
ಬಳ್ಳಾರಿಯಲ್ಲಿ ಕೋಳಿಜ್ವರ ಭೀತಿ ಎದುರಾಗಿದೆ.
Bird Flu | ಬಳ್ಳಾರಿಗೂ ವ್ಯಾಪಿಸಿದ ಹಕ್ಕಿಜ್ವರ: ವಾರದಲ್ಲಿ 2 ಸಾವಿರ ಕೋಳಿ ಸಾವು
ಪ್ರಯೋಗಾಲಯದ ವರದಿ ಬಂದ ಬಳಿಕ ಕೋಳಿಗಳಲ್ಲಿ ಹಕ್ಕಿಜ್ವರ ಇರುವುದು ದೃಢಪಟ್ಟಿತು. ಆಂಧ್ರಪ್ರದೇಶ, ತೆಲಂಗಾಣದಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ
ನೆರೆಯ ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶದಲ್ಲಿ ಹಕ್ಕಿಜ್ವರ ವ್ಯಾಪಕವಾಗಿ ಹರಡುತ್ತಿದ್ದು, ಇತ್ತೀಚೆಗೆ ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಗ್ರಾಮದಲ್ಲಿ 50ಕ್ಕೂ ಅಧಿಕ ಕೋಳಿಗಳು ಸತ್ತಿದ್ದು, ಹಕ್ಕಿಜ್ವರ ಭೀತಿ ಎದುರಾಗಿತ್ತು. ಇದೀಗ ಬಳ್ಳಾರಿಯಲ್ಲೂ ಹಕ್ಕಿಜ್ವರದ ಆತಂಕ ಮನೆ ಮಾಡಿದ್ದು, ಸಂಡೂರ ತಾಲೂಕಿನ ಕುರೇಕುಪ್ಪ ಗ್ರಾಮದ ಬಳಿಯ ಸರ್ಕಾರಿ ಪಾಲ್ಟ್ರಿ ಪಾರ್ಮನಲ್ಲಿನ 2400 ಕೋಳಿಗಳು ಹಕ್ಕಿಜ್ವರದಿಂದ ಮೃತಪಟ್ಟಿವೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾಹಿತಿ ನೀಡಿದ್ದಾರೆ.
ಫೆಬ್ರವರಿ 21 ರಿಂದ ಇಲ್ಲಿಯವರೆಗೆ ಹಂತ ಹಂತವಾಗಿ 2400 ಕೋಳಿಗಳ ಮೃತಪಟ್ಟಿವೆ. ಸತ್ತ ಕೋಳಿಗಳ ಮಾದರಿ ಸಂಗ್ರಹಿಸಿ ಮಧ್ಯಪ್ರದೇಶದ ಭೂಪಾಲ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಪ್ ಹೈ ಸೆಕ್ಯೂರಿಟಿ ಅನಿಮಲ್ ಡಿಸೀಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪ್ರಯೋಗಾಲಯದ ವರದಿ ಬಂದ ಬಳಿಕ ಕೋಳಿಗಳಲ್ಲಿ ಹಕ್ಕಿಜ್ವರ ಇರುವುದು ದೃಢಪಟ್ಟಿತು. ಆಂಧ್ರಪ್ರದೇಶ, ತೆಲಂಗಾಣದಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದರು.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಜಿಲ್ಲೆಯಲ್ಲಿ ಅಗತ್ಯ ಕ್ರಮ ಕೈಗೊಂಡಿದೆ. ಕುರೇಕುಪ್ಪ ಗ್ರಾಮದ ಸುತ್ತಲಿನ ಒಂದು ಕಿಮೀ ದೂರವನ್ನು ಅಪಾಯಕಾರಿ ವಲಯ ಎಂದು ಗುರುತು ಮಾಡಲಾಗಿದೆ. ತೋರಣಗಲ್ಲು, ಕುರೆಕುಪ್ಪ, ವಡ್ಡು, ತಾಳೂರು, ಬಸಾಪುರ, ದರೋಜಿ, ದೇವಲಾಪುರ ಗ್ರಾಮಗಳು ಸೇರಿದಂತೆ 10 ಕಿಮೀ ವ್ಯಾಪ್ತಿಯ ಪ್ರದೇಶವನ್ನು ಕಣ್ಣಗಾವಲು ವಲಯ ಎಂದು ಗುರುತು ಮಾಡಲಾಗಿದೆ.
ಹಕ್ಕಿ ಜ್ವರವನ್ನು ಏವಿಯನ್ ಇನ್ಫುಯೆಂಜ ಎಂದು ಕರೆಯಲಾಗುತ್ತದೆ. ಇದು ಒಂದು ರೀತಿಯ ವೈರಲ್ ಸೋಂಕು. ಇದು ಪಕ್ಷಿಗಳಲ್ಲಿ ವಿಶೇಷವಾಗಿ ಕಂಡುಬರುತ್ತದೆ. ಇದು ಹೆಚ್ಚಾಗಿ ಕೋಳಿಗಳು, ಟರ್ಕಿಗಳು ಮತ್ತು ಬಾತುಕೋಳಿಗಳ ಮೇಲೆ ಪರಿಣಾಮ ಬೀರುತ್ತದೆ. ಈ ರೋಗಕ್ಕೆ H5N1, H7N9 ಮತ್ತು H5N8 ವೈರಸ್ ಕಾರಣ. ಆದರೆ ಕೆಲವು ತಳಿಗಳಿಂದ ಮನುಷ್ಯರಿಗೆ ಸೋಂಕು ತಗುಲುವುದಿಲ್ಲ.