ಪರೀಕ್ಷೆ ಮೌಲ್ಯಮಾಪನ | ಸರ್ಕಾರಕ್ಕೆ ಮತ್ತೆ ಮುಖಭಂಗ; ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್‌
x

ಪರೀಕ್ಷೆ ಮೌಲ್ಯಮಾಪನ | ಸರ್ಕಾರಕ್ಕೆ ಮತ್ತೆ ಮುಖಭಂಗ; ಮೇಲ್ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್‌

10 ನೇ ತರಗತಿ ಅರ್ಧ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಸುಪ್ರಿಂಕೋರ್ಟ್‌ ನೀಡಿದ್ದ ಆದೇಶದ ಮರುಪರಿಶೀಲನೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್‌ ದ್ವಿಸದಸ್ಯ ಪೀಠ ಮತ್ತೆ ತಿರಸ್ಕರಿಸಿದೆ.


10 ನೇ ತರಗತಿ ಅರ್ಧವಾರ್ಷಿಕ ಪರೀಕ್ಷೆ ಮೌಲ್ಯಮಾಪನಕ್ಕೆ ಅವಕಾಶ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಸರ್ಕಾರಕ್ಕೆ ಮತ್ತೆ ಮುಖಭಂಗವಾಗಿದೆ.

2024 ಅ. 21ರಂದು ನೀಡಿದ್ದ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ನೇತೃತ್ವದ ದ್ವಿಸದಸ್ಯ ಪೀಠ, ಕರ್ನಾಟಕ ಸರ್ಕಾರದ ಮನವಿಯನ್ನು ತಿರಸ್ಕರಿಸಿದೆ.

2024-25ರ ಶೈಕ್ಷಣಿಕ ವರ್ಷದ 10ನೇ ತರಗತಿಯ ಅರ್ಧವಾರ್ಷಿಕ ಪರೀಕ್ಷೆ ನಡೆಸಲಾಗಿದೆ. ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲು ಅವಕಾಶ ನೀಡುವಂತೆ ಕೋರಲಾಗಿತ್ತು. ಕರ್ನಾಟಕ ಸರ್ಕಾರದ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ಅರ್ಧವಾರ್ಷಿಕ ಪರೀಕ್ಷೆಯ ಮೌಲ್ಯಾಂಕದಿಂದ ಹತ್ತನೇ ತರಗತಿಯ ಪರೀಕ್ಷೆ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹಾಗಾಗಿ ಅರ್ಜಿಯನ್ನು ಪರಿಗಣಿಸಲಾಗದು ಎಂದು ಹೇಳಿ ತಿರಸ್ಕರಿಸಿತು.

ಕರ್ನಾಟಕ ಸರ್ಕಾರ ಕಳೆದ ವರ್ಷ ಅಕ್ಟೋಬರ್‌ನಲ್ಲಿ 5, 8 ಹಾಗೂ 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಹೈಕೋರ್ಟ್ ಏಕಸದಸ್ಯ ಪೀಠವು 2024ರ ಮಾರ್ಚ್ 6ರಂದು ರಾಜ್ಯ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿತ್ತು. ಏಕಸದಸ್ಯ ಪೀಠದ ಆದೇಶದ ಕುರಿತು ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಆಗ ಏಕಸದಸ್ಯ ಪೀಠದ ತೀರ್ಪಿಗೆ ವಿಭಾಗೀಯ ಪೀಠ ತಡೆ ನೀಡಿ, ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿ ಮಧ್ಯಂತರ ಆದೇಶ ಹೊರಡಿಸಿತ್ತು.

ಸರ್ಕಾರದ ಮಾನ್ಯತೆ ಪಡೆದ ಅನುದಾನರಹಿತ ಶಾಲೆಗಳು ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದವು. ಅ. 21ರಂದು ಸುಪ್ರೀಂಕೋರ್ಟ್ ನ್ಯಾಯಪೀಠ, ಮುಂದಿನ ಆದೇಶದವರೆಗೂ 8, 9 ಮತ್ತು 10ನೇ ತರಗತಿ ಅರ್ಧವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ನಿರ್ಬಂಧಿಸಿ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಅಲ್ಲದೇ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ವಿದ್ಯಾರ್ಥಿಗಳಿಗೆ ಏಕೆ ಅನಗತ್ಯ ಕಿರುಕುಳ ನೀಡುತ್ತಿದ್ದೀರಿ?, ಬೋರ್ಡ್‌ ಪರೀಕ್ಷೆಯನ್ನು ಸ್ವಯಂ ಪ್ರತಿಷ್ಠೆಯ ವಿಷಯವಾಗಿ ತೆಗೆದುಕೊಂಡು ಸರ್ಕಾರ ಈ ರೀತಿ ವರ್ತಿಸಬಾರದು. ನಿಜವಾಗಿಯೂ ವಿದ್ಯಾರ್ಥಿಗಳ ಹಿತದ ಬಗ್ಗೆ ಕಾಳಜಿ ಇದ್ದರೆ ಒಳ್ಳೆಯ ಶಾಲೆಗಳನ್ನು ತೆರೆಯಿರಿ ಎಂದು ಕಿವಿಮಾತು ಹೇಳಿತ್ತು.

ಇದಾದ ಬಳಿಕ ಮತ್ತೆ ರಾಜ್ಯ ಸರ್ಕಾರ, ಸುಪ್ರೀಂಕೋರ್ಟ್‌ ಆದೇಶ ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಸಿತ್ತು. ಆದರೆ, ಅರ್ಧವಾರ್ಷಿಕ ಪರೀಕ್ಷೆಯ ಮೌಲ್ಯಮಾಪನ ಕೋರಿದ ಕರ್ನಾಟಕ ಸರ್ಕಾರದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂಕೋರ್ಟ್ ನಿರಾಕರಿಸಿತಲ್ಲದೇ ಮುಂದಿನ ವಿಚಾರಣೆಯನ್ನು ಜನವರಿಯಲ್ಲಿ ನಡೆಸಲಾಗುವುದು ಎಂದು ಹೇಳಿದೆ.

Read More
Next Story