![Mysore MUDA Case: ಸಿದ್ದರಾಮಯ್ಯಗೆ ರಿಲೀಫ್: ಸಿಬಿಐ ತನಿಖೆಗೆ ಹೈಕೋರ್ಟ್ ನಿರಾಕರಣೆ Mysore MUDA Case: ಸಿದ್ದರಾಮಯ್ಯಗೆ ರಿಲೀಫ್: ಸಿಬಿಐ ತನಿಖೆಗೆ ಹೈಕೋರ್ಟ್ ನಿರಾಕರಣೆ](https://karnataka.thefederal.com/h-upload/2025/02/03/510254-c.webp)
Mysore MUDA Case: ಸಿದ್ದರಾಮಯ್ಯಗೆ ರಿಲೀಫ್: ಸಿಬಿಐ ತನಿಖೆಗೆ ಹೈಕೋರ್ಟ್ ನಿರಾಕರಣೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ಗುರುವಾರ ತೀರ್ಪು ಪ್ರಕಟಿಸಿದೆ.
ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡ ಸಂಕಷ್ಟದಿಂದ ಪಾರಾಗಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ ಧಾರವಾಡ ಪೀಠ ಇಂದು (ಶುಕ್ರವಾರ) ತೀರ್ಪು ಪ್ರಕಟಿಸಿದೆ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ ಎಂಬುದನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ, ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ನ್ಯಾಯಪೀಠ ಹೇಳಿದ್ದೇನು?
"ಲೋಕಾಯುಕ್ತ ಕಚೇರಿಯು ಬಾಹ್ಯ ಪ್ರಭಾವಗಳಿಗೆ ಒಳಗಾಗಿಲ್ಲ ಎಂಬುದನ್ನು ಈಗಾಗಲೇ ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ವಿಭಾಗೀಯ ಪೀಠ ಮನಗಂಡಿವೆ. ಪ್ರಕರಣವನ್ನು ಹೆಚ್ಚಿನ ತನಿಖೆ ಅಥವಾ ಮರು ತನಿಖೆಗೆ ಸಿಬಿಐಗೆ ವಹಿಸುವಷ್ಟು ಲೋಕಾಯುಕ್ತ ರೋಗಗ್ರಸ್ತವಾಗಿಲ್ಲ. ಎಲ್ಲಾ ಕಾಯಿಲೆಗಳಿಗೂ ಸಿಬಿಐ ತನಿಖೆಯೇ ಮದ್ದಲ್ಲ" ಎಂದು ನ್ಯಾಯಪೀಠ ಹೇಳಿದೆ.
"ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನಡೆಸುತ್ತಿರುವ ತನಿಖೆ ಪಕ್ಷಪಾತದಿಂದ ಕೂಡಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಹಾಗಾಗಿ ಹೆಚ್ಚಿನ ತನಿಖೆ ಅಥವಾ ಮರು ತನಿಖೆಗಾಗಿ ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ" ಎಂದು ಸ್ಪಷ್ಟಪಡಿಸಿದೆ.
ವಾದ-ವಿವಾದವೇನು?
ದೂರುದಾರ ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮಣೀಂದರ್ ಸಿಂಗ್, ಲೋಕಾಯುಕ್ತ ಪೊಲೀಸರು ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಸುತ್ತಿಲ್ಲ. ಲೋಕಾಯುಕ್ತ ಸಂಸ್ಥೆ ರಾಜ್ಯ ಸರ್ಕಾರದ ಅಧೀನದಲ್ಲಿರುವ ಕಾರಣ ತನಿಖೆಯ ಮೇಲೆ ವಿಶ್ವಾಸವಿಲ್ಲ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಲೋಕಾಯುಕ್ತ ಕಾಯ್ದೆಯ ಸೆಕ್ಷನ್ ೭ ರಡಿ ಮುಖ್ಯಮಂತ್ರಿ ಸೇರಿದಂತೆ ಸಾರ್ವಜನಿಕ ಸೇವೆಯಲ್ಲಿರುವವರು, ಸರ್ಕಾರಿ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸುವ ಅಧಿಕಾರ ಒಳಗೊಂಡಿದೆ. ದಾವೆ ಹೂಡಿದವರು ಹಾಗೂ ಪ್ರತಿವಾದಿಗಳು ಇಬ್ಬರೂ ತನಿಖೆಯ ಬಗ್ಗೆ ಸಂಶಯ ವ್ಯಕ್ತಪಡಿಸಿದರೆ ಮಾತ್ರ ಬೇರೆ ಸಂಸ್ಥೆಗೆ ವರ್ಗಾಯಿಸಬಹುದು.ಆದಾಗ್ಯೂ, ಈ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ವರದಿಯಲ್ಲಿ ಏನಿದೆ ಎಂಬುದು ವಾದಿಗಳಿಗಾಗಲಿ, ಹೈಕೋರ್ಟ್‌ಗಾಗಲಿ ತಿಳಿದಿಲ್ಲ. ಹೀಗಿರುವಾಗ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಸಿಬಲ್ ವಾದಿಸಿದರು.
ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ, ಈ ಹಿಂದೆ ದೂರುದಾರ ಸ್ನೇಹಮಯಿ ಕೃಷ್ಣ ಅವರೇ ಪ್ರಕರಣವನ್ನು ಸಿಬಿಐ ಅಥವಾ ಲೋಕಾಯುಕ್ತ ತನಿಖೆಗೆ ವಹಿಸುವಂತೆ ಹೇಳಿದ್ದನ್ನು ನ್ಯಾಯಪೀಠದ ಗಮನಕ್ಕೆ ತಂದರು.
2024ಸೆ.27ರಂದು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸುವವರೆಗೂ ದೂರುದಾರ ಸ್ನೇಹಮಯಿ ಕೃಷ್ಣ ಅವರು, ಲೋಕಾಯುಕ್ತ ಮತ್ತು ಸಿಬಿಐ ಸಂಸ್ಥೆಗಳ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದರು. ಈಗ ಅವರೇ ಲೋಕಾಯುಕ್ತ ತನಿಖೆ ಮೇಲೆ ನಂಬಿಕೆ ಇಲ್ಲ ಎಂದು ಹೇಳುತ್ತಿರುವುದು ಎಷ್ಟು ಸರಿ. ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ 1 ಗಂಟೆಯ ನಂತರ ಅರ್ಜಿ ಸಲ್ಲಿಸಿದ ದೂರುದಾರರ ನಡವಳಿಕೆಯನ್ನು ಪರಿಶೀಲಿಸಬೇಕು ಎಂದು ಮನವಿ ಮಾಡಿದರು.
ಸುಪ್ರೀಂಕೋರ್ಟ್‌ಗೆ ಮೇಲ್ಮನವಿ
ನ್ಯಾಯಾಲಯದ ತೀರ್ಪಿನ ಕುರಿತು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ ಅವರು, ಕಾನೂನು ಹೋರಾಟ ಮುಂದುವರಿಸುತ್ತೇನೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು. ಲೋಕಾಯುಕ್ತ ತನಿಖೆಯ ಬಗ್ಗೆ ನಮಗೆ ನಂಬಿಕೆ ಇಲ್ಲ ಎಂದು ಹೇಳಿದರು.
ಪ್ರಕರಣವೇನು?
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ 14 ನಿವೇಶನಗಳನ್ನು ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ಅಕ್ರಮ ನಡೆದಿದೆ; ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಕಾನೂನು ಉಲ್ಲಂಘಿಸಿ ತಮ್ಮ ಪತ್ನಿಗೆ ಮೈಸೂರಿನ ಪ್ರತಿಷ್ಠಿತ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡಿಸಿದ್ದಾರೆ ಎಂದು ಆರೋಪಿಸಿ ಕೋರ್ಟ್ ಮೊರೆಹೋಗಿರುವ ದೂರುದಾರರಲ್ಲಿ ಒಬ್ಬರಾಗಿರುವ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಎರಡೂ ಕಡೆಯ ವಕೀಲರ ವಾದ ಆಲಿಸಿ, ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಅಲ್ಲದೆ, ಪ್ರಕರಣದ ಕುರಿತು ಈಗಾಗಲೇ ತನಿಖೆ ನಡೆಸಿರುವ ಲೋಕಾಯುಕ್ತ ಪೊಲೀಸರು ತಮ್ಮ ಅಂತಿಮ ವರದಿಯನ್ನು ಸಲ್ಲಿಸಲು ಕೂಡ ನ್ಯಾಯಾಲಯ ಕಾಲಾವಕಾಶ ನೀಡಿದ್ದು, ಸಿಬಿಐ ತನಿಖೆ ಕುರಿತು ಅರ್ಜಿಯ ಮೇಲಿನ ಆದೇಶ ಪ್ರಕಟಿಸುವವರೆಗೆ ಲೋಕಾಯುಕ್ತ ಅಂತಿಮ ವರದಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಹಾಗಾಗಿ ಜ.27ರಂದು ಪ್ರಕರಣದ ವಿಚಾರಣೆ ಆರಂಭವಾಗುತ್ತಿದ್ದಂತೆ ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಮಧ್ಯಂತರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದರು.