
ಡೆಂಗ್ಯೂ ಪರೀಕ್ಷೆಗೆ ಖಾಸಗಿ ಆಸ್ಪತ್ರೆಗಳಿಂದ ಹೆಚ್ಚಿನ ದರ; ಸರ್ಕಾರದಿಂದಲೇ ದರ ನಿಗದಿಗೆ ನಿರ್ಧಾರ
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಸಭೆ ನಡೆಸಲಾಗಿದ್ದು, ಹಲವು ಪ್ರಮುಖ ತೀರ್ಮಾನ ತೆಗೆದುಕೊಳ್ಳಲಾಗಿದೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಸಭೆ ನಡೆಸಲಾಗಿದ್ದು, ಹಲವು ಪ್ರಮುಖ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಸಭೆಯ ನಂತರ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂಐ ರಾವ್ ಅವರು, ʻರಾಜ್ಯದಲ್ಲಿ ಇಲ್ಲಿಯವರೆಗೆ 6187 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ನಿರಂತರವಾಗಿ ಮಳೆ ಬಂದರೆ, ಸೊಳ್ಳೆಗಳು ಉತ್ಪತ್ತಿಯಾಗುವುದಿಲ್ಲ. ಆದರೆ, ಬಿಟ್ಟು ಬಿಟ್ಟು ಮಳೆಯಾಗುತ್ತಿರುವುದರಿಂದ ಸೊಳ್ಳೆಗಳ ಹರಡುವಿಕೆ ಹೆಚ್ಚಾಗುತ್ತಿದೆ. ಡೆಂಗ್ಯೂ ಸೊಳ್ಳೆಗಳ ಸಂಖ್ಯೆ ಹೆಚ್ಚಳವಾಗುವುದಕ್ಕೆ ಈ ವಾತಾವರಣ ಕಾರಣವಾಗಿದೆ. ಈ ಮಾದರಿಯ ಹವಾಮಾನ ಪರಿಸ್ಥಿತಿಯಿಂದಾಗಿ ಡೆಂಗ್ಯೂ ರೋಗ ಉಲ್ಬಣವಾಗುತ್ತಿದೆʼ ಎಂದರು.
ʻಡೆಂಗ್ಯೂ ಸೋಂಕು ನಿಯಂತ್ರಣ ಮಾಡುವ ಉದ್ದೇಶದಿಂದ NS1 ಕಿಟ್ ಗಳನ್ನು ಖರೀದಿಸಲಾಗಿದೆ. ಪ್ಲೇಟ್ ಲೆಟ್ಸ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈ ಸಂಬಂಧ ಈಗಾಗಲೇ ಬ್ಲಡ್ ಯೂನಿಟ್‌ಗಳೊಂದಿಗೆ ಮಾತುಕತೆ ನಡೆಸಲಾಗಿದೆʼ ಎಂದರು.
ಸರ್ಕಾರದಿಂದಲೇ ದರ ನಿಗದಿಗೆ ನಿರ್ಧಾರ
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಡೆಂಗ್ಯೂ ಪರೀಕ್ಷೆಗೆ ಖಾಸಗಿ ಆಸ್ಪತ್ರೆಗಳಿಂದ ಹೆಚ್ಚಿನ ದರ ನಿಗದಿ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಮುಂದಾಗಿದೆ.
ಡೆಂಗ್ಯೂ ಪರೀಕ್ಷೆಗೆ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ದರ ನಿಗದಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದಲೇ ದರ ನಿಗದಿ ಮಾಡಲಾಗುವುದು. ಅಲ್ಲದೇ ನಿತ್ಯವೂ ಡೆಂಗ್ಯೂ ರಿಪೋರ್ಟ್ ಪ್ರಕಟಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಡೆಂಗ್ಯೂ ಪ್ರಕರಣ ವರದಿ ಮಾಡಲು ಸೂಚನೆ
ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸೇರಿದಂತೆ ಎಲ್ಲ ಆಸ್ಪತ್ರೆಗಳೂ ಡೆಂಗ್ಯೂ ಪ್ರಕರಣಗಳ ವರದಿಯನ್ನು ನಿತ್ಯವೂ ನೀಡಬೇಕು. ಆದರೆ, ಕೆಲವು ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಪ್ರಕರಣಗಳ ಬಗ್ಗೆ ವರದಿ ಮಾಡುತ್ತಿಲ್ಲ. ಹೀಗಾಗಿ, ಡೆಂಗ್ಯೂ ಪ್ರಕರಣಗಳನ್ನು ವರದಿ ಮಾಡದ ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಾಗಿ ಡೆಂಗ್ಯೂ ಪ್ರಕರಣಗಳನ್ನು ವರದಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಬೆಂಗಳೂರಿನ ಸೂಕ್ಷ್ಮ ಪ್ರದೇಶದ ಸರ್ವೇಗೆ ಸೂಚನೆ
ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲದೇ ಎಲ್ಲ ವಲಯಗಳ ಮನೆಗಳಲ್ಲೂ ಸರ್ವೇ ನಡೆಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅಲ್ಲದೇ ಈ ಸಂಬಂಧ ವಿವಿಧ ಇಲಾಖೆಗಳೊಂದಿಗೂ ಸಭೆ ನಡೆಸಲಾಗಿದೆ. ಡೆಂಗ್ಯೂ ಸೋಂಕು ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಬೆಂಗಳೂರಿನ 4.60 ಲಕ್ಷ ಮನೆಗಳಲ್ಲಿ ಸರ್ವೇ
ʻಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬಿಬಿಎಂಪಿ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದೆʼ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ (ಸಾರ್ವಜನಿಕ) ಡಾ. ಸೈಯದ್ ಸಿರಾಜುದ್ದೀನ್ ಮದಿನಿ ತಿಳಿಸಿದ್ದಾರೆ.
