
ಭಾರಿ ಮಳೆಗೆ ಕೊಚ್ಚಿ ಹೋಗಿರುವ ರಸ್ತೆ.
ಬೆಳಗಾವಿ, ಧಾರವಾಡದಲ್ಲಿ ಭಾರಿ ಮಳೆ, ಇಬ್ಬರು ಮೃತ, ಒಬ್ಬರು ಕಾಣೆ
ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯನಗರ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗಿದ್ದು ಹಲವೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ಗುರುವಾರ(ಜೂ.12) ಭಾರಿ ಮಳೆಯಾಗಿದ್ದು ಬೆಳಗಾವಿ, ಧಾರವಾಡ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಇಬ್ಬರು ಮೃತಪಟ್ಟು, ಒಬ್ಬರು ಕಾಣೆಯಾಗಿದ್ದಾರೆ.
ಮಳೆ ಸಂಬಂಧಿತ ಅವಘಡಗಳಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ಮನೆ ಕುಸಿದುಬಿದ್ದು ಫಕ್ಕೀರವ್ವ ಲಕ್ಷ್ಮಣ ಹಾವೇರಿ (65) ಹಾಗೂ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಂಚಿನಾಳ ಹಾಗೂ ದೇವನೂರ ಮಧ್ಯದ ಹಳ್ಳದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಶಿವಯ್ಯ ವಾಟ್ನಾಳಮಠ (29) ಎಂಬುವರು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಕಸಬಾಪೇಟೆಯ ಬಿರಬಂದ್ ಕಾಲೊನಿ ನಿವಾಸಿ ಮೊಹಮ್ಮದ್ ಹುಸೇನಸಾಬ್ ಕಳಸ (54) ನೀರಿನಲ್ಲಿ ಕೊಚ್ಚಿ ಹೋಗಿದ್ದು ಅವರ ಪತ್ತೆಗೆ ಶೋಧ ಮುಂದುವರೆದಿದೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನಲ್ಲಿ ಬೆಳಿಗ್ಗೆ ಸುರಿದ ಭಾರಿ ಮಳೆಯಿಂದಾಗಿ ಗಂವ್ಹಾರ ಗ್ರಾಮದ ಹಲವು ಮನೆಗಳು ಜಲಾವೃತಗೊಂಡಿವೆ. ನೀರು ಮನೆಯೊಳಗೆ ನುಗ್ಗಿದ್ದರಿಂದ ಆಹಾರ ಪದಾರ್ಥಗಳು ಹಾಗೂ ವಿದ್ಯುತ್ ಉಪಕರಣಗಳು ಹಾಳಾಗಿವೆ.
ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯನಗರ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗಿದೆ. ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದ್ದು, ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಜಿಟಿಜಿಟಿ ಮಳೆ ಸುರಿದಿದೆ.
ಸಚಿವ ಸಂತೋಷ್ ಲಾಡ್ ಭೇಟಿ
ಧಾರವಾಡದ ಕುಂದಗೋಳ ತಾಲೂಕಿನ ವಿವಿಧ ಪ್ರದೇಶಗಳಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಳೆಯಿಂದ ನಷ್ಟವಾಗಿರುವ ಕುಟುಂಬಗಳಿಗೆ ಅಗತ್ಯ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಆರೆಂಜ್ ಅಲರ್ಟ್ ಘೋಷಣೆ
ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಯೆಲ್ಲೋ ಅಲರ್ಟ್ ಘೋಷಣೆ
ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮತ್ತು ಮಂಡ್ಯ ಸೇರಿದಂತೆ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.