
ದೆಹಲಿ ಸ್ಫೋಟ: ಪೊಲೀಸರಿಗೆ ವಿಶೇಷ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ
Delhi Blast Aftermath: CM Siddaramaiah Issues Top-Level Instructions
"ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾದ ಸುದ್ದಿ ನೋವಿನ ಜೊತೆಗೆ ದಿಗ್ಭ್ರಮೆ ಉಂಟುಮಾಡಿದೆ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಭೀಕರ ಘಟನೆಯ ಹಿನ್ನೆಲೆಯಲ್ಲಿ, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ಕರ್ನಾಟಕದಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಅವರು ಆದೇಶಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು, "ದೆಹಲಿಯ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಜನನಿಬಿಡ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿ, ಜನರ ಸುರಕ್ಷತೆಗೆ ಆದ್ಯತೆ ನೀಡುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ," ಎಂದು ತಿಳಿಸಿದ್ದಾರೆ.
ಸ್ಫೋಟದಲ್ಲಿ ಮಡಿದವರಿಗೆ ಸಂತಾಪ ಸೂಚಿಸಿದ ಅವರು, "ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ," ಎಂದಿದ್ದಾರೆ.
"ರಾಜ್ಯದಲ್ಲಿ ಯಾವುದೇ ತರನಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆಯ ಜೊತೆ ಸಹಕರಿಸಬೇಕು," ಎಂದು ಮುಖ್ಯಮಂತ್ರಿಗಳು ಜನರಲ್ಲಿ ಮನವಿ ಮಾಡಿದ್ದಾರೆ.

