Election 2024: ಏ.20 ರಿಂದ ಪ್ರಧಾನಿ ಮೋದಿ, ಅಮಿತ್ ಶಾ ಕರ್ನಾಟಕ ಪ್ರವಾಸ
x

Election 2024: ಏ.20 ರಿಂದ ಪ್ರಧಾನಿ ಮೋದಿ, ಅಮಿತ್ ಶಾ ಕರ್ನಾಟಕ ಪ್ರವಾಸ


ಬೆಂಗಳೂರು, ಏ 17 - ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 20 ರಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಯೋಜಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಬುಧವಾರ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಭೆ ನಡೆಯಲಿದ್ದು, ಸಿದ್ಧತೆಗಳು ನಡೆಯುತ್ತಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏ. 23 ಮತ್ತು 24 ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 23 ರಂದು ಶಾ ಬೆಂಗಳೂರಿನ ವಿವಿಧೆಡೆ ರೋಡ್ ಶೋ ನಡೆಸಲಿದ್ದಾರೆ. ಮರುದಿನ ಚಿಕ್ಕಮಗಳೂರು, ತುಮಕೂರು ಮತ್ತು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕುಮಾರ್ ಹೇಳಿದರು.

ಏಪ್ರಿಲ್ 23 ರಂದು ಯಶವಂತಪುರದಲ್ಲಿ ರೋಡ್ ಶೋ, ನಂತರ ಯಲಹಂಕದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಸಂಜೆ ಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ರೋಡ್ ಶೋ ಮತ್ತು ಆನಂತರ ಮಹದೇವಪುರ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಯಲಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 24 ರಂದು ಬೆಳಗ್ಗೆ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆ ಮತ್ತು ಮಧ್ಯಾಹ್ನ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಹಾಗೂ ಸಂಜೆ ಹುಬ್ಬಳ್ಳಿಯಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಏಪ್ರಿಲ್ 24 ರಂದು ಕರ್ನಾಟಕದಲ್ಲಿ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ, ಮಧ್ಯಾಹ್ನ ಮಡಿಕೇರಿಯಲ್ಲಿ ಸಾರ್ವಜನಿಕ ಸಭೆ ಹಾಗೂ ಸಂಜೆ ಉಡುಪಿಯ ಮಲ್ಪೆಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಏಪ್ರಿಲ್ 21 ರಂದು ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏಪ್ರಿಲ್ 24 ರಂದು ಕರ್ನಾಟಕದಲ್ಲಿ ಇರಲಿದ್ದಾರೆ ಎಂದು ಕುಮಾರ್ ಹೇಳಿದರು.

Read More
Next Story