
ಸಿಎಂ ಸಿದ್ದರಾಮಯ್ಯನವರು ಕನ್ನಡಿಗನ ಮೇಲಿನ ಹಲ್ಲೆಯನ್ನು ಖಂಡಿಸಿದ್ದಾರೆ
ಕನ್ನಡಿಗನ ಮೇಲೆ ಹಲ್ಲೆಗೆ ಸಿಎಂ ಖಂಡನೆ, ವಿಂಗ್ ಕಮಾಂಡರ್ ವಿರುದ್ಧ ಕ್ರಮಕ್ಕೆ ಸೂಚನೆ
ಟೆಕಿ ವಿಕಾಸ್ ಕುಮಾರ್ ಮೇಲೆ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಹಲ್ಲೆ ನಡೆಸಿರುವ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದು ಅವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕಿ ವಿಕಾಸ್ ಕುಮಾರ್ ಮೇಲೆ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಹಲ್ಲೆ ನಡೆಸಿರುವ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದು, ವಿಂಗ್ ಕಮಾಂಡರ್ ವಿರುದ್ದ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದಾರೆ.
ತಮ್ಮ ಎಕ್ಸ್(ಟ್ವಿಟ್ಟರ್) ಖಾತೆಯಲ್ಲಿ ಈ ಕುರಿತು ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ. ಕನ್ನಡಿಗನ ಮೇಲೆಯೇ ವಿಂಗ್ ಕಮಾಂಡರ್ ಹಲ್ಲೆ ನಡೆಸಿದ್ದು, ನಂತರ ಸಾಮಾಜಿಕ ಜಾಲತಾಣಗಳಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ.
ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ, ಭಾಷೆಯ ವಿಚಾರಕ್ಕೆ ವಿನಾಕಾರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರಿಗಿಲ್ಲ. ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ ಮತ್ತು ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು ಎಂದು ಹೇಳಿದ್ದಾರೆ.
ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಇಡೀ ರಾಜ್ಯದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ ಎಂದಿರುವ ಅವರು ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು ಎಂದು ತಿಳಿಸಿದ್ದಾರೆ.
ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.