ದ ಫೆಡರಲ್ ಕರ್ನಾಟಕದೊಂದಿಗೆ ಮಾತನಾಡಿದ ಅವರು, ʻಬೆಂಗಳೂರಿನಲ್ಲಿ ಇಲ್ಲಿಯ ವರೆಗೆ (ಜುಲೈ 1) 4.60 ಲಕ್ಷ ಮನೆಗಳಲ್ಲಿ ಸರ್ವೇ ಮಾಡಲಾಗಿದ್ದು, 13 ಸಾವಿರ ಮನೆಗಳಲ್ಲಿ ಲಾರ್ವಾಗಳು ಕಂಡು ಬಂದಿದೆ. ಅವುಗಳನ್ನು ಬಿಬಿಎಂಪಿ ಸಿಬ್ಬಂದಿ ನಾಶಪಡಿಸಿದ್ದಾರೆ. ಡೆಂಗ್ಯೂ ಜಾಗೃತಿಗೆ ಸಂಬಂಧಿಸಿದಂತೆ ನರ್ಸಿಂಗ್ ವಿದ್ಯಾರ್ಥಿಗಳ ನೆರವನ್ನೂ ಪಡೆಯಲಾಗುತ್ತಿದೆʼ ಎಂದು ಮಾಹಿತಿ ನೀಡಿದರು.
ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಜುಲೈ 4ಕ್ಕೆ ಸಭೆ
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಮಂಗಳವಾರ ವಿವಿಧ ಇಲಾಖೆಯ ಸಭೆ ನಡೆಸಿದೆ. ಇದೀಗ ಜುಲೈ 4ರಂದು ಆರೋಗ್ಯ ಸಚಿವ ದಿನೇಶ್ಗುಂಡೂ ರಾವ್ ಅವರ ಅಧ್ಯಕ್ಷತೆಯಲ್ಲಿ ವಿಡಿಯೋ ಕನ್ಫೆರೆನ್ಸ್ ನಡೆಯಲಿದೆ. ಈ ಸಭೆಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆಯ ಆಯುಕ್ತರು ಅಗತ್ಯ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್ ಅವರು ದ ಫೆಡರಲ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಎಷ್ಟಿದೆ
ರಾಜ್ಯದಲ್ಲಿ 6,187 ಜನರಿಗೆ ಡೆಂಗ್ಯೂ ಸೋಂಕು ದೃಢಪಟ್ಟಿದ್ದು, 5 ಜನ ಡೆಂಗ್ಯೂವಿನಿಂದ ಇಲ್ಲಿಯವರೆಗೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆದರೆ, ಬೆಂಗಳೂರಿನಲ್ಲಿ ಡೆಂಗ್ಯೂವಿನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವುದನ್ನು ಬಿಬಿಎಂಪಿಯೇ ಖಚಿತಪಡಿಸಿದ್ದರೂ, ಇದನ್ನು ದಾಖಲೆಯಲ್ಲಿ (ಬುಲೆಟಿನ್)ನಲ್ಲಿ ಸೇರಿಸಿಲ್ಲ.
ಡೆಂಗ್ಯೂವಿನಿಂದ ಸಾವನ್ನಪ್ಪಿರುವವರ ವಿವರ
ಜಿಲ್ಲೆ | ಸಾವು
|
ಶಿವಮೊಗ್ಗ | 01 |
ಧಾರವಾಡ | 01 |
ಹಾವೇರಿ | 01 |
ಹಾಸನ | 02 |