ನಟಿ ಸಂಜನಾ ಡ್ರಗ್‌ ಪ್ರಕರಣ: ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ
x
ಸಂಜನಾ ಗಲ್ರಾನಿ

ನಟಿ ಸಂಜನಾ ಡ್ರಗ್‌ ಪ್ರಕರಣ: ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ

‘ಈಗಾಗಲೇ ಸರ್ಕಾರದ ಮಟ್ಟದಲ್ಲಿ ಸಭೆ ನಡೆಸಿ ಅರ್ಜಿ ತಯಾರಿ ಮಾಡಲಾಗಿದೆ. ಪ್ರಾಸಿಕ್ಯೂಷನ್ ಅನುಮತಿ ಬರುತ್ತಿದ್ದಂತೆ ಅರ್ಜಿ ಸಲ್ಲಿಕೆ ಆಗಲಿದೆ’ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಹೇಳಿಕೆ ನೀಡಿದ್ದಾರೆ.


ಡ್ರಗ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ ಅವರ ವಿರುದ್ಧ ಮಾದಕ ವಸ್ತು ಸೇವನೆ ಪ್ರಕರಣ ಸಂಬಂಧ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಬೆಂಗಳೂರು ಸಿಸಿಬಿ ಪೊಲೀಸರು ನಿರ್ಧರಿಸಿದ್ದಾರೆ.

ಮಾದಕ ವಸ್ತು ಸೇವನೆ ಪ್ರಕರಣ ಸಂಬಂಧಿಸಿ ಸಂಜನಾ ಅವರು ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಬಳಿಕ ಸಂಜನಾ ಅವರ ಪ್ರಕರಣ ಹೈಕೋರ್ಟ್‌ನಲ್ಲಿ ವಜಾಗೊಂಡಿತ್ತು. ಇದೀಗ ಮಾದಕ ವಸ್ತು ಸೇವನೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ , ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಿಸಿಬಿ ಪೊಲೀಸರು ಗೃಹ ಇಲಾಖೆಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

‘ಈಗಾಗಲೇ ಸರ್ಕಾರದ ಮಟ್ಟದಲ್ಲಿ ಸಭೆ ನಡೆಸಿ ಅರ್ಜಿ ತಯಾರಿ ಮಾಡಲಾಗಿದೆ. ಪ್ರಾಸಿಕ್ಯೂಷನ್ ಅನುಮತಿ ಬರುತ್ತಿದ್ದಂತೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಆಗಲಿದೆ’ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಹೇಳಿಕೆ ನೀಡಿದ್ದಾರೆ.

2020ರ ಸೆಪ್ಟೆಂಬರ್ 8 ರಂದು ನಟಿ ಸಂಜನಾ ಗಲ್ರಾನಿಯನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಬಂಧಿಸಿದ್ದರು. ಅವರನ್ನು ಪರಪ್ಪರ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇಡಲಾಗಿತ್ತು. ಡಿಸೆಂಬರ್ 11 ರಂದು ಕರ್ನಾಟಕ ರಾಜ್ಯ ಹೈಕೋರ್ಟ್‌ ಸಂಜನಾ ಗೆ ಜಾಮೀನು ಮಂಜೂರು ಮಾಡಿ ಜೈಲಿನಿಂದ ಬಿಡುಗಡೆಗೊಳಿಸಿತ್ತು. ಸಂಜನಾ ಗಲ್ರಾನಿ ಅವರು ಕನ್ನಡ, ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಅವರು ಮದುವೆಯಾಗಿದ್ದು, ಮಗುವಿಗೂ ಜನ್ಮ ನೀಡಿದ್ದಾರೆ, ಸಿನಿಮಾದಲ್ಲಿ ಅಷ್ಟೊಂದು ಸಕ್ರಿಯವಾಗಿಲ್ಲ. ಅವರು 2018ರ ‘ದಂಡುಪಾಳ್ಯ 3’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು.

Read More
Next Story