
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.
ಬಿಎಂಟಿಸಿ ಸಿಬ್ಬಂದಿ ಮೇಲಿನ ಹಲ್ಲೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕಿಡಿ: ಕ್ರಮಕ್ಕಾಗಿ ಗೃಹ ಸಚಿವರಿಗೆ ಪತ್ರ
ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಿಬ್ಬಂದಿ ಮೇಲೆ ಪದೇ ಪದೇ ನಡೆಯುತ್ತಿರುವ ಹಲ್ಲೆ ಮತ್ತು ಅವಮಾನದ ಘಟನೆಗಳ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ಅವರು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಕೋರಿದ್ದಾರೆ.
ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಘಟನೆಯನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ತಾನು ಕೋರಿದ ಸ್ಥಳದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಒಬ್ಬ ಮಹಿಳಾ ಟೆಕ್ಕಿ, ಬಿಎಂಟಿಸಿ ಬಸ್ ಚಾಲಕ ಹುಸೇನ್ ಅವರ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆಘಾತ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಬೆಳ್ಳಂದೂರು ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿದೆ.
"ಇಂತಹ ಘಟನೆಗಳು ಹೆಚ್ಚಾಗುತ್ತಿವೆ. ಕೆಲವು ಕಿಡಿಗೇಡಿಗಳು ಚಾಕುವಿನಿಂದ ಹಲ್ಲೆ ಸೇರಿದಂತೆ ಪ್ರಾಣಕ್ಕೆ ಸಂಚಕಾರ ತರುವ ಪ್ರಯತ್ನಗಳನ್ನೂ ಮಾಡಿದ್ದಾರೆ. ಈ ಹಿಂದೆಯೂ ಇಂತಹ ಪ್ರಕರಣಗಳ ಬಗ್ಗೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದೇನೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ವಿವರಿಸಲು ಸೂಚಿಸಿದ್ದೇನೆ. ಆದರೂ ಘಟನೆಗಳು ಮರುಕಳಿಸುತ್ತಿವೆ," ಎಂದು ಸಚಿವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಸಿಬ್ಬಂದಿ ಹಿತರಕ್ಷಣೆಗೆ ಸರ್ಕಾರದ ಬದ್ಧತೆ
ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ಯಾವುದೇ ಸಾರಿಗೆ ಸಂಸ್ಥೆಯ ಸಿಬ್ಬಂದಿಯ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. "ನಮ್ಮ ಸಿಬ್ಬಂದಿಯಿಂದ ಯಾವುದೇ ಪ್ರಮಾದವಾದರೆ, ದೂರು ಸಿಕ್ಕ ತಕ್ಷಣ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆದರೆ, ಕಾನೂನು ಮೀರಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಘಟನೆಗಳನ್ನು ತಡೆಯಬೇಕು," ಎಂದು ಅವರು ಒತ್ತಾಯಿಸಿದ್ದಾರೆ.
ಪತ್ರದ ಪ್ರತಿಯನ್ನು ಬೆಂಗಳೂರು ಮಹಾನಗರದ ಪೊಲೀಸ್ ಆಯುಕ್ತರಿಗೆ ಕಳುಹಿಸಲಾಗಿದ್ದು, ತಕ್ಷಣದ ಕ್ರಮಕ್ಕಾಗಿ ಒತ್ತಡ ಹೇರಲಾಗಿದೆ.

