
ಆರ್ಸಿಬಿ ವಿಜಯೋತ್ಸವ ದುರಂತ: ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಆದೇಶ
ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ 10 ಲಕ್ಷ ರೂ. ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದೆ. 15 ದಿನದಲ್ಲಿ ಘಟನೆ ಕುರಿತು ತನಿಖೆ ನಡೆಸಿ ವರದಿ ನೀಡಲು ಸಿಎಂ ಸೂಚನೆ ನೀಡಿದ್ದಾರೆ.
ಐಪಿಎಲ್ ಪಂದ್ಯದಲ್ಲಿ ಐತಿಹಾಸಿಕ ಜಯ ಸಾಧಿಸಿದ ಆರ್ಸಿಬಿ ತಂಡ ವಿಜಯೋತ್ಸವ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಲು ತೀರ್ಮಾನಿಸಲಾಗಿದೆ ಮತ್ತು ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಘಟನೆ ಕುರಿತು ಕಾವೇರಿ ನಿವಾಸದಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರಾಗಿದ್ದಾರೆ ಎಂದು ಹೇಳಿದರು.
ದುರಂತದ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15 ದಿನಗಳೊಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ನೀಡಲಾಗಿದ್ದು, ಸಂಭ್ರಮಾಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಾಗಿತ್ತು. ಸರ್ಕಾರ ಇದಕ್ಕಾಗಿ ಬಹಳ ವಿಷಾದ ವ್ಯಕ್ತಪಡಿಸುತ್ತದೆ. ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿ ಜನ, ಅಭಿಮಾನಿಗಳು ಸೇರಿದ್ದರು. ವಿಧಾನಸೌಧ ಎದುರು ಸುಮಾರು 1ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ವಿಧಾನಸೌಧ ಎದುರು ನಡೆದ ಸಮಾರಂಭದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು, ದುರಂತ ನಡೆದಿಲ್ಲ. ಆದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ಸಂಭವಿಸಿದೆ. ಯಾರೂ ಇದನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಕ್ರಿಕೆಟ್ ಸ್ಟೇಡಿಯಂನಲ್ಲಿ 35ಸಾವಿರ ಜನರು ಕುಳಿತುಕೊಳ್ಳುವ ಆಸನ ವ್ಯವಸ್ಥೆಯಿದೆ. ಆದರೆ 2-3 ಲಕ್ಷ ಜನರು ಆಗಮಿಸಿದ್ದಾರೆ. ಇಷ್ಟೊಂದು ಪ್ರಮಾಣದಲ್ಲಿ ಜನರು ಬರುವ ನಿರೀಕ್ಷೆ ಮಾಡಿರಲಿಲ್ಲ. ಸ್ಟೇಡಿಯಂ ಸಾಮರ್ಥ್ಯದಷ್ಟು ಜನರ ನಿರೀಕ್ಷೆಯಿತ್ತು. ಗಾಯಗೊಂಡವರಿಗೆ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ನೆರವು ಸರ್ಕಾರ ಒದಗಿಸಲಿದೆ. ಈ ವಿಷಯದಲ್ಲಿ ರಾಜಕೀಯ ನಡೆಸುವುದು ಸರಿಯಲ್ಲ ಎಂದರು.