
ಸುಪ್ರೀಂ ಕೋರ್ಟ್ ಹಾಗೂ ಬಾನು ಮುಷ್ತಾಕ್
ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ, ಶುಕ್ರವಾರ ವಿಚಾರಣೆ
ಕರ್ನಾಟಕ ಸರ್ಕಾರವು 2025ರ ಸಾಲಿನ ಮೈಸೂರು ದಸರಾವನ್ನು ಉದ್ಘಾಟಿಸಲು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿತ್ತು.
ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರು ಉದ್ಘಾಟಿಸುವುದನ್ನು ವಿರೋಧಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ, ಈ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಸೆಪ್ಟೆಂಬರ್ 22ರಂದು ದಸರಾ ಉದ್ಘಾಟನಾ ಸಮಾರಂಭ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ಅರ್ಜಿಯ ತುರ್ತು ವಿಚಾರಣೆಗೆ ಒಪ್ಪಿರುವ ಸರ್ವೋಚ್ಚ ನ್ಯಾಯಾಲಯವು ಸೆಪ್ಟೆಂಬರ್ 19, ಶುಕ್ರವಾರದಂದು ವಿಚಾರಣೆ ನಡೆಸಲು ಸಮ್ಮತಿಸಿದೆ.
ಕರ್ನಾಟಕ ಸರ್ಕಾರವು 2025ರ ಸಾಲಿನ ಮೈಸೂರು ದಸರಾವನ್ನು ಉದ್ಘಾಟಿಸಲು ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರು ವಿರೋಧಿಸಿ, ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (PIL) ಸಲ್ಲಿಸಿದ್ದರು.
ಮುಷ್ತಾಕ್ ಅವರು ಈ ಹಿಂದೆ "ಹಿಂದೂ ವಿರೋಧಿ" ನಿಲುವುಗಳನ್ನು ವ್ಯಕ್ತಪಡಿಸಿದ್ದಾರೆ, ಆದ್ದರಿಂದ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವುದು ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ. ಹಿಂದೂ ಧಾರ್ಮಿಕ ಆಚರಣೆಗಳನ್ನು ಒಳಗೊಂಡಿರುವ ನಾಡಹಬ್ಬವನ್ನು ಅನ್ಯ ಧರ್ಮದವರು ಉದ್ಘಾಟಿಸುವುದು ಸಂವಿಧಾನದ 25 ಮತ್ತು 26ನೇ ವಿಧಿಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು.
ಕರ್ನಾಟಕ ಹೈಕೋರ್ಟ್ ತೀರ್ಪು ಏನು?
ಸೆಪ್ಟೆಂಬರ್ 15ರಂದು ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠ, ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿತ್ತು. "ಬಾನು ಮುಷ್ತಾಕ್ ಅವರು ಲೇಖಕಿ, ವಕೀಲೆ, ಸಾಮಾಜಿಕ ಕಾರ್ಯಕರ್ತೆ ಹಾಗೂ ಬೂಕರ್ ಪ್ರಶಸ್ತಿ ವಿಜೇತೆಯಾಗಿದ್ದು, ಒಬ್ಬ ಸಾಧಕಿಯಾಗಿದ್ದಾರೆ. ದಸರಾವನ್ನು ಈ ಹಿಂದೆ ವಿಜ್ಞಾನಿಗಳು, ಶಿಕ್ಷಣ ತಜ್ಞರು, ಸ್ವಾತಂತ್ರ್ಯ ಹೋರಾಟಗಾರರು ಉದ್ಘಾಟಿಸಿದ್ದು, ಸಾಧಕರನ್ನು ಆಹ್ವಾನಿಸುವುದು ಸರ್ಕಾರದ ಸಂಪ್ರದಾಯವಾಗಿದೆ." "ಬೇರೆ ಧರ್ಮದ ಹಬ್ಬಗಳಲ್ಲಿ ನಿರ್ದಿಷ್ಟ ಧರ್ಮದ ವ್ಯಕ್ತಿ ಭಾಗವಹಿಸುವುದರಿಂದ ಸಂವಿಧಾನದ ಅಡಿಯಲ್ಲಿ ಲಭ್ಯವಿರುವ ಹಕ್ಕುಗಳ ಉಲ್ಲಂಘನೆಯಾಗುವುದಿಲ್ಲ. ಮುಷ್ತಾಕ್ ಅವರನ್ನು ಆಹ್ವಾನಿಸಿರುವುದು ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿಲ್ಲ." ಎಂದು ನ್ಯಾಯಪೀಠ ತಿಳಿಸಿತ್ತು.