
Operation Sindoor | ರಾಜ್ಯದಲ್ಲಿರುವ ಪಾಕಿಸ್ತಾನ ಪ್ರಜೆಗಳ ಮಾಹಿತಿ ಇಲ್ಲ; ಸಿಎಂ ಹೇಳಿಕೆಗೆ ಪ್ರತಿಪಕ್ಷಗಳ ಆಕ್ರೋಶ
ರಾಜ್ಯದಲ್ಲಿ ಗಡಿಪಾರಾದ ನಂತರದಲ್ಲಿ ಎಷ್ಟು ಮಂದಿ ಪಾಕಿಸ್ತಾನ ಪ್ರಜೆಗಳಿದ್ದಾರೆ ಎಂಬ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಟೀಕೆಗೆ ಗುರಿಯಾಗಿದ್ದಾರೆ.
ರಾಜ್ಯದಿಂದ ಪಾಕಿಸ್ತಾನ ಪ್ರಜೆಗಳನ್ನು ಗಡಿಪಾರು ಮಾಡಿದ ನಂತರದಲ್ಲಿ ಎಷ್ಟು ಮಂದಿ ಉಳಿದುಕೊಂಡಿದ್ದಾರೆ ಎಂಬ ಮಾಹಿತಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೇ ಇಲ್ಲದಿರುವುದು ಟೀಕೆಗೆ ಗುರಿಯಾಗಿದೆ.
ಪಹಲ್ಗಾಮ್ ದಾಳಿ ಬಳಿಕ ಕೇಂದ್ರ ಸರ್ಕಾರ ಕೈಗೊಂಡಿದ್ದ ಹಲವು ರಾಜತಾಂತ್ರಿಕ ನಿರ್ಧಾರಗಳಲ್ಲಿ ಪಾಕಿಸ್ತಾನ ಪ್ರಜೆಗಳನ್ನು ಹೊರ ಕಳುಹಿಸುವುದೂ ಒಂದಾಗಿತ್ತು. ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯ ಸರ್ಕಾರ ಪಾಕ್ ಪ್ರಜೆಗಳನ್ನು ಪಟ್ಟಿ ಮಾಡಿ, ವಾಪಸ್ ಕಳುಹಿಸಿಕೊಟ್ಟಿತ್ತು. ಆದರೆ, ಪಾಕ್ ಪ್ರಜೆಗಳನ್ನು ಇನ್ನೂ ರಾಜ್ಯದಲ್ಲಿ ಉಳಿದುಕೊಂಡಿದ್ದು ವಾಪಸ್ ಕಳುಹಿಸಿಲ್ಲ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು.
ಬಿಜೆಪಿ ನಾಯಕರ ಈ ಆರೋಪಕ್ಕೆ ಗುರುವಾರ ಮಂಡ್ಯದಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನೆಲೆಸಿದ್ದ ಪಾಕಿಸ್ತಾನದ ಪ್ರಜೆಗಳನ್ನು ಪತ್ತೆ ಹಚ್ಚಿ ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಬಿಟ್ಟರೆ ಬಹುತೇಕ ಎಲ್ಲರನ್ನು ಗಡಿಪಾರು ಮಾಡಲಾಗಿದೆ ಎಂದು ಹೇಳಿದ್ದಾರೆ.
ಹಾಗಾದರೆ, ಎಷ್ಟು ಜನ ಉಳಿದುಕೊಂಡಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.
ಅಣುಕು ಪ್ರದರ್ಶನ
ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ಭಾರತ ದಾಳಿ ಮಾಡಿರುವ ಹಿನ್ನೆಲೆಯಲ್ಲಿ ಪ್ರತಿ ಸೂಚನೆಯನ್ನು ರಾಜ್ಯ ಸರ್ಕಾರ ಪಾಲಿಸುತ್ತಿದೆ. ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ. ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ದಾಳಿಯನ್ನು ನಾವೆಲ್ಲರೂ ಬೆಂಬಲಿಸಿದ್ದೇವೆ. ಈಗ ಎರಡು ದೇಶಗಳ ಮಧ್ಯೆ ಉದ್ವಿಗ್ನ ಸ್ಥಿತಿ ನಿರ್ಮಾಣ ಆಗಿರುವುದರಿಂದ ರಾಜ್ಯದ ಅಣೆಕಟ್ಟುಗಳ ಸುರಕ್ಷತೆಗೆ ಒತ್ತು ನೀಡಲಾಗಿದೆ. ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂಬ ಕಾರಣ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದೇವಾಲಯಗಳಲ್ಲಿ ಪೂಜೆ
ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪೂಜೆ ಮಾಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿದ್ದ ಪಾಕಿಸ್ತಾನದ ಬಹುತೇಕ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.