಿಖೆಯ ಮೇಲ್ವಿಚಾರಣೆಗಾಗಿ ಸುಪ್ರೀಂಕೋರ್ಟ್ ಮಾಜಿ ನ್ಯಾಯಮೂರ್ತಿ ಅಜಯ್ ರಸ್ತೋಗಿ ಅವರ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ಸಹ ರಚಿಸಲಾಗಿದೆ.
ಸೆ.27 ರಂದು ತಮಿಳು ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ಆಯೋಜಿಸಿದ್ದ ರಾಜಕೀಯ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿ, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಘಟನೆಯ ತನಿಖೆಗಾಗಿ ಮದ್ರಾಸ್ ಹೈಕೋರ್ಟ್ ವಿಶೇಷ ತನಿಖಾ ತಂಡವನ್ನು (SIT) ರಚಿಸಿತ್ತು.
ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು, ಪ್ರಕರಣವನ್ನು ಸಿಬಿಐಗೆ ವಹಿಸುವುದಾಗಿ ಆದೇಶಿಸಿತು. ಅಲ್ಲದೆ, ತನಿಖೆಯು ನಿಷ್ಪಕ್ಷಪಾತವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದಲ್ಲಿ ತ್ರಿಸದಸ್ಯ ಮೇಲ್ವಿಚಾರಣಾ ಸಮಿತಿ ನೇಮಿಸಿತು.
ಹೈಕೋರ್ಟ್ನಲ್ಲಿ ತಿರಸ್ಕಾರ
ಈ ಹಿಂದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು ಸಿಬಿಐ ತನಿಖೆಯ ಮನವಿ ತಿರಸ್ಕರಿಸಿದ್ದರೆ, ಪ್ರಧಾನ ಪೀಠವು ಎಸ್‌ಐಟಿ ತನಿಖೆಗೆ ಆದೇಶಿಸಿತ್ತು. ಈ ಎರಡು "ಪರಸ್ಪರ ವಿರುದ್ಧವಾದ" ಆದೇಶಗಳ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಗೊಂದಲ ನಿವಾರಿಸಲು ಮತ್ತು ಪ್ರಕರಣದ ಸತ್ಯಾಸತ್ಯತೆ ಹೊರತರಲು ಸಿಬಿಐ ತನಿಖೆಗೆ ಆದೇಶಿಸಲಾಗಿದೆ.