ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ರದ್ದು: ಆದೇಶ
ಬೆಂಗಳೂರು,ಮಾ.8- ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸೇವೆಗಳಿಗೆ ನೀಡಿದ್ದ ಅನುಮತಿಯನ್ನು ಸರ್ಕಾರ ಹಿಂಪಡೆದಿದೆ.
ಈ ಸೇವೆಗಳು ʻಮಹಿಳೆಯರಿಗೆ ಅಸುರಕ್ಷಿತʼ ಮತ್ತು ಮೋಟಾರು ವಾಹನ ಕಾಯ್ದೆಯನ್ನು ಉಲ್ಲಂಘಿಸುತ್ತವೆ ಎಂದು 2021 ರ ಕರ್ನಾಟಕ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಯೋಜನೆಯನ್ನು ಹಿಂಪಡೆಯಲಾಗಿದೆ ಎಂದು ಆದೇಶ ಹೇಳಿದೆ. ʻಕೆಲವು ಖಾಸಗಿ ಆ್ಯಪ್ ಆಧಾರಿತ ಸಂಸ್ಥೆಗಳು ಮೋಟಾರು ವಾಹನ ಕಾಯ್ದೆ ಮತ್ತು ಅದರ ನಿಯಮಗಳನ್ನು ಉಲ್ಲಂಘಿಸುತ್ತಿವೆ. ಸಾರಿಗೆಯಲ್ಲದ ಉದ್ದೇಶಕ್ಕಾಗಿ ಈ ವಾಹನಗಳನ್ನು ಬಳಸುತ್ತಿರುವುದು ಗಮನಕ್ಕೆ ಬಂದಿದೆʼ ಎಂದು ಹೇಳಿದೆ.
ಬೈಕ್ ಸವಾರರೊಂದಿಗೆ ಆಟೋರಿಕ್ಷಾ, ಮ್ಯಾಕ್ಸಿಕ್ಯಾಬ್ ಮಾಲೀಕರು ಮತ್ತು ಚಾಲಕರ ನಡುವೆ ಆಗಾಗ ಘರ್ಷಣೆಗಳು ನಡೆಯುತ್ತಿದ್ದವು ಮತ್ತು ಈ ಸಂಬಂಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಯೋಜನೆಯಿಂದ ಸಾರಿಗೆ ಇಲಾಖೆಗೆ ತೆರಿಗೆ ವಸೂಲಿ ಕಷ್ಟವಾಗಿದೆ.
ಈ ವಾಹನಗಳಲ್ಲಿ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಯೋಜನೆಯನ್ನು ರದ್ದುಗೊಳಿಸಿದೆ ಎಂದು ಅಧಿಸೂಚನೆ ತಿಳಿಸಿದೆ.
ಓಲಾ, ಊಬರ್ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ನಿರ್ಧಾರವನ್ನು ಸ್ವಾಗತಿಸಿದ್ದಾರೆ. ʻ2021 ರಲ್ಲಿ ಬಿಜೆಪಿ ಸರ್ಕಾರ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿತ್ತು. ನಾವು ಇದರ ವಿರುದ್ಧ ಆಂದೋಲನ ನಡೆಸಿದ್ದೇವೆ. ಈ ಅನುಮತಿ ಆಟೋ ಮತ್ತು ಟ್ಯಾಕ್ಸಿ ಚಾಲಕರ ಜೀವನದ ಮೇಲೆ ಪರಿಣಾಮ ಬೀರಿದೆ ಎಂದು ಹೇಳಿದ್ದೆವುʼ ಎಂದು ಹೇಳಿದರು.